Rain Alert: ಮುಂಗಾರು ಚುರುಕು; ಮೂರು ದಿನ ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ
ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳುವ ಲಕ್ಷಣ ತೋರಿಸಿದೆ. ಕರಾವಳಿ ಭಾಗದಲ್ಲಿ ಮಳೆ ತೀವ್ರಗೊಳ್ಳುತ್ತಿದ್ದು ಮುಂದಿನ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜೂನ್ 23 ರಿಂದ ಜೂನ್ 26 ರವರೆಗೆ ಗಂಟೆಗೆ 45 ರಿಂದ 65 ಕಿಮೀ ವರೆಗಿನ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರಿ ಮಳೆಯಾಗಲಿದೆ ರಾಜ್ಯದ ಕರಾವಳಿಯಲ್ಲಿ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಈ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೂನ್ 26ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೂಡ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು ರೆಡ್ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯದಲ್ಲಿ ಚದುರಿದಂತೆ ಗುಡುಗು ಮಿಂಚು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಿರುವ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ.
ಕರಾವಳಿಯಲ್ಲಿ ಇದುವರೆಗೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿರಲಿಲ್ಲ. ಈಗ ಮಳೆ ಚುರುಕಾಗುವ ಸಾಧ್ಯತೆ ಇದ್ದು ಮಳೆ ಕೊರತೆಯನ್ನು ಕಡಿಮೆ ಮಾಡಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ನದಿ ನೀರಿನ ಮಟ್ಟದಲ್ಲಿ ಏರಿಕೆ
ಭಾರಿ ಮಳೆಯಾಗುವ ಕಾರಣ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮೈಸೂರು ಮತ್ತು ಕೊಡಗು ಜಿಲ್ಲೆಗಳ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ನಿರೀಕ್ಷೆಯಿದೆ. ವಿಜಯಪುರ ಜಿಲ್ಲೆಯ ಡೋಣಿ ನದಿಯಲ್ಲಿ ಪ್ರಸ್ತುತ ಪ್ರವಾಹ ಪರಿಸ್ಥಿತಿ ಸಾಮಾನ್ಯಕ್ಕಿಂತ ಹೆಚ್ಚಿದ್ದು, ನೀರಿನ ಮಟ್ಟದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಜಲ ಆಯೋಗ ಎಚ್ಚರಿಕೆ ಕೊಟ್ಟಿದೆ.
ಜಲಾಶಯಗಳಿಗೆ ಒಳಹರಿವು ಹೆಚ್ಚಳ
ಮುಂಗಾರು ಶುರುವಾಗಿದ್ದರೂ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ನಿರೀಕ್ಷೆ ಮಾಡಿದಷ್ಟು ಮಳೆಯಾಗಿರಲಿಲ್ಲ. ಈಗ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಕೊಟ್ಟಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚುವ ನಿರೀಕ್ಷೆ ಮಾಡಲಾಗಿದೆ.
ಕಳೆದ ವರ್ಷ ಮಳೆ ಕೈಕೊಟ್ಟ ಕಾರಣ ಜಲಾಶಯಗಳು ನೀರಿಲ್ಲದ ಬಣಗುಟ್ಟಿದ್ದವು. ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದ್ದ ಕಾರಣ ಅಲ್ಪ ಪ್ರಮಾಣದಲ್ಲಿ ನೀರಿನ ಒಳಹರಿವು ಇತ್ತು.
ಸದ್ಯ ಜಲಾಶಯಗಳಿಗೆ ನೀರಿನ ಒಳಹರಿವು ನಿರಂತರವಾಗಿದ್ದರೂ ಅದು ಕಡಿಮೆ ಪ್ರಮಾಣದಲ್ಲಿದೆ. ಸತತವಾಗಿ ಭಾರಿ ಮಳೆಯಾದರೆ ಮುಂದಿನ ದಿನಗಳಲ್ಲಿ ಒಳಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ.












Click it and Unblock the Notifications