Budget 2024; ಮೋದಿ ದೂರದೃಷ್ಟಿ ಬಜೆಟ್‌ನಲ್ಲಿ ಅಡಗಿದೆ; ಹೆಚ್‌ಡಿಕೆ
ಬೆಂಗಳೂರು, ಫೆಬ್ರವರಿ 01: ಲೋಕಸಭೆ ಚುನಾವಣೆ ಎದುರಿರುವಾಗಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಚುನಾವಣೆ ಎದುರಿರುವುದರಿಂದ ಮಧ್ಯಂತರ ಬಜೆಟ್ ಮಂಡನೆ ಮಾಡಲಾಗಿದೆ. ಚುನಾವಣೆ ಮುಗಿದು ಹೊಸ ಸರ್ಕಾರ ಬಂದ ಮೇಲೆ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗಲಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ 2024-25ನೇ ಸಾಲಿನ ಮಧ್ಯಂತರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ" ಎಂದು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, "ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕ್ರಮಗಳು ಸ್ವಾಗತಾರ್ಹ" ಎಂದು ಹೇಳಿದ್ದಾರೆ.
"ಹಾಗೆಯೇ ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ಹಾಕಲಾಗಿದೆ. ನನ್ನ ಅಭಿಪ್ರಾಯದ ಪ್ರಕಾರ ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್" ಎಂದು ಕುಮಾರಸ್ವಾಮಿ ಬಜೆಟ್ ವಿಶ್ಲೇಷಿಸಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡಿದ್ದಾರೆ. ಈ ಬಾರಿಯ ಲೋಕಸಭೆ ಚುಣಾವಣೆಯಲ್ಲಿ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಚುನಾವಣೆಯನ್ನು ಎದುರಿಸಲಿದ್ದಾರೆ.
ಯಡಿಯೂರಪ್ಪ ಪ್ರತಿಕ್ರಿಯೆ; ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಸಹ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, "ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿರವರ ನವಭಾರತದ ಪರಿಕಲ್ಪನೆಯ ಸಾಕಾರದ ನಿಟ್ಟಿನಲ್ಲಿ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ, ರಾಷ್ಟ್ರದ 'ಪ್ರಗತಿನಿಷ್ಠ ಬಜೆಟ್' ಮಂಡಿಸಿರುವ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳ" ಎಂದು ಹೇಳಿದ್ದಾರೆ.
"ಚುನಾವಣಾಪೂರ್ವ ಜನಪ್ರಿಯ ಘೋಷಣೆಗಳ ಬಜೆಟ್ ಮಂಡಿಸದೆ, ಈ ಮಧ್ಯಂತರ ಬಜೆಟ್ ಮೂಲಕ ನಮ್ಮ ಯುವಜನತೆ, ರೈತರು, ಮಹಿಳೆಯರು ಹಾಗೂ ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗದ ಜನರ ಜೀವನಮಟ್ಟ ಸುಧಾರಿಸುವ, ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ ವಾಸ್ತವಿಕ ಆಯವ್ಯಯವನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.
"ಮುಂದಿನ ದಿನಗಳಲ್ಲಿ ಸದೃಢ, ಸಶಕ್ತ, ವಿಕಸಿತ, ವಿಶ್ವಗುರು ಭಾರತ ನಿರ್ಮಾಣದ ನಿಟ್ಟಿನಲ್ಲಿ ಎನ್‌ಡಿಎ ಸರ್ಕಾರದ ಬದ್ಧತೆಯನ್ನು ಈ ಬಜೆಟ್ ಪುನರುಚ್ಚರಿಸಿದ್ದು, ದೇಶದ ಪ್ರಗತಿಗೆ ಪೂರಕವಾಗಿರುವ ಈ ಬಜೆಟ್ ಅನ್ನು ಸ್ವಾಗತಿಸುತ್ತೇನೆ" ಎಂದು ತಿಳಿಸಿದ್ದಾರೆ.












Click it and Unblock the Notifications