ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಮಣಿಪಾಲ ಆಸ್ಪತ್ರೆಗೆ ದಾಖಲು
ಬೆಂಗಳೂರು, ಏಪ್ರಿಲ್ 23: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿ ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಎಚ್.ಡಿ ಕುಮಾರಸ್ವಾಮಿ'ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೇ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ' ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಬಹುಮತ ಬರಲೇಬೇಕು ಎನ್ನುವ ಪಣ ತೊಟ್ಟಿರುವ ಎಚ್.ಡಿ ಕುಮಾರಸ್ವಾಮಿ ಕಳೆದ ನಾಲ್ಕೈದು ತಿಂಗಳಿಂದ ನಿರಂತರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಪಂಚರತ್ನ ಯಾತ್ರೆ ಕೈಗೊಂಡಿದ್ದ ಎಚ್.ಡಿ ಕುಮಾರಸ್ವಾಮಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭೇಟಿ ನೀಡಿ ಜೆಡಿಎಸ್ ಪರ ಮತಯಾಚನೆ ಮಾಡಿದ್ದರು. ಒಂದು ತಿಂಗಳಿನಿಂದ ಬಿಸಿಲಿನಲ್ಲೇ ನಿರಂತರ ಪ್ರಚಾರ ನಡೆಸುತ್ತಿದ್ದ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುಮಾರಸ್ವಾಮಿ ಶುಕ್ರವಾರ ಹಾಸನದಲ್ಲಿ ಎಚ್.ಡಿ.ರೇವಣ್ಣ, ಎ.ಮಂಜು, ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜೊತೆ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಪರ ಭರ್ಜರಿ ಪ್ರಚಾರ ನಡೆಸಿದ್ದರು. ನಿನ್ನೆ ರಾಮನಗರದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ ಹಮ್ಮಿಕೊಂಡಿದ್ದರು. ಆದರೆ ಕಾರಣಾಂತರಗಳಿಂದ ರಾಮನಗರ ಪ್ರಚಾರ ರದ್ದುಗೊಳಿಸಿದ್ದರು. ಸದ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಆತಂಕಕ್ಕೊಳಗಾಗ ಬಾರದು ಎಂದು ತಿಳಿಸಿದ್ದಾರೆ.












Click it and Unblock the Notifications