Weather Report: ಬೆಂಗಳೂರು, ಕೋಲಾರ ಸೇರಿ ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ
ತಮಿಳುನಾಡು, ಪುದುಚೆರಿಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಭಾರಿ ಮಳೆಯಾಗುತ್ತಿದ್ದು ಚೆನ್ನೈ ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಸೋಮವಾರ ಕೂಡ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ರಾತ್ರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ಮುನ್ಸೂಚನೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾನುವಾರ ಬೆಳಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ. ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಮಳೆ ಚುರುಕುಗೊಂಡಿದ್ದು ರಾತ್ರಿಯಿಡೀ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
#Nowcast: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೂಲ: ಐಎಂಡಿ ಬೆಂಗಳೂರು.
— Karnataka State Natural Disaster Monitoring Centre (@KarnatakaSNDMC) December 1, 2024
Issued by : KSDMA
Validity Time : 01 Dec, 20:30 to 01 Dec, 23:30
Alert generated through CAP-SACHET. #KSNDMC pic.twitter.com/ptuxmpiyxS
ಸೋಮವಾರ ಕೂಡ ಉತ್ತಮ ಮಳೆ
ಭಾನುವಾರ ಇಡೀ ದಿನ ತುಂತುರು ಮಳೆಯಾಗಿದ್ದು ಸೋಮವಾರ ಕೂಡ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ, ಚಾಮರಾಜನಗರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಡಿಸೆಂಬರ್ 3ರಂದು ಕೂಡ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿರುಗಾಳಿ, ಗುಡುಗು-ಮಿಂಚು ಸಹಿತ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಮುಂದಿನ ಎರಡು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೂಡ ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗಲಿದೆ ಎಂದು ಹೇಳಿದೆ.
ಸೋಮವಾರ ಭಾರಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದು, ಎಚ್ಚರಿಕೆಯಿಂದ ಇರುವಂತೆ ಜಿಲ್ಲೆಯ ಜನರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕೂಡ ಸೋಮವಾರ ಮತ್ತು ಮಂಗಳವಾರ ಮಳೆ ಮುಂದುವರೆಯಲಿದೆ ಎಂದು ಹೇಳಲಾಗಿದೆ. ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು ತಾಪಮಾನದಲ್ಲಿ ತೀವ್ರ ಕುಸಿತ ಕಾಣುವ ಕಾರಣ, ಚಳಿ ಹೆಚ್ಚಲಿದೆ.












Click it and Unblock the Notifications