Karnataka Cold wave: ಮುಂದಿನ 5 ದಿನ ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ
Karnataka Weather: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇನ್ನೂ ಮುಂದಿನ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭೀಕರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 09) ಬೆಳಗ್ಗೆ ಮಂಜು ಮುಸುಕಿದ ವಾತಾವರಣದ ಜೊತೆ ಭೀಕರ ಚಳಿಯ ವಾತಾವರಣ ನಿರ್ಮಾಣವಾಗಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚುತ್ತಿರುವ ಹಿನ್ನೆಲೆ ಜನರು ಮನೆಯಿಂದ ಹೊರಗಡೆ ಬರಲು ಭಯ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅದೇ ಆಡಿದ್ದೇ ಆಟ ಎಂಬಂತೆ ರಣಭೀಕರಚಳಿ ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ತಾಪಮಾನದಲ್ಲಿ ಕುಸಿತವಾಗಲಿದ್ದು, ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ತಿಳಿಸಿದೆ.

ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಮುಂದಿನ 5 ದಿನಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬೀದರ್, ವಿಜಯಪುರ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲ. ನಂತರದ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜಿನ ಜೊತೆ ಭೀಕರ ಚಳಿ ಇರುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳಲ್ಲಿ ಚಿಕ್ಕಮಗಳೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.
ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳು ಸೃಷ್ಟಿಯಾದ ಘಟನೆಗಳು ನಡೆದಿವೆ. ಮತ್ತೊಂದೆಡೆ ನೋಡೋದಾದ್ರೆ, ಕೆರೆ-ಕಟ್ಟೆಗಳು, ನದಿಗಳು, ಜಲಾಶಯಗಳ ಭರ್ತಿಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಆದರೆ ಇದೀಗ ಚಳಿಗಾಲ ಆರಂಭವಾಗಿದ್ದು, ಹಲವು ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಕುಸಿತ ಆಗುತ್ತಲೇ ಇದೆ. ಮುಂಜಾನೆ ಮತ್ತು ಸಂಜೆ ವೇಳೆ ಚಳಿಯ ಪ್ರಮಾಣ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ.
ಇನ್ನು ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಅದರಲ್ಲೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ರಾಯಚೂರು, ಮೈಸೂರು, ಮಂಡ್ಯ, ಚಾಮರಾನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆಯನ್ನೂ ನೀಡಿದೆ. ಆದ್ದರಿಂದ ಜನರು ಮನೆಯಿಂದ ಹೊರಗಡೆ ಹೋಗುವಾಗ ಕಾಟನ್ ಬಟ್ಟೆಯಿಂದ ತಯಾರಿಸಿದ ಶ್ವೆಟ್ಟರ್, ಕಿವಿ ಮುಚ್ಚಿಕೊಳ್ಳುವಂತೆ ಟೋಪಿ ಇಟ್ಟುಕೊಂಡು ಹೋದರೆ ಆರೋಗ್ಯದ ದೃಷ್ಟಿಯಿಂದ ಉತ್ತಮ ಎಂಬುದು ನಮ್ಮ ಸಲಹೆಯಾಗಿದೆ.












Click it and Unblock the Notifications