ಸಿದ್ದರಾಮಯ್ಯ ಸಕಲ ಕಲೆಗಳ ಸಿದ್ಧಕರ್ಮಿ, ಗಲೀಜು ಕೆಲಸ ಬೆಣ್ಣೆಯಿಂದ ಬಂದ ವಿದ್ಯೆ!: ಎಚ್‌ಡಿಕೆ
ಬೆಂಗಳೂರು, ಆಗಸ್ಟ್ 23: ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಪ್ರಾರಬ್ಧ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದನ್ನೂ ಅರ್ಥ ಮಾಡಿಕೊಂಡಿದ್ದೇನೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ, ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಯವರು ಮುಡಾ ಹಗರಣ ಆರೋಪ ಹೊತ್ತ ಸಿದ್ದರಾಮಯ್ಯ ಅವರ ಮೇಲೆ ಚಾಟಿ ಬೀಸಿದ್ದಾರೆ.
ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ಒಂದಷ್ಟು ಸಮಜಾಯಿಸಿ ನೀಡಿದ್ದರು. ನನ್ನ ಬರವಣಿಗೆ ಪೋರ್ಜರಿ ಆಗಿದೆ ಎಂದು ಹೇಳಿದ್ದರು. ಇದರ ವಿರುದ್ಧ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಯವರು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಸಾಲು ಸಾಲು ಪ್ರಶ್ನೆಗಳನ್ನು ಅವರ ಮುಂದಿಟ್ಟಿದ್ದಾರೆ.

ಸಿದ್ದರಾಮಯ್ಯನವರೇ ನಿಮ್ಮ ವಿರುದ್ಧ ಬಂದ ಮುಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಮಾಡಿ ಅಧಿಕಾರದಲ್ಲೇ ಉಳಿದುಕೊಂಡು ಇನ್ನಷ್ಟು ಲೂಟಿ ಹೊಡೆಯಬೇಕು ಎನ್ನವು ನಿಮ್ಮ ಧನದಾಹದ ಹಪಾಹಪಿಯನ್ನು ನಾಣು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಕಾಲೆಳೆದಿದ್ದಾರೆ.
ವೈಟ್‌ನರ್‌ನಿಂದ ಕಪ್ಪು ಚುಕ್ಕೆ ತೆಗೆಯುವ ಯತ್ನ
ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಪೋರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ, ಪಲಾಯನ ನನ್ನ ಜಾಯಮಾನವಲ್ಲ ಎಂದಿದ್ದೀರಿ. ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? ಬಂತು.
40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್‌ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ?

ಮುಡಾ ಪ್ರಕರಣ ಸಂಬಂಧ ನೀವು, ನಿಮ್ಮ ಸಕುಟುಂಬ ಪರಿವಾರ ಸರ್ಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್ ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್‌ನರ್ ಅಳಿಸುತಾ ಸಿದ್ದರಾಮಯ್ಯನವರೇ? ಎಂದು ಅವರು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.
ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ
ಇದು ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಎಂದಿದ್ದೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ! 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ... ಸತ್ತ ಜೀವದ ರುಚಿ ನೆಕ್ಕಲು..ಎಂದು ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಿಸ್ಟರ್ ಸಿದ್ದರಾಮಯ್ಯ ನಾನು ಕಾನೂನು ಪಂಡಿತ, ವಕೀಲ ಎನ್ನುವ ನೀವು 2011ರಲ್ಲಿ ಸುಪ್ರೀಂ ಕೋರ್ಟ್ ಎಸ್‌ಐಟಿಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ? ನಾನು ವಕೀಲ.. ನಾನು ವಕೀಲ..ಎಂದು ಪದೇ ಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ಮಾಡಿದ್ದೆ. ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು ಎಂದು ಲೇವಡಿ ಮಾಡಿದರು.
ರಾಜ್ಯಪಾಲರಿಗೆ ಎಸ್‌ಐಟಿ ಬರೆದ ಪತ್ರ ಇಟ್ಟುಕೊಂಡು ಹಾರಾಟ ಮಾಡುತ್ತಿರವುದು ನೀವು. ಪತಂಗದ ಹಾರಾಟ ನೋಡಲಿಕ್ಕೆ ಚೆಂದ, ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ ಎಂದು ಎಚ್ಚರಿಸಿದರು.
ಸೋತರೆ ಸೋಲಬೇಕು ಬಾಹುಬಲಿಯಂತೆ
ನೀವು ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲಕಸ ಮಾಡಿಕೊಂಡು, ನಂಬಿ ಕೈಹಿಡಿದವರ ಬೆನ್ನಿಗೆ ಚೂರಿ ಹಾಕಿದ್ದೀರಿ. ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ. ನನ್ನ ರಾಜಕಾರಣ ನಿಮ್ಮಂತೆಯೇ ಹಣಕ್ಕೆ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ. 'ಸೋತರೆ ಸೋಲಬೇಕು ಬಾಹುಬಲಿಯಂತೆ..' ಆ ಮಹಾನ್ ವಿರಾಗಿಯೇ ನನ್ನ ಆದರ್ಶ. 20 ತಿಂಗಳ ಅಧಿಕಾರ, 14 ತಿಂಗಳ ಸರ್ಕಾರ ತ್ಯಜಿಸುವಾಗಲೂ ನಾನು ನಿರ್ಭಾವುಕ. ಇದು ನಿಮಗೆ ಸಾಧ್ಯವೇ? ಎಂದು ಸವಾಲೆಸೆದರು.
ಸಿಎಂ ಪುರಾಣ ಬಿಚ್ಚಿದರೆ ಪ್ಯಾನ್ ಇಂಡಿಯಾ ಸಿನಿಮಾ ಆಗುತ್ತವೆ
ದೇಶದ ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ, ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ನಾನೆಂದೂ ಮಾಡಲಾರೆ. ನನ್ನನ್ನು ನಾನು ರಕ್ಷಣೆ ಮಾಡಿಕೊಳ್ಳುವುದು ಗೊತ್ತಿದೆ. ನಿಮ್ಮ ದುಷ್ಟತನದ ಭಕ್ಷಣೆಯೂ ನನಗೆ ಗೊತ್ತಿದೆ. ನನ್ನ ಪುರಾಣ ಕಂತುಗಳಲ್ಲಿ ಬರುತ್ತದೆ ಎನ್ನುವ ಸಿದ್ದರಾಮಯ್ಯನವರ, ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನ ಬಳಿಯೂ ಇವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು.
ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ನಿಮ್ಮ 'ಸಿದ್ಧಹಸ್ತ' ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ. ಹುಷಾರ್ ಎಂದು ಎಚ್ಚರಿಸಿದ್ದಾರೆ.












Click it and Unblock the Notifications