ಭವಾನಿ ರೇವಣ್ಣಗೆ ಜಾಮೀನು?, ಜೈಲು?; ಮಂಗಳವಾರ ತೀರ್ಪು
ಬೆಂಗಳೂರು, ಜೂನ್ 18: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಲಿದೆ.
ಭವಾನಿ ರೇವಣ್ಣಗೆ ಜಾಮೀನಾ? ಅಥವಾ ಜೈಲಾ? ಎಂಬುದು ನಿರ್ಧಾರವಾಗಲಿದೆ. ಕಳೆದ ವಿಚಾರಣೆ ವೇಳೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ರದ್ದುಗೊಳಿಸಿದರೆ ಎಸ್‌ಐಟಿ ಕೂಡಲೇ ಅವರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಿದೆ.

ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ಶುಕ್ರವಾರ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿತ್ತು.
ವಶಕ್ಕೆ ಪಡೆದು ವಿಚಾರಣೆ: ಈ ಹಿಂದಿನ ವಿಚಾರಣೆ ವೇಳೆ ಎಸ್‌ಐಟಿ ಪರ ವಕೀಲರು, ಭವಾನಿ ರೇವಣ್ಣ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಪ್ರಕರಣ ಸಂಬಂಧ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಯಾವುದೇ ಪ್ರಶ್ನೆಗೆ ಸರಿಯಾದ ಉತ್ತರ ನೀಡುತ್ತಿಲ್ಲ. ಇಡೀ ಪ್ರಕರಣದಲ್ಲಿ ಭವಾನಿ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ ಎಂದು ವಾದಿಸಿದ್ದರು.
ಸಂತ್ರಸ್ತೆಯ ಅಪಹರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಒಂದು ವೇಳೆ ತನಿಖೆಗೆ ಸಹಕರಿಸದಿದ್ದಲ್ಲಿ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. ಹೀಗಾಗಿ ಈಗಾಗಲೇ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸಬೇಕು ಎಂದು ನ್ಯಾಯಪೀಠದ ಮುಂದೆ ಮನವಿ ಮಾಡಿದ್ದರು.
ಭವಾನಿ ರೇವಣ್ಣ ಪರ ವಕೀಲರು, ಅರ್ಜಿದಾರರು ಈಗಾಗಲೇ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ ಮತ್ತು ಪೊಲೀಸರಿಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡುತ್ತಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ವಾದ ಮಂಡಿಸಿದ್ದರು. ವಾದ ಆಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ಪ್ರಕರಣದ ಹಿನ್ನೆಲೆ: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪ ಸಂಬಂಧ ಮೈಸೂರಿನ ಕೆ. ಆರ್. ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್. ಡಿ. ರೇವಣ್ಣ ಈಗಾಗಲೇ ಬಂಧನಕ್ಕೊಳಗಾಗಿದ್ದರು ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದಲ್ಲಿ ಭವಾನಿ ಅವರ ಹೆಸರು ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಭವಾನಿ ನಿರೀಕ್ಷಣಾ ಜಾಮೀನು ಕೋರಿದ್ದರು. ಅವರನ್ನು ಬಂಧಿಸದಂತೆ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್, ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಜೂನ್ 7ರಂದು ಸೂಚನೆ ನೀಡಿತ್ತು.
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ. ಆದ್ದರಿಂದ ಕೆ. ಆರ್. ನಗರ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಸಹ ಎಸ್‌ಐಟಿಗೆ ವರ್ಗಾವಣೆ ಮಾಡಲಾಗಿದೆ.












Click it and Unblock the Notifications