Heavy Rain: ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ; ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ
ರಾಜ್ಯದಲ್ಲಿ ಅಬ್ಬರಿಸಿದ್ದ ಹಿಂಗಾರು ಮಳೆ ಕೆಲವು ದಿನ ಬಿಡುವು ಕೊಟ್ಟಿದ್ದು ಮತ್ತೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಅಕ್ಟೋಬರ್ 31ರಿಂದ ರಾಜ್ಯದಲ್ಲಿ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, ದೀಪಾವಳಿ, ಕರ್ನಾಟಕ ರಾಜ್ಯೋತ್ಸವದ ದಿನ ಮಳೆ ತೀವ್ರವಾಗುವ ಸಾಧ್ಯತ ಇದೆ.
ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ಮತ್ತು 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ಕೊಟ್ಟಿದೆ. ಕಳೆದ 15 ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರೈತರು ಭಾರಿ ನಷ್ಟ ಅನುಭವಿಸಿದ್ದರು. ಮುಂಗಾರು ಹಂಗಾಮಿನ ಬೆಳೆಗಳು ಕಟಾವಿಗೆ ಬಂದ ಸಂದರ್ಭದಲ್ಲೇ ಸತತವಾಗಿ ಮಳೆಯಾದ ಕಾರಣ ಹಲವು ಕಡೆಗಳಲ್ಲಿ ಬೆಳೆ ನಷ್ಟ ಕೂಡ ಉಂಟಾಗಿತ್ತು. ಇದೀಗ ಮತ್ತೆ ಮಳೆ ಆರಂಭವಾಗುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ.
ಬೆಂಗಳೂರಿನಲ್ಲಿ ಭಾರಿ ಮಳೆ ಸಾಧ್ಯತೆ
ರಾಜಧಾನಿ ಬೆಂಗಳೂರಿನಲ್ಲಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 31 ರಿಂದಲೇ ಬೆಂಗಳೂರಿನಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 31 ರಿಂದ ನವೆಂಬರ್ 2ರವರೆಗೆ ಬೆಂಗಳೂರಿನಲ್ಲಿ ಮಿಂಚು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಯಾವ ಜಿಲ್ಲೆಗಳಿಗೆ ಮಳೆ?
ಅಕ್ಟೋಬರ್ 31 ರಿಂದ ನವೆಂಬರ್ 2ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ನವೆಂಬರ್ 1 ಮತ್ತು 2ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲಬುರ್ಗಿ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಅಕ್ಟೋಬರ್ 31 ರಿಂದ ನವೆಂಬರ್ 2ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ಸಿಕ್ಕಿದೆ.












Click it and Unblock the Notifications