HD Kumaraswamy: ನಂಗೆ ಫ್ರೀ, ನಿಂಗೆ ಫ್ರೀ; ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲ
ಬೆಂಗಳೂರು, ಮೇ 24: ಎಲ್ಲರಿಗೂ ಉಚಿತ ಗ್ಯಾರಂಟಿ ಕೊಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ನಿಮಗೆ ಮತದಾರರು ಹಾದಿ-ಬೀದಿಯವರು ಆಗಿದ್ದಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ. ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದ ಈಗಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ವರಸೆ ಬದಲಿಸಿ, ಷರತ್ತುಗಳು ಅನ್ವಯ ಆಗುತ್ತವೆ ಎನ್ನುತ್ತಿದ್ದಾರೆ! ಇದ್ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಗ್ಯಾರಂಟಿಗಳ ಭರವಸೆ ನೀಡಿದ್ದೀರಿ. ಜಾರಿ ಮಾಡಿ ಎಂದು ಜನರು ಕೇಳುತ್ತಿದ್ದಾರೆ. ವಿದ್ಯುತ್ ಬಿಲ್ ಕಟ್ಟುತ್ತಿಲ್ಲ, ಬಸ್ ಟಿಕೆಟ್ ಪಡೆಯಲು ನಿರಾಕರಿಸುತ್ತಿದ್ದಾರೆ. ನುಡಿದಂತೆ ನಡೆಯಬೇಕು, ಮಾತು ತಪ್ಪಿದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ. ನಾವು ಜನರ ಪರ ನಿಲ್ಲುತ್ತೇವೆ ಎಂದು ಹೇಳಿದರು.
ನಾನು ಕೊಟ್ಟ ಮಾತು ತಪ್ಪಲ್ಲ, ಮಾತಿಗೆ ತಪ್ಪಿದರೆ ಒಂದು ಕ್ಷಣವೂ ಅಧಿಕಾರದಲ್ಲಿ ಇರಲ್ಲ ಅಂದಿದ್ದಾರೆ ಅವರು. ಅವರೆಲ್ಲ ಮಾಡಿರುವ ಭಾಷಣಗಳನ್ನು ಜನರು ನೋಡಿದ್ದಾರೆ, ಕೇಳಿದ್ದಾರೆ. ಎಲ್ಲರಿಗೂ ವಿದ್ಯುತ್ ಉಚಿತ ಎಂದು ಭಾಷಣದಲ್ಲಿ ಹೇಳಿದ್ದರು. ಈಗ ನೋಡಿದರೆ, ಅದಕ್ಕೆ ಮಾರ್ಗಸೂಚಿ ರಚನೆ ಆಗಬೇಕು ಎನ್ನುತ್ತಿದ್ದಾರೆ.

ಅವತ್ತು ವೀರಾವೇಶದಲ್ಲಿ ಮಾತಾಡಿ ಚಪ್ಪಾಳೆ ಗಿಟ್ಟಿಸಿಕೊಂಡರು. ಒಂದೇ ವಾರದಲ್ಲಿ ಅವರ ನಿಜವಾದ ಬಣ್ಣ ಬಯಲಾಗ್ತಿದೆ. ಇವರು ಜನರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಕಾದು ನೋಡೋಣ. ನಂತರ ಜನತೆಯ ಜತೆ ಸೇರಿ ಯಾವ ರೀತಿ ಹೋರಾಟ ಮಾಡಬೇಕೋ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.
ಹಾದಿ ಬೀದಿಯಲ್ಲಿ ಹೋಗೋರಿಗೆಲ್ಲಾ ಗ್ಯಾರಂಟಿ ಯೋಜನೆ ಕೊಡಕ್ಕಾಗಲ್ಲ ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಒಪ್ಪಲಾಗದು. ಮೊದಲು ಭಾಷಣ ಏನು ಮಾಡಿದ್ದರಲ್ಲ, ಅವತ್ತು ಭರವಸೆ ಕೊಡಬೇಕಾದಾಗಾ ನಿಮಗೆ ತಲೆ ಇರಲಿಲ್ಲವಾ. ಈಗ ಮತ ಕೊಟ್ಟವರೆಲ್ಲಾ ಹಾದಿಬೀದಿಯವರು ಆಗಿಬಿಟ್ರಾ.? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಎರಡು ದಿನಗಳ ಮಳೆ ಬೆಂಗಳೂರಿನ ಮೇಲೆ ಯಾವ ರೀತಿಯ ಪರಿಣಾಮ ಬೀರಿದೆ ಎನ್ನುವುದನ್ನು ನಾನು ಬಲ್ಲೆ. ಕಳೆದ ಹದಿನೈದು ವರ್ಷಗಳಿಂದ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಆಡಳಿತ ನಡೆಸಿವೆ. ಬೆಂಗಳೂರು ಈಗ ಪ್ರತಿ ಮಳೆಗಾಲದಲ್ಲಿಯೂ ಈ ಸಮಸ್ಯೆಗಳು ಆಗ್ತಿವೆ. ಇದರ ಬಗ್ಗೆ ರಾಷ್ಟ್ರೀಯ ಪಕ್ಷಗಳಿಗೆ ಚಿಂತೆ ಇದೆಯಾ? ಎಂದು ಕಿಡಿ ಕಾರಿದರು.












Click it and Unblock the Notifications