ಪೊಲೀಸ್ ಇಲಾಖೆಯಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ:ಎಚ್‌ಡಿಕೆ
ಬೆಂಗಳೂರು, ಮೇ 31: ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಹಸ್ತಕ್ಷೇಪಗಳಿಗೆ ಮಣಿಯದೆ ನಿರ್ಭೀತಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ, ಪೊಲೀಸ್ ಇಲಾಖೆಯ ಕಾರ್ಯದಲ್ಲಿ ತಾವು ಯಾವುದೇ ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ. ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಇಂತಹ ಚಟುವಟಿಕೆಗಳಿಗೆ ಮಟ್ಟಹಾಕುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್. ರಾಜು ಅವರು ರಾಜ್ಯದಲ್ಲಿ ಮಕ್ಕಳ ಅಪಹರಣ ಕುರಿತ ವದಂತಿಗಳ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಪ್ರಾಮಾಣಿಕವಾಗಿ ಕೆಲಸ ಮಾಡಿ ರೌಡಿಸಂ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕಲು ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ, ಕಾನೂನು ಪಾಲನೆಗೆ ಹೆಚ್ಚಿನ ಒತ್ತು ನೀಡಿ, ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಕರೆದೆ, ಇಲಾಖೆಗೆ ಸಂಬಂಧ ಪಟ್ಟ ವಿಷಯಗಳನ್ನು ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.
ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭ, ಹಿರಿಯ ಪೊಲೀಸ್ ಅಧಿಕಾರಿಗಳಾದ ಎಂ.ಎನ್. ರೆಡ್ಡಿ, ಪಿ.ಕೆ. ಗರ್ಗ್ ಮೊದಲಾದವರು ಉಪಸ್ಥಿತರಿದ್ದರು.












Click it and Unblock the Notifications