ನೈಸ್ ರಸ್ತೆ ಅಕ್ರಮ: ಪ್ರಧಾನಿ ಮೋದಿ ಭೇಟಿಗೆ ಕುಮಾರಸ್ವಾಮಿ ನಿರ್ಧಾರ- ರಾಜಕೀಯದಲ್ಲಿ ಮಹತ್ವ ಪಡೆದುಕೊಂಡ ಎಚ್‌ಡಿಕೆ ನಡೆ
ಬೆಂಗಳೂರು, ಆಗಸ್ಟ್ 17: ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸ್ (ನೈಸ್) ಮತ್ತು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಇದು ರಾಜಕಾರಣದಲ್ಲಿ ಮಹತ್ವವನ್ನು ಪಡೆದುಕೊಂಡಿದೆ.
ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರ ಅಪಾಯಿಂಟ್‌ಮೆಂಟ್ ಕೋರಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ನೈಸ್ ಅಕ್ರಮವನ್ನು ಕೇಂದ್ರ ಏಜೆನ್ಸಿಯಿಂದ ತನಿಖೆ ನಡೆಸಲು ಪ್ರಧಾನಿ ಅವರಲ್ಲಿ ಮನವಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕುಮಾರಸ್ವಾಮಿ ಅವರಿಗೆ ಪ್ರಧಾನಿಯಿಂದ ಅಪಾಯಿಂಟ್‌ಮೆಂಟ್ ಸಿಕ್ಕರೆ, ಯೋಜನೆಗೆ ಸಂಬಂಧಿಸಿದಂತೆ ಸಂಗ್ರಹಿಸಿದ ಎಲ್ಲಾ ಸಾಕ್ಷ್ಯಗಳನ್ನು ಒದಗಿಸಲು ಮಾಜಿ ಸಿಎಂ ಯೋಜಿಸಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಯೋಜನೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಲು ಎಚ್‌ಡಿಕೆ ನಿರ್ಧರಿಸಿದ್ದಾರೆ.
ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸುತ್ತಿದ್ದು, ಪ್ರಕರಣದ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಒಗ್ಗೂಡಿವೆ. ನೈಸ್ ರಸ್ತೆಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳುವಂತೆ ಒತ್ತಾಯಿಸಿವೆ.

13,000 ಹೆಚ್ಚುವರಿ ಭೂಮಿಯನ್ನು ನೈಸ್ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ. ನ್ಯಾಯಾಲಯದ ಆದೇಶದ ಮೂಲಕ ಸರ್ಕಾರ ಅದನ್ನು ಹಿಂಪಡೆಯಬೇಕು. ಅಕ್ರಮವಾಗಿ 1,325 ಕೋಟಿ ರೂಪಾಯಿ ಟೋಲ್ ಸಂಗ್ರಹಿಸಲಾಗಿದ್ದು, ಅದನ್ನು ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಈ ಹಿಂದೆ ಹೇಳಿದ್ದರು.
ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಶಾಸಕ ಟಿ.ಬಿ.ಜಯಚಂದ್ರ ನೇತೃತ್ವದ ಸದನ ಸಮಿತಿ ಹಾಗೂ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ಸಿದ್ಧಪಡಿಸಿದ ವರದಿಗಳನ್ನು ಮಂಡಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನೈಸ್ ಸಂಸ್ಥೆಯು ಸರ್ಕಾರದ ಜೊತೆಗಿನ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ನೈಸ್ ಯೋಜನೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರೂ ಸಹ ಈ ಹಿಂದೆ ಆರೋಪಿಸಿದ್ದರು. ಈ ವಿಚಾರವಾಗಿ ಪ್ರತಿಭಟನೆಯನ್ನೂ ಮಾಡಿದ್ದರು.
ನೈಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ ಬೀದರ್ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದಾರೆ.












Click it and Unblock the Notifications