Bhagavad Gita: ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧಿಸಿ: ಕೇಂದ್ರಕ್ಕೆ HD ಕುಮಾರಸ್ವಾಮಿ ಪತ್ರ
ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಬಂದಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಹೆಚ್.ಡಿ.ಕುಮಾರಸ್ವಾಮಿ ಅವರು ಭಗವದ್ಗೀತೆ ವಿಚಾರದಲ್ಲಿ ಮಹತ್ವದ ಮನವಿಯೊಂದನ್ನು ಕೇಂದ್ರ ಸರ್ಕಾರಕ್ಕೆ ಮಾಡಿದ್ದಾರೆ. ನಮ್ಮ ನೆಲದ ಪವಿತ್ರ ಗ್ರಂಥವಾದ ಭಗವದ್ಗೀತೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಬೋಧಿಸಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದಾರೆ.
ಪವಿತ್ರ ಗ್ರಂಥವಾದ ಭಗವದ್ಗೀತೆಯನ್ನು ಮಕ್ಕಳಿಗೆ ಪಠ್ಯದ ಮೂಲಕ ಬೋಧಿಸಬೇಕು. ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಿಗೆ ಪತ್ರದ ಮೂಲಕ ವಿನಂತಿಸಿದ್ದಾರೆ. ನಿಷ್ಕಾಮ ಕರ್ಮದ ಕಾಲಾತೀತ ಮೌಲ್ಯಗಳು, ಪ್ರಾಮಾಣಿಕತೆ ಮತ್ತು ನೈತಿಕ ಶಕ್ತಿಯು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಹೆಚ್ಚು ಉತ್ಕೃಷ್ಟಗೊಳಿಸುತ್ತದೆ ಎಂದು ಹೇಳಿದ್ದಾರೆ.

ನಮ್ಮ ಯುವಜನರು ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಪ್ರಜೆಗಳಾಗಿ ರೂಪುಗೊಂಡು, ಜಾಗತಿಕವಾಗಿ ಶ್ರೇಷ್ಠರಾಗಲು ಸ್ಫೂರ್ತಿ, ಪ್ರೇರಣೆ ನೀಡುತ್ತದೆ. ಅತ್ಯಂತ ಶ್ರೇಷ್ಠ, ಮಾನವೀಯತೆಯ ಭಾರತೀಯ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸಂಕಲ್ಪಕ್ಕೆ ಅನುಗುಣವಾಗಿ ಭಗವದ್ಗೀತೆ ಬೋಧನೆ ಅಗತ್ಯವಿದೆ ಎಂದು ನಾನು ಬಲವಾಗಿ ನಂಬಿದ್ದೇನೆ ಎಂದು ಹೆಚ್‌ಡಿಕೆ ಅಭಿಪ್ರಾಯಪಟ್ಟಿದ್ದಾರೆ.
ರಷ್ಯಾದ ಗೌರವಾನ್ವಿತ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರಿಗೆ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಪವಿತ್ರ ಗ್ರಂಥ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿರುವುದು ಅತ್ಯಂತ ಶ್ಲಾಘನೀಯ. ಭಾರತದ ಶ್ರೇಷ್ಠ ಪರಂಪರೆ ಮತ್ತು ನಮ್ಮ ಪುರಾಣದ ಹೆಗ್ಗುರುತುಗಳನ್ನು ಮತ್ತಷ್ಟು ಎತ್ತರಕ್ಕೇರಿಸಿ ಸಾರ್ವಕಾಲಿಕಗೊಳಿಸುವ ನಿಟ್ಟಿನಲ್ಲಿ ಪ್ರಧಾನಿಗಳ ದೃಷ್ಟಿಕೋನವು ನಮಗೆಲ್ಲರಿಗೂ ಅನುಕರಣೀಯ ಎಂದಿದ್ದಾರೆ.
ರಾಮಾಯಣ-ಮಹಾಭಾರತವೂ ಬೋಧಿಸಿ
ಮನುಕುಲದ ದಾರಿದೀಪ, ಅರಿವಿನ ಬೆಳಕಾಗಿರುವ ಭಗವದ್ಗೀತೆಯನ್ನು ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಮಾತ್ರವಲ್ಲ, ಶಿಕ್ಷಣದ ಪ್ರತೀ ಹಂತದಲ್ಲಿಯೂ ಪಠ್ಯವಾಗಬೇಕು ಎಂಬುದು ನನ್ನ ಆಶಯ. ಈ ಬಗ್ಗೆ ಅಗತ್ಯ ಕ್ರಮ ವಹಿಸುವ ಬಗ್ಗೆ ನಾನು ಕೇಂದ್ರದ ಶಿಕ್ಷಣ ಮಂತ್ರಿಗಳಾದ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ವಿನಂತಿಸಿದ್ದೇನೆ. ಹಾಗೆಯೇ ನಮ್ಮ ನೆಲದ ಅನರ್ಘ್ಯ ಸಂಪತ್ತು ಶ್ರೀವಾಲ್ಮೀಕಿ ವಿರಚಿತ ರಾಮಾಯಣ ಮತ್ತು ವ್ಯಾಸ ವಿರಚಿತ ಮಹಾಭಾರತ ಮಹಾಕಾವ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡುವುದು ಅಗತ್ಯ ಎಂದು ಹೇಳಿದ್ದಾರೆ.












Click it and Unblock the Notifications