ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ
ಬೆಂಗಳೂರು, ಮಾರ್ಚ್ 28: ರಾಜ್ಯ ಸರ್ಕಾರಿ ನೌಕರರಿಗೆ ಗುರುವಾರ ಸಂಜೆ ಸಿಹಿ ಸುದ್ದಿ ಸಿಕ್ಕಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ಸರ್ಕಾರಿ ನೌಕರರ ಆಶೋತ್ತರ ಈಡೇರಿಸಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನೌಕರರ ಮೂಲ ವೇತನದ 4.25ರಷ್ಟು ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿತ್ತು. ಕಳೆದ ಬಾರಿ ಶೇ 1.75ರಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಶೇ 2.75ರಷ್ಟು ಹೆಚ್ಚಳವಾಗಿದೆ. ಅಂದರೆ ಮೂಲ ವೇತನದ ಶೇ 3.75ರಿಂದ 6.50 ಗೆ ಏರಿಕೆ ಮಾಡಲಾಗಿದೆ. ಜನವರಿ 01, 2019ರಿಂದ ಪೂರ್ವನ್ವಯವಾಗುವಂತೆ ಜಾರಿಗೆ ಬರಲಿದೆ.
ಈ ಕೊಡುಗೆಯಿಂದ ಸುಮಾರು 6 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ತುಟ್ಟಿಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಅಂದಾಜು 760 ಕೋಟಿ ರೂ. ಹೆಚ್ಚಿಗೆ ಹೊರೆಯಾಗಲಿದೆ.

ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರು, ಸರ್ಕಾರದ ಸಹಾಯಾನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳದ ಲಾಭ ದೊರೆಯಲಿದೆ.
ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.
ತುಟ್ಟಿ ಭತ್ಯೆ(dearness allowance) : ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.












Click it and Unblock the Notifications