ಬೀದರ್ To ಬೆಂಗಳೂರು: ಮೇ 15ರವರೆಗೂ ಅಬ್ಬರಿಸಲಿದೆ ಮಳೆ; ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಎಚ್ಚರಿಕೆ
ಬಿಸಿಲಿನಿಂದ ಹೈರಾಣಾಗಿದ್ದ ಕರುನಾಡಿನ ಜನಕ್ಕೆ ಮಳೆ ತಾತ್ಕಾಲಿಕ ಬಿಡುಗಡೆ ಕೊಟ್ಟಿದೆ. ಇನ್ನೂ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, ವಾತಾವರಣ ತಂಪಾಗಲಿದೆ.
ಕಳೆದ ಮೂರು ದಿನಗಳಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗುತ್ತಿದ್ದು, ಜನರ ಸಂತಸಕ್ಕೆ ಕಾರಣವಾಗಿದೆ. ಇನ್ನೂ ಕೆಲವು ದಿನ ಹೀಗೆ ಮಳೆಯಾದರೆ ಸಾಕಪ್ಪ ಎಂದು ಜನ ಪ್ರಾರ್ಥನೆ ಮಾಡುತ್ತಿದ್ದಾರೆ.

ನೈಋತ್ಯ ಪೂರ್ವ ಮುಂಗಾರು ನಿರೀಕ್ಷೆಗೂ ಮೀರಿ ಮಳೆಯನ್ನು ತಂದಿದ್ದು, ಇನ್ನೂ ನಾಲ್ಕು ದಿನ ವ್ಯಾಪಕ ಮಳೆಯಾಗುವುದು ಖಚಿತವಾಗಿದೆ. ಕಾದ ಕಾವಲಿಯಂತಾಗಿದ್ದ ರಾಜ್ಯದ ಹಲವು ಜಿಲ್ಲೆಗಳು ತಂಪಾಗುವ ಸೂಚನೆ ಸಿಕ್ಕಿದೆ.
ಮಂಗಳವಾರ ತುಮಕೂರು, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿತ್ತು. ಬುಧವಾರ ಕೂಡ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ.
ಮೇ 12ರವರೆಗೂ ಭಾರಿ ಮಳೆ ಎಚ್ಚರಿಕೆ
ಮೇ 9 ರಂದು ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ತುಮಕೂರು, ವಿಜಯನಗರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೀದರ್, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 10ರಂದು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಕೊಡಗು, ಚಿಕ್ಕಮಗಳೂರು, ವಿಜಯನಗರ, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗಲಿದೆ.
ಮೇ 11 ಮತ್ತು 12 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಎಚ್ಚರಿಕೆ ನೀಡಲಾಗಿದೆ.
ಮೇ 13 ರಿಂದ ಮೇ 15 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.












Click it and Unblock the Notifications