Heavy Rain: ರಾಜ್ಯದಲ್ಲಿ ಸುರಿಯಲಿದೆ ಭಾರಿ ಮಳೆ; ಬೆಂಗಳೂರಿನಲ್ಲೂ ಇಂದು ಮಳೆಯಾರ್ಭಟ
ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ, ಸದ್ಯಕ್ಕೆ ಮಳೆಯ ಅಬ್ಬರ ಕಡಿಮೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಭಾನುವಾರ ರಜೆಯ ಮಜೆ ಅನುಭವಿಸಲು ಹೊರಗಡೆ ಹೋಗುವ ಮುನ್ನ ಯೋಚಿಸುವುದು ಒಳಿತು. ಅಕ್ಟೋಬರ್ 22ರವರೆಗೂ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಇಂದು (ಅಕ್ಟೋಬರ್ 20, ಭಾನುವಾರ) ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು ಹಳದಿ ಎಚ್ಚರಿಕೆ ಘೋಷಣೆ ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಮೈಸೂರು, ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 21, 22 ರಂದು ಕೂಡ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಮುಂದುವರೆಯಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ಮಂಡ್ಯ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಚದುರಿದಂತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 21 (ಸೋಮವಾರ) ದಿಂದ ಮಳೆ ಚುರುಕು ಪಡೆಯಲಿದ್ದು, ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಭಾರಿ ಮಳೆ
ಬೆಂಗಳೂರಿನ ಹಲವು ಕಡೆಗಳಲ್ಲಿ ಭಾನುವಾರ ಮುಂಜಾನೆಯೇ ಮಳೆ ಶುರುವಾಗಿದೆ. ವಾರಾಂತ್ಯದಲ್ಲಿ ಸಮಯ ಕಳೆಯಲು ಹೊರಗಡೆ ಹೋಗುವ ಮುನ್ನ ಒಮ್ಮೆ ಯೋಚಿಸುವುದು ಒಳ್ಳೆಯದು. ಇಡೀ ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಯಲಹಂಕ, ಮಹದೇವಪುರ, ಬೆಂಗಳೂರು ಪೂರ್ವ ವಲಯದಲ್ಲಿ ಚದುರಿದಂತೆ ಸಾಧಾರಣ ಮಳೆ ಮುನ್ಸೂಚನೆ ಇದ್ದರೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ರಾಜ ರಾಜೇಶ್ವರಿ ನಗರ, ಬೊಮ್ಮನಹಳ್ಳಿ, ದಾಸರಹಳ್ಳಿ ವಲಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.












Click it and Unblock the Notifications