ಮಹಾರಾಷ್ಟ್ರದಿಂದ ರಾಜ್ಯದ 865 ಹಳ್ಳಿಗಳಿಗೆ ಆರೋಗ್ಯ ವಿಮೆ: ಪರಿಣಾಮ ನೆಟ್ಟಗಿರದು ಎಂದು ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 05: ಕನ್ನಡಿಗರ ತೀವ್ರ ವಿರೋಧದ ಹೊರತಾಗಿಯೂ ರಾಜ್ಯದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, 'ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೆ ಇದ್ದರೆ ಪರಿಣಾಮ ನೆಟ್ಟಗಾಗದು' ಎಂದು ಎಚ್ಚರಿಕೆ ನೀಡಿದ್ದಾರೆ.

'ರಾಜ್ಯದಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭರವಸೆ ನೀಡಿದ್ದರು. ಇವರಿಬ್ಬರ ಮಾತಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಕವಡೆ ಕಾಸಿನ ಕಿಮ್ಮತ್ತು ಕೊಟ್ಟಿಲ್ಲ' ಎಂದೂ ಅವರು ವಾಗ್ದಾಳಿ ನಡೆಸಿದ್ದಾರೆ.
'ರಾಜ್ಯದ ಗಡಿಯೊಳಗೆ ಆರೋಗ್ಯ ವಿಮೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಯತ್ನಿಸಿದಾಗಲೇ ನಾವು ವಿರೋಧಿಸಿದ್ದೆವು. ಅಲ್ಲಿಯ ವರೆಗೆ ತೆಪ್ಪಗಿದ್ದ ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಒತ್ತಡಕ್ಕೆ ಮಣಿದು ವೀರಾವೇಶದ ಮಾತುಗಳನ್ನಾಡಿದ್ದರು. ಆ ಆವೇಶ, ಬದ್ಧತೆಯನ್ನು ತೋರಿಸಬೇಕಾದ ಕಾಲ ಈಗ ಬಂದಿದೆ' ಎಂದು ಅವರು ಹೇಳಿದ್ದಾರೆ.

'ಗಡಿ ವಿವಾದ ಇತ್ಯರ್ಥಗೊಳ್ಳುವ ವರೆಗೆ ಎರಡೂ ರಾಜ್ಯಗಳು ವಿವಾದವನ್ನು ಕೆದಕಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕೀತು ಮಾಡಿ ಎರಡೂ ರಾಜ್ಯಗಳ ಸದಸ್ಯರನ್ನೊಳಗೊಂಡ ಸಲಹಾ ಸಮಿತಿ ರಚಿಸಿದ್ದರು. ಆ ಸೂಚನೆಯನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಧಿಕ್ಕರಿಸಿದ್ದಾರೆ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
'ಬೆಳಗಾವಿ ಗಡಿವಿವಾದ ನ್ಯಾಯಾಲಯದ ಕಟಕಟೆಯಲ್ಲಿದೆ. ಕನ್ನಡಿಗರಿಗೆ ನ್ಯಾಯ ಸಿಗುತ್ತದೆ ಎನ್ನುವ ಭರವಸೆ ನಮಗೆ ಇದೆ. ಈ ನಡುವೆ ರಾಜಕೀಯ ಲಾಭದ ದುರುದ್ದೇಶದಿಂದ ಮಹಾರಾಷ್ಟ್ರ ಆಗಾಗ ಗಡಿತಂಟೆಯನ್ನು ಕೆದಕುವ ಕಿಡಿಗೇಡಿತನ ಮಾಡುವುದು ಖಂಡನೀಯ. ಕನ್ನಡಿಗರು ಇದನ್ನು ಸಹಿಸುವುದಿಲ್ಲ' ಎಂದು ಹೇಳಿದ್ದಾರೆ.
ಐಟಿ, ಇಡಿ ದಾಳಿ: ಸಿದ್ದು ಆಕ್ರೋಶ
ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ ಬಿಜೆಪಿ ಸರ್ಕಾರ ಸಾವಿರಕ್ಕೂ ಹೆಚ್ಚು ಐಟಿ, ಇಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

'ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ ಬಿಜೆಪಿ ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ' ಎಂದು ಹೇಳಿದ್ದಾರೆ.
'ಬಿಜೆಪಿ ಸರ್ಕಾರದ ಈ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹೋರಾಟದ ಮೂಲಕವೇ ಬಿಜೆಪಿ ಪಕ್ಷದ ಈ ದಮನಕಾರ್ಯವನ್ನು ಎದುರಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭೀತಿಗೀಡಾಗದೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕು' ಎಂದೂ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡಿವೆ. ಮೇ 10 ರಂದು ನಡೆಯಲಿರುವ ಮತದಾನದ ಫಲಿತಾಂಶ ಮೇ 13 ರಂದು ಹೊರಬರಲಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿವೆ. ಬಿಜೆಪಿ ಮುಂದಿನ ವಾರದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಬಹುದು ಎಂದು ಹೇಳಲಾಗುತ್ತಿದೆ.












Click it and Unblock the Notifications