ನನ್ನನ್ನು ಕೆಣಕಬೇಡಿ, ನನ್ನ ಹತ್ರ ಟನ್ ಗಟ್ಟಲೆ ದಾಖಲೆಗಳಿವೆ: ಡಿಕೆಶಿಗೆ ನೇರ ಎಚ್ಚರಿಕೆ ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು, ಏಪ್ರಿಲ್ 05: ನನ್ನ ಹತ್ರ ಟನ್ ಗಟ್ಟಲೆದಾಖಲೆಗಳಿವೆ. ಸುಖಾಸುಮ್ಮನೆ ನನ್ನನ್ನು ಕೆಣಕಬೇಡಿ ನನ್ನನ್ನು ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದರು. ನಾನು ಕನಕಪುರದಲ್ಲಿ ಮಾತ್ರ ಬಂಡೆ ಒಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಳ್ಳಾರಿಗೆ ನನಗೂ ಏನು ಸಂಬಂಧ ಎಂದು ಹೇಳಿಕೊಂಡಿದ್ದಾರೆ. ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳು ಇವೆ. ಗಾಳಿಯಲ್ಲಿ ಗುಂಡು ಹೊಡೆಯುತ್ತಿಲ್ಲ ನಾನು, ಇರುವ ಸತ್ಯ ಹೇಳುತ್ತಿದ್ದೇನೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಈ ಕುರಿತು ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್ ಡಿ ಕುಮಾರಸ್ವಾಮಿ ಅವರು, ಈ ಸರಕಾರಕ್ಕೆ ನಾನು ನೇರವಾಗಿ ಹೇಳುತ್ತಿದ್ದೇನೆ. ನನ್ನ ಮೇಲಷ್ಟೇ ರಾಜಕೀಯ ಹಗೆತನ ಸಾಧಿಸುತ್ತಿರುವುದು ಅಷ್ಟೇ ಅಲ್ಲ, ರಾಜ್ಯದ ಜನರನ್ನು ಕಿತ್ತು ತಿನ್ನುತ್ತಿರುವ ಈ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡುತ್ತಿದ್ದೇನೆ. ಸವಾಲು ಹಾಕಲು ಇಲ್ಲಿಗೆ ಬಂದಿದ್ದೇನೆ. ಇಂದಿನಿಂದ ಈ ಜನ ವಿರೋಧಿ ಸರ್ಕಾರದ ವಿರುದ್ಧ ನೇರ ಯುದ್ದ ಆರಂಭ ಮಾಡುತ್ತಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಗುಡುಗಿದರು.

2003- 2004ರಲ್ಲಿ ಅವರು ಎಸ್.ಎಂ. ಕೃಷ್ಣ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದರು. ಅದಿರಿನ ಮಣ್ಣಿನ ನೆಪದಲ್ಲಿ ಸಾವಿರಾರು ಟನ್ ಕಬ್ಬಿಣದ ಅದಿರನ್ನು ಬಳ್ಳಾರಿಯಲ್ಲಿ ಕದ್ದು ಸಾಗಿಸಿದರು. ಆ ಅದಿರು ಎಲ್ಲಿಗೆ ಹೋಯಿತು? ಏನು ಮಾಡಿದರು. ಅವರು ಯಾರಿಗೆಲ್ಲ ಪತ್ರ ಬರೆದು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ನನ್ನ ಬಳಿ ದಾಖಲೆಗಳು ಇವೆ ಎಂದು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಉಪ ಮುಖ್ಯಮಂತ್ರಿ ನನ್ನನ್ನು ಕೆಣಕುತ್ತಿದ್ದಾರೆ. ಸುಖಾಸುಮ್ಮನೆ ನನ್ನ ವಿರುದ್ಧ ರಾಜಕೀಯ ಹಗೆತನ ಸಾಧಿಸುತ್ತಿದ್ದಾರೆ. ನಾನು ಸುಮ್ಮನಿರಲು ಸಾಧ್ಯ ಇಲ್ಲ ಅಲ್ಲವೇ? ಅವರ ಒಂದೊಂದೇ ಹಗರಣಗಳನ್ನು ಬಯಲಿಗೆ ಎಳೆಯುತ್ತೇನೆ. ಅವರು ಹಗರಣಗಳ ಮಹಾನಾಯಕ. ಈ ಕ್ಷಣದಿಂದ ಈ ಸರ್ಕಾರದ ವಿರುದ್ಧ ಸಮರ ಆರಂಭ ಮಾಡಿದ್ದೇನೆ. ಅದಕ್ಕೆ ಈ ಮಾಧ್ಯಮಗೋಷ್ಠಿ ಕರೆದಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಾಪ.. ಅವರಿಗೆ ಏನೂ ಗೊತ್ತಿಲ್ಲ. ನನಗೆ ಕನಕನಪುರ ಅಷ್ಟೇ ಸಾಕು. ಬಳ್ಳಾರಿಗೆ ಯಾಕೆ ಹೋಗಲಿ ಎಂದು ಹೇಳಿದ್ದಾರೆ. ಸಂಬಂಧ ಇಲ್ಲ ಎಂದಾದರೆ ಅದಿರು ಮಣ್ಣಿನ ಬಗ್ಗೆ ಖನಿಜ ಇಲಾಖೆಗೆ ಹಾಗೂ ಖನಿಜ ಸಂಪನ್ಮೂಲ ಇಲಾಖೆಗೆ ಪತ್ರಗಳನ್ನು ನಿರಂತರವಾಗಿ ಯಾಕೆ ಬರೆದರು? ಅಧಿಕಾರಿಗಳ ಮೇಲೆ ಯಾಕೆ ಒತ್ತಡ ಹಾಕಿದರು? ರಸ್ತೆಗೆ ಮಣ್ಣು ಬೇಕು ಎಂದು ಬಳ್ಳಾರಿಯಿಂದ ಅದಿರು ಮಣ್ಣು ತರಿಸಿಕೊಂಡರು. ಅತ್ಯಂತ ಗುಣಮಟ್ಟದ ಅದಿರು ಇದ್ದ ಮಣ್ಣನ್ನು ಏನು ಮಾಡಿದರು? ಎಂದು ಪ್ರಶ್ನೆ ಮಾಡಿದರು. ಉಪ ಮುಖ್ಯಮಂತ್ರಿ ಎನ್ನುವ ವ್ಯಕ್ತಿ ಎಷ್ಟು ಕಂಪನಿಗಳ ಹೆಸರಿನಲ್ಲಿ ವ್ಯವಹಾರ ನಡೆಸುತ್ತಿದ್ದಾರೆ. ಏಳು ಕಂಪನಿಗಳ ಹೆಸರಿನಲ್ಲಿ ಅವರು ವ್ಯವಹಾರ ನಡೆಸಿ ಪತ್ರ ವ್ಯವಹಾರವನ್ನೂ ನಡೆಸಿದ್ದಾರೆ. ಎಲ್ಲಾ ದಾಖಲೆಗಳು ಇವೆ. ಅದಷ್ಟು ಬೇಗ ಬಿಡುಗಡೆ ಮಾಡುತ್ತೇನೆ
ಬೆಂಗಳೂರಿನ 198 ವಾರ್ಡ್ ಗಳಲ್ಲಿಯೂ ನಮಗೆ ಶಕ್ತಿ ಇಲ್ಲ. ಆದರೆ ಇರುವ ಅಲ್ಪ ಸ್ವಲ್ಪ ಕಾರ್ಯಕರ್ತರ ಶಕ್ತಿ ಬಳಸಿಕೊಂಡು ಅವರನ್ನು ಸಂಘಟಿಸಿ ಪಕ್ಷವನ್ನು ಮುನ್ನಡೆಸುತ್ತೇವೆ. ಬೆಂಗಳೂರಿನಲ್ಲಿ ಆಗುತ್ತಿರುವ ಅನಾಹುತ, ಮಾಡಬೇಕಾದ ಕೆಲಸಗಳ ಬಗ್ಗೆ ಜನಾಂದೋಲನ ಮಾಡುತ್ತೇವೆ. ಜನಗಳನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ. ಪಕ್ಷ ಸಂಘಟನೆ ಮಾಡಬೇಕು ಎನ್ನುವುದು ಬೇರೆ. ರಾಜಧಾನಿಯನ್ನು ಕಾಂಗ್ರೆಸ್ ಸರಕಾರ ಹೇಗೆಲ್ಲ ಸುಲಿಗೆ ಮಾಡುತ್ತಿದೆ ಎಂಬುದನ್ನು ಜನರಿಗೆ ಹೇಳಬೇಕು. ದೇಶದ ಎಲ್ಲಾ ಭಾಗದ ಜನರೂ ನಗರದಲ್ಲಿ ಆಶ್ರಯ ಪಡೆದು ಬದುಕುತ್ತಿದ್ದಾರೆ. ಹೀಗಾಗಿ ಕನ್ನಡ, ಇಂಗ್ಲಿಷ್ ಸೇರಿ ಎಲ್ಲಾ ಭಾಷೆಗಳಲ್ಲಿ ಕರಪತ್ರ ಮುದ್ರಿಸಿ ಜಾಗೃತಿ ಮೂಡಿಸುತ್ತಿವೆ. ಸರ್ಕಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ಜೆಡಿಎಸ್ - ಬಿಜೆಪಿ ಹೊಂದಾಣಿಕೆ ಸಮಸ್ಯೆ ಇಲ್ಲ
ಜೆಡಿಎಸ್ - ಬಿಜೆಪಿ ಬಿನ್ನಾಭಿಪ್ರಾಯ ವಿಚಾರಕ್ಕೆ ಮಾತನಾಡಿದ ಕೇಂದ್ರ ಸಚಿವರು, ಬಿಜೆಪಿ ಜೊತೆ ಮೈತ್ರಿ ಉತ್ತಮವಾಗಿದೆ. ಯಾವ ಹೊಂದಾಣಿಕೆಯ ಕೊರತೆಯು ಇಲ್ಲ. ಸಮನ್ವಯ ಸಮಿತಿ ರಚನೆ ಬಗ್ಗೆ ಸುರೇಶ್ ಬಾಬು ಅವರ ಅಭಿಪ್ರಾಯ ಹೇಳಿದ್ದಾರೆ. ನಿಖಿಲ್ ಕೂಡ ಮಾತನಾಡಿದ್ದಾರೆ. ನಾನು ಈ ಬಗ್ಗೆ ಬಿಜೆಪಿ ಎಲ್ಲಾ ನಾಯಕರ ಜತೆ ಮಾತನಾಡುತ್ತೇನೆ. ಅಲ್ಲದೆ, ನಮ್ಮಲ್ಲಿ ವಿಶ್ವಾಸದ ಕೊರತೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶಕ್ಕೆ ಉತ್ತಮ ಕೆಲಸಗಳು ಆಗುತ್ತಿವೆ ಎಂದು ತಿಳಿಸಿದರು.












Click it and Unblock the Notifications