ಶೋಭಾ ಕರಂದ್ಲಾಜೆಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು, ಮಾರ್ಚ್ 23: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಗಳಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಇಬ್ಬರೂ ನಾಯಕರಿಗೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಿಲೀಫ್ ಸಿಕ್ಕಿದ್ದು, ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಬೆಂಗಳೂರಿನ ನಗರ್ತಪೇಟೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ ಸಮಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಸಂಬಂಧ ಶೋಭಾ ಕರಂದ್ಲಾಜೆ ಮತ್ತು ಅದೇ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆಯಾಗಿದೆ ಎಂದು ಕಾಟನ್ ಪೇಟೆ ಪೊಲೀಸರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೂಡಿದ್ದ ಪ್ರಕರಣದಲ್ಲಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಎರಡೂ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ರಾಜಕಾರಣಿಗಳು ಆಡುವ ಮಾತಿನ ಮೇಲೆ ನಿಗಾ ಇರಬೇಕು ಎಂದು ಆದೇಶಿಸಿದೆ. ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರದಿಂದ, ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣದಿಂದ ಲೋಸಕಭೆ ಚುನಾವಣೆ 2024ರ ಬಿಜೆಪಿ ಅಭ್ಯರ್ಥಿಗಳು.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ತಮಿಳುನಾಡಿಗೆ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ಸಂಬಂಧ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಾಗೂ ಅದರ ಸಂಬಂಧ 5ನೇ ಎಸಿಎಂಎಂ ನ್ಯಾಯಾಲಯದ ಮುಂದಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶೋಭಾ ಕರಂದ್ಲಾಾಜೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ತಡೆ ನೀಡಿತು. ಅಲ್ಲದೆ ಪ್ರತಿವಾದಿಗಳಾದ ಕಾಟನ್‌ಪೇಟೆ ಪೊಲೀಸರು ಹಾಗೂ ದೂರು ದಾಖಲಿಸಿದ್ದ ಚುನಾವಣಾ ನೀತಿ ಸಂಹಿತೆ ಸಂಚಾರಿ ದಳದ ಅಧಿಕಾರಿ ಎಂ. ಎನ್. ಶಿವರಾಜು ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಶೋಭಾ ಕರಂದ್ಲಾಜೆ ಪರ ವಕೀಲರು ವಾದ ಮಂಡಿಸಿ, ಇತ್ತಿಚಿಗೆ ನಗರ್ತಪೇಟೆಯಲ್ಲಿ ನಡೆದ ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅರ್ಜಿದಾರರು, ಒಬ್ಬ ವ್ಯಕ್ತಿ ತಮಿಳುನಾಡಿನಿಂದ ಬಂದು ಬಾಂಬ್ ಸ್ಪೋಟಿಸಿ ಹೋಗುತ್ತಾನೆ, ಮತ್ತೊಬ್ಬ ಕೇರಳದಿಂದ ಬಂದು ಆ್ಯಸಿಡ್ ದಾಳಿ ನಡೆಸುತ್ತಾನೆ, ಇನ್ನೊಬ್ಬ ದೆಹಲಿಯಿಂದ ಬಂದು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಾನೆ ಎಂದು ಹೇಳಿದ್ದರು. ಅದಕ್ಕೆ ಇದು ದೇಶದ ಜನರ ನಡುವೆ ದ್ವೇಷ ಹುಟ್ಟು ಹಾಕುವಂತಹದ್ದು, ಸಮುದಾಯಗಳ ನಡುವೆ ಕೋಮು ಪ್ರಚೋದನೆ ನೀಡುವಂತಹದ್ದು ಎಂದು ದೂರಿನಲ್ಲಿ ಹೇಳಲಾಗಿದೆ ಎಂದು ತಿಳಿಸಿದ್ದರು.
ಪ್ರಕರಣದ ಹಿನ್ನೆಲೆ: ಕಳೆದ ಕೆಲ ದಿನಗಳ ಹಿಂದೆ ನಗರ್ತಪೇಟೆಯಲ್ಲಿ ನಡೆಸಿದ ಪ್ರತಿಭಟನಾ ವೇಳೆ ತಮಿಳುನಾಡಿನಿಂದ ನಗರಕ್ಕೆ ಬಂದು ಬಾಂಬ್ ಸ್ಪೋಟ ಮಾಡ್ತಾರೆ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು. ಇದನ್ನು ತೀವ್ರವಾಗಿ ಖಂಡಿಸಿದ್ದ ತಮಿಳುನಾಡು ಸಿಎಂ ಸ್ಟಾಲಿನ್, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ವಿರೋಧ ವ್ಯಕ್ತವಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಿದ್ದರು.
ಈ ಮಧ್ಯೆ, ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು. ಅದರಂತೆ, ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಅದನ್ನು ರದ್ದುಪಡಿಸುವಂತೆ ಶೋಭಾ ಕರಂದ್ಲಾಜೆ ಹೈಕೋರ್ಟ್ ಮೆಟ್ಟಿಲೇರಿದ್ದರು.












Click it and Unblock the Notifications