CM Siddaramaiah: ಸಿಎಂ ರಾಜೀನಾಮೆಗೆ ಬಿಜೆಪಿ ಕೇಂದ್ರ ಸಚಿವರು, ಸಂಸದರ ಒತ್ತಡ, ಪ್ರತಿಭಟನೆ
ಬೆಂಗಳೂರು, ಸೆಪ್ಟಂಬರ್ 24: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯಗೆ ಭಾರೀ ಮುಖಭಂಗವಾಗಿದೆ. ಇದರ ಬೆನ್ನಲ್ಲೆ ಬಿಜೆಪಿಯ ಕೇಂದ್ರ ಸಚಿವರು, ಸಂಸದರು ಸೇರಿದಂತೆ ವಿವಿಧ ನಾಯಕರು ಸಿದ್ದರಾಮಯ್ಯನವರು ಸಿಎಂ ಸ್ಥಾನದ ರಾಜೀನಾಮಗೆ ಒತ್ತಾಯಿಸುತ್ತಿದ್ದಾರೆ. ಕೆಲವೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ.
ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನೀಡಿದ ತೀರ್ಪಿನ ಬಳಿಕ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಮುಡಾ ಹಗರಣದಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಬಡವರು ಮತ್ತು ದಲಿತರಿಗೆ ಮೀಸಲಾದ ಭೂಮಿಯನ್ನು ಕಾನೂನುಬಾಹಿರವಾಗಿ ವಶಪಡಿಸಿಕೊಂಡಿರುವ "ಭೂಗಳ್ಳರಿಗೆ" ಇದು ಎಚ್ಚರಿಕೆಯಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವುದು ನ್ಯಾಯೋಚಿತವೇ? ಎಂದು ಪ್ರಶ್ನಿಸಿದರು.
ಪ್ರಕರಣವನ್ನು ಸಿಬಿಐ ತನಿಖೆ ಮಾಡಲಿ
ಹೈಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರಿಗೆ ಕಪಾಳಮೋಕ್ಷವಾದಂತಾಗಿದೆ. ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿರುವ ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣ ಸಂಬಂಧ ಸಿಬಿಐನಿಂದ ತನಿಖೆ ನಡೆಯಬೇಕು.

ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸುವ ಯಾವ ಉದ್ದೇಶ ಇಲ್ಲ. ಇಷ್ಟೆಲ್ಲ ಆದರೂ ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯನವರು ಮುಂದುವರಿಯಬಾರದು. ಕೂಡಲೇ ರಾಜೀನಾಮೆ ನೀಡಬೇಕು ಎಂದು ಜೋಶಿಯವರು ಒತ್ತಾಯಿಸಿದರು.
ಸಿಎಂ ಸ್ಥಾನದಲ್ಲಿದ್ದುಕೊಂಡು ಭಂಡತನ ಸರಿಯಲ್ಲ
ಹೈಕೋರ್ಟ್ ತೀರ್ಪು ಹೊರ ಬಂದಾಗಿದೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು. ಇದರಲ್ಲಿ ಯಾವುದೇ ರೀತಿಯ ಭಂಡತನ ಸರಿಯಲ್ಲ. ಸಿಎಂ ಸಿದ್ದರಾಮಯ್ಯ ಅವರು ಸಾಚಾ ಆಗಿದ್ದರೆ ರಾಜಿನಾಮೆ ನೀಡಲಿ. ಮೊದಲು ರಾಜೀನಾಮೆ ಕೊಟ್ಟು ನಂತರ ಅವರು ತನಿಖೆ ಎದುರಿಸಬೇಕು. ಅಧಿಕಾರದಲ್ಲಿ ಕೊಂಡು ತನಿಖೆ ಎದುರಿಸಿದ್ರೆ ಅದು ನ್ಯಾಯಸಮ್ಮತವಾಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ಇನ್ನೂ ಕಾಂಗ್ರೆಸ್ ಹೈಕಮಾಂಡ್ ಈ ಕೂಡಲೇ ಸಿಎಂ ಸಿದ್ದರಾಮಯ್ಯ ರಾಜಿನಾಮೆ ಪಡೆಯಬೇಕು. ಇಲ್ಲದಿದ್ದರೆ ಒಬ್ಬ ಆರೋಪಿ ಸಿಎಂ ಹೇಗೆ ಮುಂದುವರಿಸಿತ್ತಿರಿ ಎಂದು ರಾಷ್ಟ್ರ ವ್ಯಾಪ್ತಿಯಲ್ಲಿ ಪ್ರಶ್ನೆ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಮಾತು ಎತ್ತಿದರೆ ಕಾಂಗ್ರೆಸ್ ನಾಯಕರು ಸಂವಿಧಾನದ ರಕ್ಷಕರು ಎನ್ನುತ್ತಾರೆ. ಆದರೆ ಸಂವಿಧಾನದತ್ತ ರಾಜ್ಯಪಾಲ ಅಸ್ತಿತ್ವ ಪ್ರಶ್ನೆ ಮಾಡುತ್ತಾರೆ. ಅರ್ಕಾವತಿ ಹಗರಣದಲ್ಲಿ ಮುಖ್ಯಮಂತ್ರಿಗೆ ಇಂತಹ ಸ್ಥಿತಿ ಬರಬೇಕಿತ್ತು ಎಂದು ಅವರು ಹಳೆಯದನ್ನು ನೆನಪಿಸಿದರು.
ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಮುನೇನಕೊಪ್ಪ
ಸಿದ್ದರಾಮಯ್ಯನವರ ಮೇಲಿನ ಮುಡಾ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂ ಹೈಕೋರ್ಟ್ ನೀಡಿರುವ ತೀರ್ಪಿನ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ಮುಡಾ ಹಗರಣ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ನಡೆಸಿತ್ತು. ಪಾದಯಾತ್ರೆ ಮಾಡಿತ್ತು. ಹೈಕೋರ್ಟ್ ನಿರ್ಧಾರದಿಂದ ಬಿಜೆಪಿಗೆ ದೊಡ್ಡ ಜಯ ಸಿಕ್ಕಿದೆ. ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಬಿಜೆಪಿ ಮುಖಂಡ, ಕಾರ್ಯಕರ್ತರಿಂದ ಪ್ರತಿಭಟನೆ
ಮುಡಾದಲ್ಲಿ ಅಕ್ರಮವಾಗಿ ಸೈಟು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ರಾಜ್ಯಪಾಲರ ನಿರ್ಧಾರ ಎತ್ತಿ ಹಿಡಿದಿದೆ. ಇದರಿಂದ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ನಿರ್ಧಾರ ಸರಿಯಾಗಿದೆ ಎಂದು ತಿಳಿಸಿದೆ. ಸದ್ಯ ಮುಖ್ಯಮಂತ್ರಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಾಸಕ ಅರವಿಂದ್ ಬೆಲ್ಲದ್ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿಗಳು ಈ ಕೂಡಲೇ ರಾಜೀನಾ ನೀಡಬೇಕು. ತನಿಖೆ ಎದುರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಹೈಕೋರ್ಟ್ ಆದೇಶವನ್ನು ಸಿಎಂ ಸಿದ್ದರಾಮಯ್ಯ ಪಾಲಿಸಬೇಕು ಎಂದರು.
ಇದೇ ರೀತಿ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕರ್ನಾಟಕ ಬಿಜೆಪಿ, ಜೆಡಿಎಸ್ ಕೆಲವು ನಾಯಕರು ಸಹ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿದೆ.












Click it and Unblock the Notifications