ಯಡಿಯೂರಪ್ಪ ಬಂಧಿಸದಂತೆ ವಿಧಿಸಿದ್ದ ನಿರ್ಬಂಧ ಮುಂದುವರಿಕೆ
ಬೆಂಗಳೂರು, ಜೂನ್ 29: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಪ್ರಕರಣದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಂಧಿಸಿದಂತೆ ಪೊಲೀಸರಿಗೆ ವಿಧಿಸಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ಮುಂದುವರಿಸಿದೆ.
ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಯಡಿಯೂರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಮತ್ತು ಪ್ರಕರಣ ರದ್ದುಕೋರಿ ಪ್ರತ್ಯೇಕವಾಗಿ ಮಾಜಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ಆಕ್ಷೇಪ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
ಸರ್ಕಾರದ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಸರ್ಕಾರಿ ವಿಶೇಷ ಅಭಿಯೋಜಕರು, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಈಗಾಗಲೇ ವಿಚಾರಣಾ ನ್ಯಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಅಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಬೇಕಾಗಿದ್ದು ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶ ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿ ಆದೇಶಿಸಿತು.
ಕಂತಿನಲ್ಲಿ ವಿಚಾರಣೆ ಮಾಡಲಾಗದು: ಈ ಮಧ್ಯೆ, ಪೋಕ್ಸೋ ಪ್ರಕರಣದ ದೂರುದಾರೆಯ ಪುತ್ರ ಹಾಗೂ ಸಂತ್ರಸ್ತೆಯ ಸಹೋದರ ಶಶಾಂಕ್ ಸಿಂಗ್ ಪರ ವಕೀಲ ಎಸ್. ಬಾಲನ್ ಅವರು ಬಿ. ಎಸ್. ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಕೋರಿರುವ ಅರ್ಜಿಗೆ ಪೂರಕವಾಗಿ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆದೇಶಿಸಿರುವ ತೀರ್ಪುಗಳನ್ನು ಸಲ್ಲಿಸಬೇಕು. ಮುಂದಿನ ವಿಚಾರಣೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ಕಂತಿನಲ್ಲಿ ವಿಚಾರಣೆ ನಡೆಸಲಾಗದು ಎಂದು ಪೀಠ ಹೇಳಿತು. ಇದಕ್ಕೆ ಮುಂದಿನ ವಿಚಾರಣೆ ವೇಳೆಗೆ ತೀರ್ಪುಗಳನ್ನು ಸಲ್ಲಿಸಲಾಗುವುದು ಎಂದು ವಕೀಲರು ವಿವರಿಸಿದರು.
ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಯಡಿಯೂರಪ್ಪ ಅವರನ್ನು ಬಂಧಿಸಬಾರದು. ಸಿಐಡಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಪೀಠ ನಿರ್ದೇಶಿಸಿತ್ತು. ಅಲ್ಲದೆ, ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿಯಾದವರು. ಅವರು ಈ ಹಿಂದೆ ಶಾಸನ ರೂಪಕರಾಗಿದ್ದರು. ತಮ್ಮ ಜೀವನದ ಸಂಧ್ಯಾಕಾಲದಲ್ಲಿದ್ದಾರೆ. ಸ್ವಾಭಾವಿಕವಾಗಿಯೇ ಆರೋಗ್ಯದ ಸಮಸ್ಯೆಗಳಿರುತ್ತವೆ. ಇಂತಹ ವ್ಯಕ್ತಿಯ ಬಗ್ಗೆ ತನಿಖೆ ನಡೆಸುವಾಗ ಪೊಲೀಸರ ನಡೆಯ ಬಗ್ಗೆ ಸಂಶಯ ಬಾರದಂತೆ ಮುಂದುವರಿಯಬೇಕು. ಪ್ರತಿಕಾರದ ಮೇಲೆ ನಡೆದುಕೊಳ್ಳಲಾಗುತ್ತಿದೆ ಎಂಬ ಭಾವನೆ ಕೋರ್ಟ್‌ಗೆ ಮೂಡಬಾರದು ಎಂದು ತಿಳಿಸಿತ್ತು.












Click it and Unblock the Notifications