ಇಂತಹ ಮನಃಸ್ಥಿತಿಗೆ ಚಿಕಿತ್ಸೆ ಬೇಡವೇ?; ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು, ಆಗಸ್ಟ್ 09; ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಡುವೆ ಟ್ವೀಟ್ ಸಮರ ಮುಂದುವರೆದಿದೆ. 'ಶೀಘ್ರವಾಗಿ ಗುಣಮುಖರಾಗಿ' ಎಂಬ ಸಿದ್ದರಾಮಯ್ಯ ಮಾತಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಬುಧವಾರ ಕರ್ನಾಟಕದ ಸರ್ಕಾರದ ವರ್ಗಾವಣೆ, ಕಮಿಷನ್ ಆರೋಪಗಳನ್ನು ಪ್ರಸ್ತಾಪಿಸಿ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. 'ಇದು ಎಂಥಾ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ?' ಎಂದು ಸಿದ್ದರಾಮಯ್ಯರನ್ನು ಪ್ರಶ್ನೆ ಮಾಡಿದ್ದಾರೆ.

ಕುಮಾರಸ್ವಾಮಿ ತಮ್ಮ ಟ್ವೀಟ್‌ನಲ್ಲಿ, 'ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ!. ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು,ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂಥಾ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ?' ಎಂದು ಕೇಳಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ, 'ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ 'ಸಿದ್ದಕಲೆ' ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ @CMofKarnataka ಕಚೇರಿಯ ಐದಾರು ಟಿಪ್ಪಣಿಗಳು 'ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ' ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ' ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
'ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು?. 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ 'ಅತಿ ಉಬ್ಬರ'ವೂ ದೇಶಕ್ಕೆ ಒಳ್ಳೆಯದಲ್ಲ. ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್; ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಟ್ವೀಟ್ ಮಾಡಿ, 'ಸನ್ಮಾನ್ಯ H D Kumaraswamy ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ' ಎಂದು ಹೇಳಿದ್ದರು.
'ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ' ಎಂದು ತಿಳಿಸಿದ್ದರು. ಇದಕ್ಕೆ ಇಂದು ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ. ಸಮರ್ಥಿಸಿಕೊಂಡು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಎಚ್. ಡಿ. ಕುಮಾರಸ್ವಾಮಿ, 'ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ' ಎಂದು ಟ್ವೀಟ್‌ನಲ್ಲಿ ತಿರುಗೇಟು ಕೊಟ್ಟಿದ್ದರು.
"ನಿಮ್ಮ ಸಚಿವರ ವಿರುದ್ಧ ನಿಮ್ಮ @INCKarnataka ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ?' ಎಂದು ಕೇಳಿದ್ದರು.
ಇದಕ್ಕೆ ತಿರುಗೇಟು ಕೊಟ್ಟಿದ್ದ ಸಿದ್ದರಾಮಯ್ಯ, 'ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ' ಎಂದು ಹೇಳಿದ್ದರು.












Click it and Unblock the Notifications