Breaking; ಸೋಮವಾರದಿಂದ ಆರೋಗ್ಯ ಇಲಾಖೆ ನೌಕರರ ಮುಷ್ಕರ
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಹೊರಗುತ್ತಿಗೆ ನೌಕರರು ಸೋಮವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 06; ಕರ್ನಾಟಕದಲ್ಲಿ ಆರೋಗ್ಯ ಇಲಾಖೆಯ ನೌಕರರು ಸೋಮವಾರದಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ.
ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಇಲಾಖೆಗಳಡಿ ಸುಮಾರು 30 ಸಾವಿರಕ್ಕೂ ಅಧಿಕ ನೌಕರರು ಇದ್ದಾರೆ.
ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್. ವೈ. ವಿಶ್ವಾರಾಧ್ಯ ಈ ಕುರಿತು ಮಾಹಿತಿ ನೀಡಿದ್ದಾರೆ. "ಬೇಡಿಕೆಗಳ ಈಡೇರಿಕೆಗೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸೂಕ್ತ ಸ್ಪಂದನೆ ದೊರೆತಿಲ್ಲ. ಆದ್ದರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದೇವೆ" ಎಂದು ಹೇಳಿದ್ದಾರೆ.

"ನಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದಲ್ಲಿ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಈ ಅವಧಿಯಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾದರೆ ಸರ್ಕಾರವೇ ಹೊಣೆಯಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.
ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಮುಷ್ಕರ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ.
ತಮ್ಮ ಬೇಡಿಕೆ ಈಡೇರುವ ತನಕ ಮುಷ್ಕರ ಸ್ಥಗಿತಗೊಳಿಸುವುದಿಲ್ಲ ಎಂದು ನೌಕರರು ಹೇಳಿದ್ದು, ಸೋಮವಾರ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಷ್ಕರ ಆರಂಭಿಸಲಿದ್ದಾರೆ. ನೌಕರರು ಮುಷ್ಕರಕ್ಕೆ ಹಾಜರಾಗುವ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಯಲ್ಲಿಯೂ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.
ನೌಕರರ ಬೇಡಿಕೆಗಳು
* ನೌಕರರ ಸೇವೆ ಕಾಯಂಗೊಳಿಸುವುದು
* ಸಮಾನ ಕೆಲಸಕ್ಕೆ ಸಮಾನ ವೇತನ
* ಹೊರಗುತ್ತಿಗೆ ನೌಕರರಿಗೆ ಸರ್ಕಾರದಿಂದ ನೇರ ವೇತನ ಪಾವತಿ
* ಸಾಮಾಜಿಕ ಭದ್ರತಾ ಯೋಜನೆಗಳ ಜಾರಿ
* ಕೃಪಾಂಕ ಶೇ 30ಕ್ಕೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ನೌಕರರು ಸರ್ಕಾರದ ಮುಂದಿಟ್ಟಿದ್ದಾರೆ.












Click it and Unblock the Notifications