ಮೋದಿ ಸಂಪುಟ ಸೇರಿದ ಕುಮಾರಸ್ವಾಮಿ; ಕರ್ನಾಟಕ, ಮಂಡ್ಯ ಜನರಿಗೆ ಕೃತಜ್ಞತೆ
ಬೆಂಗಳೂರು, ಜೂನ್ 09; ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾದ ಬಳಿಕ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಯಾಗಿದೆ. ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಮತ್ತು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಎನ್‌ಡಿಎ ಮೈತ್ರಿಕೂಟದ ಪಾಲುದಾರ ಪಕ್ಷವಾಗಿರುವ ಜೆಡಿಎಸ್ ಪಕ್ಷಕ್ಕೆ ಸಚಿವ ಸ್ಥಾನ ಸಿಕ್ಕಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಂಡ್ಯ ಕ್ಷೇತ್ರದ ಸಂಸದ ಎಚ್. ಡಿ. ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ 3.0 ಸಂಪುಟ ಸೇರಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕುಮಾರಸ್ವಾಮಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕೃತಜ್ಞತೆ ಸಲ್ಲಿಸಿದ ಕುಮಾರಸ್ವಾಮಿ: ಪ್ರಮಾಣ ವಚನ ಸಮಾರಂಭದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಎಚ್. ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.
'ಮಾನ್ಯ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರಕಾರದಲ್ಲಿ ಸಂಪುಟ ದರ್ಜೆ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಅಧಿಕಾರ ಗೌಪ್ಯತೆಯ ಪ್ರತಿಜ್ಞೆ ಭೋಧಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಗೌರವಪೂರ್ವಕ ಧನ್ಯವಾದಗಳು' ಎಂದು ಹೇಳಿದ್ದಾರೆ.
'ದೇಶ ಸೇವೆಗೆ ಅವಕಾಶ ಕಲ್ಪಿಸಿ ಈ ಅಮೃತ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ, ಸಮಸ್ತ ಕನ್ನಡಿಗರಿಗೆ ಹಾಗೂ ಜೆಡಿಎಸ್ ಮತ್ತು ಬಿಜೆಪಿ ಕರ್ನಾಟಕ ಪಕ್ಷಗಳ ಎಲ್ಲಾ ಕಾರ್ಯಕರ್ತ ಬಂಧುಗಳಿಗೆ ತುಂಬು ಹೃದಯದ ಕೃತಜ್ಞತೆಗಳು' ಎಂದು ಪೋಸ್ಟ್ ಹಾಕಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಲ್ಲಿ ಎಚ್. ಡಿ. ಕುಮಾರಸ್ವಾಮಿ 96,592 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಚುನಾವಣೆಯ ಬಳಿಕ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿದರು. ಲೋಕಸಭೆ ಚುನಾವಣೆ 2024 ಅನ್ನು ಬಿಜೆಪಿ ಜೊತೆ ಸೀಟು ಹಂಚಿಕೆ ಮಾಡಿಕೊಂಡು ಎದುರಿಸುವುದಾಗಿ ಘೋಷಣೆ ಮಾಡಿದರು.
ಮೈತ್ರಿ ಧರ್ಮದಂತೆ ಜೆಡಿಎಸ್‌ಗೆ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರವನ್ನು ಬಿಜೆಪಿ ಬಿಟ್ಟುಕೊಟ್ಟಿತು. ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಅಭ್ಯರ್ಥಿ ಯಾರು? ಎಂದ ಬಹಳ ಚರ್ಚೆ ನಡೆಯಿತು. ಅಂತಿಮವಾಗಿ ಚನ್ನಪಟ್ಟಣದ ಹಾಲಿ ಶಾಸಕ ಎಚ್. ಡಿ. ಕುಮಾರಸ್ವಾಮಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು.
ಮಂಡ್ಯದಲ್ಲಿ ಎಚ್. ಡಿ. ಕುಮಾರಸ್ವಾಮಿ 8,51,881 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು 2,84,620 ಮತಗಳ ಅಂತರದಿಂದ ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಎನ್‌ಡಿಎ ಮೈತ್ರಿಕೂಟ ಪಕ್ಷವಾದ ಕಾರಣ ಜೆಡಿಎಸ್ ಪಕ್ಷಕ್ಕೆ ಸಚಿವ ಸ್ಥಾನ ಸಿಕ್ಕಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಚನ್ನಪಟ್ಟಣದ ಹಾಲಿ ಶಾಸಕ, ಮಂಡ್ಯದ ಸಂಸದ ಎಚ್. ಡಿ. ಕುಮಾರಸ್ವಾಮಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರೂ ಹೌದು. ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕಿದೆ. ಜೆಡಿಎಸ್ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆಯೇ? ಎಂದು ಕಾದು ನೋಡಬೇಕಿದೆ.












Click it and Unblock the Notifications