ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧದ ವಿಚಾರಣೆಗೆ ಕೋರ್ಟ್ ತಡೆ
ಬೆಂಗಳೂರು, ಜುಲೈ 11: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಇದರಿಂದಾಗಿ ಪ್ರಭಾಕರ್ ಭಟ್‌ಗೆ ಸದ್ಯಕ್ಕೆ ದೊಡ್ಡ ರಿಲೀಫ್ ಸಿಕ್ಕಿದ್ದು, ಅವರು ವಿಚಾರಣೆಯನ್ನು ಎದುರಿಸುವ ಅಗತ್ಯತೆ ಇಲ್ಲವಾಗಿದೆ. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: 2023ರ ಡಿಸೆಂಬರ್ 24ರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿನ ಸಾರ್ವಜನಿಕ ವೇದಿಕೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿದ್ದರು.
ಈ ಭಾಷಣದಲ್ಲಿ ಅವರು, "ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲ್ಲ. ಅವರಿಗೆ ದಿನಕ್ಕೊಬ್ಬ ಗಂಡ. ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ" ಎಂದು ಹೇಳಿದ್ದಾರೆ.
ಈ ಹೇಳಿಕೆಯು ಮಹಿಳೆಯರ ಖಾಸಗಿತನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲ ಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯಗಳನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿ ಉಂಟು ಮಾಡಿದ ಅಪರಾಧ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿನ್ ನಜೀರ್ ಅಹ್ಮದ್ (27) ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ 2023ರ ಡಿಸೆಂಬರ್ 26ರಂದು ದೂರು ನೀಡಿದ್ದರು.
ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಇತರರ ವಿರುದ್ಧ ಭಾರತೀಯ ದಂಡ ಸಂಹಿತೆ-1860ರ ಕಲಂ 354, 294, 509, 506, 153ಎ, 295, 295ಎ ಹಾಗೂ 298ರ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ದೂರಿನ ಅನ್ವಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಶ್ರೀರಂಗಪಟ್ಟಣ ಜೆಎಂಎಫ್‌ಸಿ ವಿಚಾರಣಾ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಸಿದ್ದರು, ವಿಚಾರಣೆ ನಡೆಯುತ್ತಿತ್ತು.












Click it and Unblock the Notifications