ಚುನಾವಣೆ ಎಂಬ ಚದುರಂಗದಾಟದಲ್ಲಿ ಬಿಜೆಪಿ ಬಿಸಿಲುಗುದರೆಯ ಮೇಲೆ ಸವಾರಿ: ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು,ಮಾರ್ಚ್‌25: 2023 ರ ವಿಧಾನಸಭಾ ಚುನಾವಣಾ ಹಿನ್ನಲೆ ಭರ್ಜರಿ ಪ್ರಚಾರ ನಡೆಸುತ್ತಿರುವ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಸಾಕಷ್ಟು ತಂತ್ರಗಾರಿಗೆ ಮುಂದಾಗಿದ್ದು, ಎಲ್ಲಾ ಸಮುದಾಯದ ಮತ ಸೆಳೆಯಲು ಮುಂದಾಗಿದೆ.

ಈಗಾಗಲೇ ವಿವಿಧ ಸಮುದಾಯಗಳ ಅಭಿವೃದ್ದಿಗಾಗಿ ನಿಗಮಗಳನ್ನ ಸ್ಥಾಪಿಸಿರುವ ಬಸವರಾಜ ಬೊಮ್ಮಾಯಿ ಅವರ ಬಿಜೆಪಿ ಸರ್ಕಾರವು ಎಲ್ಲಾ ಸಮುದಾಯಗಳನ್ನು ಸಮಾಧಾನ ಪಡಿಸಲು ಯತ್ನಿಸುತ್ತಿದೆ.

ಚುನಾವಣೆ ಹೊತ್ತಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಗೆ ಒಪ್ಪಿಗೆ ನೀಡಿದ್ದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ನಿರ್ಧರಿಸಿದ್ದು, ರಾಜ್ಯ ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಟ್ವೀಟರ್‌ ಮೂಲಕ ಕಿಡಿಕಾರಿದ್ದಾರೆ.

HD Kumaraswamy Fierce Attack Against BJP Government

ರಾಜ್ಯ ಬಿಜೆಪಿ ಸರಕಾರ ಪ್ರತಿಯೊಂದರಲ್ಲಿಯೂ ರಾಜಕೀಯ ಮಾಡುತ್ತದೆ, ಪ್ರತಿಯೊಂದರಲ್ಲಿಯೂ ಚುನಾವಣೆಯನ್ನೇ ಕಾಣುತ್ತದೆ! ಸಂಪುಟದಲ್ಲಿ ಸಭೆಯ ಮೀಸಲಾತಿ ಹಕೀಕತ್ತೇ ಒಂದು ಖತರ್ನಾಕ್ ನಾಟಕ. ಕೊಡಲು ಕೈ ಬಾರದು, ಕೊಡಲೂ ಆಗದು. ಹಣೆಗೆ ಮಣೆಯಿಂದ ಬಾರಿಸಿಕೊಳ್ಳುವುದೂ ಎಂದರೆ ಇದೆ. ಪಾಪದ ಪಾಶ ಬಿಜೆಪಿ ಬೆನ್ನುಬಿದ್ದಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಎಂಬ ಚದುರಂಗದಾಟದಲ್ಲಿ ಬಿಜೆಪಿ ಬಿಸಿಲುಗುದರೆಯ ಮೇಲೆ ಸವಾರಿ ಮಾಡುತ್ತಿದೆ, ಅಷ್ಟೇ ಅಲ್ಲ; ಕ್ರೂರ ವ್ಯಾಘ್ರನ ಮೇಲೂ ಕುಳಿತು ಕುರುಡಾಗಿ ಸರ್ಕಸ್‌ ಮಾಡುತ್ತಿದೆ. ಸಾಗು, ಇಲ್ಲವೇ ಹೋಗು ಎನ್ನುವ ದುಸ್ಥಿತಿಯಲ್ಲಿ ತೋಯ್ದಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಮತದ ಹೆಸರಿನಲ್ಲಿ ಮತಯುದ್ಧ ಗೆಲ್ಲಬಹುದೆಂದು ಚಟಕ್ಕೆ ಬಿದ್ದಿರುವ ಬಿಜೆಪಿ ಈಗ ಸರ್ವಜನರ ಕಲ್ಯಾಣದ ಪ್ರತೀಕವಾದ ಕರ್ನಾಟಕದಲ್ಲಿ ಮೀಸಲು ಕಳ್ಳಾಟ ಆಡಿದೆ. ಗೆಲ್ಲಲೇಬೇಕು, ಗೆಲ್ಲದಿದ್ದರೆ ಇನ್ನೊಬ್ಬರ ತಟ್ಟೆಗೆ ಕೈ ಹಾಕು, ಆಗದಿದ್ದರೆ ಕಸಿದುಕೋ.. ಇದೇ ಕಮಲಪಕ್ಷದ ಕುಟಿಲತೆ ಎಂದು ಟೀಕಿಸಿದ್ದಾರೆ.

HD Kumaraswamy Fierce Attack Against BJP Government

ಮೂರೂವರೆ ವರ್ಷದಿಂದ ಗಾಳಿಯಲ್ಲಿ ಗಾಳೀಪಟ ಹಾರಿಸಿಕೊಂಡೇ ಕಾಗಕ್ಕಗುಬ್ಬಕ್ಕನ ಕಥೆ ಹೇಳಿದ್ದ ಬಿಜೆಪಿ ಚುನಾವಣೆ ಗಿಮಿಕ್ಕಿನ ಸಂಪುಟ ಸಭೆಯಲ್ಲಿ ಮೀಸಲು ತುಪ್ಪವನ್ನು ಜನರ ಹಣೆಗೆ ಸವರುವ ಬೂಟಾಟಿಕೆ ನಡೆಸಿದೆ. ಕಲ್ಲಬೆಕ್ಕು ಕಣ್ಮುಚ್ಚಿ ಹಾಲು ಕುಡಿಯಲು ಹೊರಟಿದೆ. ಒಬ್ಬರ ಅನ್ನ ಕಸಿದುಕೊಂಡು ಇನ್ನೊಬ್ಬರ ಹೊಟ್ಟೆ ತುಂಬಿಸಬಹುದು ಎನ್ನುವ ಬಿಜೆಪಿಗರ ರಕ್ಕಸಚಾಳಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಆಶಯಕ್ಕೆ ಶಾಶ್ವತ ಸಮಾಧಿ ಕಟ್ಟುವಂತಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯೇ ಇಲ್ಲದವರ ನಡವಳಿಕೆ ಇದು ಎಂದು ಟ್ವೀಟ್‌ ಮಾಡಿದ್ದಾರೆ.

ಮೀಸಲು ಕೊಡುವುದು ತಪ್ಪಲ್ಲ, ಆದರೆ, ತನ್ನ ಹಿಡೆನ್‌ ಅಜೆಂಡಾವನ್ನು ಮೀಸಲಿನೊಳಕ್ಕೂ ನುಸುಳಿಸಿದ ಬಿಜೆಪಿ ನರಿ ರಾಜಕಾರಣ ಆಘಾತಕಾರಿ. ಸಾಮಾಜಿಕ ನ್ಯಾಯದಿಂದಲೇ ಇಡೀ ದೇಶಕ್ಕೆ ಮೇಲ್ಪಂಕ್ತಿಯಾಗಿದ್ದ ಕರ್ನಾಟಕವನ್ನು ಮೀಸಲು ಮೂಲಕವೇ ವಿಭಜಿಸಿ ಮತಫಸಲು ತೆಗೆಯುವ ದುರಾಲೋಚನೆಯೊಂದಿಗೆ ಬಿಜೆಪಿ, ಸಾಮಾಜಿಕ ನ್ಯಾಯಕ್ಕೆ ಚಟ್ಟ ಕಟ್ಟಿ ಸ್ಮಶಾಣ ಕೇಕೆ ಹಾಕುತ್ತಿದೆ.

ಒಳ ಮೀಸಲು ಎನ್ನುವುದು ಒಡೆಯಲಾಗದ ಕಗ್ಗಂಟೇನಲ್ಲ. ಬಿಜೆಪಿ ಸರಕಾರಕ್ಕೆ ಇಚ್ಛಾಶಕ್ತಿ ಇಲ್ಲವಷ್ಟೇ. ಆದರೆ, ಚುನಾವಣೆ ಹೊತ್ತಿನಲ್ಲಿ ಜಾತಿ ಜಾತಿಗಳ ನಡುವೆ ವೈಮನಸ್ಸು ತಂದು ಉರಿಯುವ ಕಿಚ್ಚಿನಲ್ಲಿ ಚಳಿ ಕಾಯಿಸಿಕೊಳ್ಳಬೇಕು ಎನ್ನುವುದೇ ಬಿಜೆಪಿಯ ಅಸಲಿ ಆಟ. ಮಾಜಿ ಪ್ರಧಾನಿಗಳಾದ ಎಚ್‌ ಡಿ ದೇವೇಗೌಡರು ಮುಸ್ಲೀಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4ರಷ್ಟು ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಿ ಬದುಕುಗಳನ್ನು ಸುಟ್ಟು ಹಾಕುವ ದುಷ್ಟತನವಲ್ಲದೆ ಮತ್ತೇನೂ ಅಲ್ಲ.

ಬಿಜೆಪಿ ಪಾಪದಕೊಡ ಭರ್ತಿ ಆಗಿದೆ. ರಾಜ್ಯವನ್ನು ಧರ್ಮದ ಹೆಸರಿನಲ್ಲಿ ವಿಭಜಿಸಿ, ಜಾತಿಜಗಳಕ್ಕೆ ತುಪ್ಪ ಸುರಿಯುತ್ತಿದೆ. ಅರಗಿನ ಮನೆಯಲ್ಲಿ ಪಾಂಡವರಿಗೆ ಕೊಳ್ಳಿ ಇಡಲು ಹೋಗಿ ಮುಂದೊಮ್ಮೆ ತಾವೇ ಎಸಗಿದ ಪಾಪಕುಂಡದಲ್ಲಿ ಬೆಂದುಹೋದ ಕೌರವರಂತೆ, ಬಿಜೆಪಿಗರು ಮದವೇರಿ ಮೆರೆಯುತ್ತಿದ್ದಾರೆ.ಉರಿಯುತ್ತಿರುವ ಜನರ ಒಡಲು ತಣ್ಣಗಾಗುವುದಿಲ್ಲ. ನೆನಪಿರಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+