ಜೆಡಿಎಸ್ ನಿಂದ ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಉಚ್ಚಾಟನೆ ಪತ್ರ ವೈರಲ್!
ಬೆಂಗಳೂರು, ಅಕ್ಟೋಬರ್ 18: 2024 ರ ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿರುವುದು ಜೆಡಿಎಸ್ ನ ಮುಸ್ಲಿಂ ಸಮುದಾಯದವರ ಅಸಮಾಧಾನಕ್ಕೆ ಕಾರಣವಾಗಿದೆ. ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ನಾಯಕರ ವಿರುದ್ದ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಇನ್ನೂ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನಲೆ ಕುಮಾರಸ್ವಾಮಿ ಅವರನ್ನ ಪಕ್ಷದಿಂದ ಉಚ್ಚಾಟಿಸಿಸಬೇಕು ಎಂದು ಚಿಂತನ ಸಭೆಯಲ್ಲಿ ಮುಸ್ಲಿಂ ಮುಖಂಡರೊಬ್ಬರು ಅಸಮಾಧಾನವನ್ನ ವ್ಯಕ್ತಪಡಿಸಿದ್ರು. ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕರಾದ ಎಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರು ಉಚ್ಚಾಟನೆ ಮಾಡಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಉಚ್ಚಾಟನೆ ಪತ್ರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ತಾವು ಮುಜುಗರಕ್ಕೀಡಾಗುವಂತಾಗಿದೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.
ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಪತ್ರದಿಂದ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಆಗಿದೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಇನ್ನೂ ಲೋಕಸಭಾ ಚುನಾವಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಿಜೆಪಿ ನಾಯಕರಾದ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಎನ್ಡಿಎ ಜತೆ ಮೈತ್ರಿ ಘೋಷಣೆ ಮಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಇಬ್ರಾಹಿಂ, ಸುದ್ದಿಗೋಷ್ಟಿ ನಡೆಸುವ ಮೂಲಕ ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮದು ಒರಿಜಿನಲ್ ಜೆಡಿಎಸ್ ಪಕ್ಷ. ತಮ್ಮ ಅನುಮತಿ ಇಲ್ಲದೆ ಯಾವುದೇ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿಯನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಮೈತ್ರಿ ವಿಚಾರವಾಗಿ ನಮ್ಮ ಬಳಿ ಯಾವುದೇ ರೀತಿಯ ಚರ್ಚೆಯನ್ನ ನಡೆಸಿಲ್ಲ ಎಂದು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಪತ್ರದಲ್ಲಿ ಏನಿದೆ?
ಜೆಡಿಎಸ್ ಪಕ್ಷವು ದಶಕಗಳಿಂದ ಜಾತ್ಯಾತೀತ ಸಿದ್ದಾಂತವನ್ನು ಪಾಲಿಸುತ್ತಾ ಬಂದಿದ್ದು ನಮ್ಮ ಪಕ್ಷದಲ್ಲಿಎಲ್ಲ ಜಾತಿ ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದು, ಇತ್ತೀಚೆಗೆ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ತಿಯಾಗಿರುವುದು ಕಂಡು ಬಂದಿದ್ದು ಈ ತತ್ ಕ್ಷಣದಿಂದ ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಲು ಪಕ್ಷ ತೀರ್ಮಾನಿಸಿದೆ ಎಂದು ನಕಲಿ ಪತ್ರದಲ್ಲಿ ತಿಳಿಸಲಾಗಿದೆ.












Click it and Unblock the Notifications