Hassan Airport: ಹಾಸನ್ ಹೆಸರು ಬದಲಾವಣೆ; ಕನ್ನಡ ಬಾವುಟಕ್ಕೆ ಪ್ರತ್ಯೇಕ ಮಾನ್ಯತೆ; ವಿಮಾನ ನಿಲ್ದಾಣದ ಬಗ್ಗೆ ಅಪ್ಡೇಟ್ಸ್
ಹಾಸನ: ಹಾಸನ್ ಎಂದಿರುವ ಜಿಲ್ಲೆಯ ಹೆಸರನ್ನು ಹಾಸನ ಎಂದು ಪರಿವರ್ತಿಸುವ ನಿಟ್ಟಿನಲ್ಲಿ ಅನುಮೋದನೆ ಪಡೆದು ಕಾರ್ಯ ರೂಪಕ್ಕೆ ತರಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಹೇಳಿದ್ದಾರೆ.
ನಗರದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದ ವರೆಗೆ ಸುಮಾರು 3 ಸಾವಿರ ಅಡಿ ಉದ್ದದ ಕನ್ನಡ ಧ್ವಜ ಮೆರವಣಿಗೆಗೆ ಸಚಿವರು ಚಾಲನೆ ನೀಡಿದರು. ಹಾಸನದ ಎನ್.ಆರ್. ಸರ್ಕಲ್‌ನಲ್ಲಿ ಹೋಯ್ಸಳರ ಲಾಂಛನ ಸ್ಥಾಪನೆ ಮಾಡುವ ಕುರಿತು ಚಿಂತಿಸಲಾಗುವುದು. ಹಾಸನಕ್ಕೆ ಬಹುಮುಖ್ಯವಾಗಿ ಬೇಕಾಗಿರುವಂತಹ ನಾಲ್ಕು ಯೋಜನೆಗಳಾದ ವಿಮಾನ ನಿಲ್ದಾಣ, ಐಐಟಿ ಸ್ಥಾಪನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.

ನೆನೆಗುದಿಗೆ ಬಿದ್ದಿರುವ ಹಾಸನ ವಿಮಾಣ ನಿಲ್ದಾಣದ ಕಾಮಗಾರಿ ಮರು ಆರಂಭಗೊಳ್ಳಲು ಅಗತ್ಯವಿರುವ ಧನ ಸಹಾಯ ಒದಗಿಸಲು ಹಾಗೂ ಎದುರಾಗಿರುವ ಅಡಚಣೆಗಳನ್ನು ಪರಿಹರಿಸಲು ಬದ್ಧನಾಗಿದ್ದೇನೆ. ನಮ್ಮ ಸರ್ಕಾರದ ಅವಧಿ ಪೂರ್ಣಗೊಳ್ಳುವ ಮೊದಲು ವಿಮಾನ ನಿಲ್ದಾಣವನ್ನು ಉದ್ಘಾಟಿಸುವ ಗುರಿಯನ್ನಿಟ್ಟುಕೊಂಡು ಕೆಲಸ ಆರಂಭಿಸಲಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ಉದ್ಘಾಟನಾ ಹಂತದಲ್ಲಿವೆ. ಇನ್ನು ಐಐಟಿಯನ್ನು ತರುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಹಾಸನಾಂಬ ಉತ್ಸವ ಬಹಳ ಅದ್ಧೂರಿಯಾಗಿ ನಡೆಯುತ್ತಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳು ಸಂತೃಪ್ತಿಯೊಂದಿಗೆ ಹಿಂತಿರುಗುತ್ತಿದ್ದಾರೆ. ಕ್ರೀಡೋತ್ಸವ, ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಕಾರ್ಯಕ್ರಮಗಳು ಜನರನ್ನು ಹಾಸನ ಜಿಲ್ಲೆಗೆ ಕೈಬೀಸಿ ಕರೆಯುತ್ತಿವೆ ಎಂದಿದ್ದಾರೆ.
ಕನ್ನಡ ಬಾವುಟಕ್ಕೆ ಮಾನ್ಯತೆ
ಕರ್ನಾಟಕದ ಅಸ್ಮಿತೆಯಾಗಿರುವ ಕನ್ನಡ ಬಾವುಟಕ್ಕೆ ಪ್ರತ್ಯೇಕ ಮಾನ್ಯತೆ ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಘೋಷಣೆ ಹೊರಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾಸನ ವಿಮಾನ ನಿಲ್ದಾಣ ಕಾಮಗಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹೇಳಿದ್ದೇನು?
ಹಾಸನ ಜಿಲ್ಲೆಯ ಜನರ ಬಹುದಿನಗಳ ಕನಸಾಗಿರುವ ಬೂವನಹಳ್ಳಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಯೋಜನೆಯ ಬಾಕಿ ಕಾಮಗಾರಿಗಳು, ಹೆಚ್ಚುವರಿ ಭೂಸ್ವಾಧೀನ, ರನ್‌ವೇ ವಿಸ್ತರಣೆ ಹಾಗೂ ಇತರ ಮೂಲಸೌಕರ್ಯಗಳ ಅಭಿವೃದ್ಧಿಗೆ ಅಂದಾಜು ₹600 ಕೋಟಿ ಹೆಚ್ಚುವರಿ ಅನುದಾನದ ಅಗತ್ಯವಿದ್ದು, ಈ ಸಂಬಂಧ ಸಮಗ್ರ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಚಿವ ಸಂಪುಟದ ಮುಂದೆ ಮಂಡಿಸುವ ಮೂಲಕ ಅನುದಾನ ಮಂಜೂರು ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಬೂವನಹಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಯೋಜನೆ ಪೂರ್ಣಗೊಳ್ಳಲು ಎದುರಾಗಿರುವ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಭೇಟಿ ಕೈಗೊಳ್ಳಲಾಗಿದೆ. ಇದಕ್ಕೂ ಮುನ್ನ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿತ್ತು ಎಂದಿದ್ದಾರೆ.
ಹಾಸನ ವಿಮಾನ ನಿಲ್ದಾಣ ಯೋಜನೆಗಾಗಿ ಈಗಾಗಲೇ ಸುಮಾರು ₹200 ಕೋಟಿ ವೆಚ್ಚ ಮಾಡಲಾಗಿದೆ. ಈವರೆಗೆ 536 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಬದಲಾದ ಅಗತ್ಯಗಳಿಗೆ ಅನುಗುಣವಾಗಿ ವಿಮಾನ ನಿಲ್ದಾಣದ ರನ್‌ವೇ ವಿಸ್ತರಿಸಲು ಇನ್ನೂ 92 ಎಕರೆ ಹೆಚ್ಚುವರಿ ಭೂಮಿಯ ಅಗತ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ.


Click it and Unblock the Notifications
