Rain Alert: ಈ ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ
ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮಳೆ ಅಬ್ಬರಿಸಿತ್ತು. ಚಂಡಮಾರುತದ ಅಬ್ಬರ ಕಡಿಮೆಯಾದರೂ ರಾಜ್ಯದಲ್ಲಿ ಉತ್ತಮ ಮಳೆ ಮುಂದುವರೆದಿದೆ. ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಶನಿವಾರ ಕೂಡ ರಾಜ್ಯದ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಮುಂದಿನ ಮೂರು ಗಂಟೆಗಳಲ್ಲಿ ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾವೇರಿ, ಕೊಡಗು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.

ಶುಕ್ರವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು ಶನಿವಾರ ಕೂಡ ಭಾರಿ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಕೂಡ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಯಲಹಂಕ ಮತ್ತು ಮಹದೇವಪುರ ವಲಯದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬೊಮ್ಮನಹಳ್ಳಿ, ದಕ್ಷಿಣ ವಲಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 15ರವರೆಗೂ ಮಳೆ ಮುನ್ಸೂಚನೆ
ಶನಿವಾರ (ಡಿಸೆಂಬರ್ 7) ರಿಂದ ಡಿಸೆಂಬರ್ 15 ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ & ಮಳೆನಾಡು ಜಿಲ್ಲೆಗಳಲ್ಲಿ ಇನ್ನೊಂದು ವಾರ ಚದುರಿದಂತೆ ಮಳೆಯಾಗಲಿದ್ದು ಉಳಿದ ಕಡೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಫೆಂಗಲ್ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಜಲಾಶಯಗಳಿಗೆ ಮತ್ತೆ ನೀರು ಹರಿದುಬಂದಿದೆ. ಕೃಷ್ಣರಾಜ ಸಾಗರ (ಕೆಆರ್ ಎಸ್) ಜಲಾಶಯ ಮತ್ತೊಮ್ಮೆ ತುಂಬಿದ್ದು ಗರಿಷ್ಠ ಸಾಮರ್ಥ್ಯವನ್ನು ತಲುಪಿದೆ. ಡಿಸೆಂಬರ್ ತಿಂಗಳಿನಲ್ಲೂ ಕೆಆರ್ ಎಸ್ ಭರ್ತಿಯಾಗಿರುವುದು ಈ ಭಾಗದ ರೈತರಲ್ಲಿ ಸಂತಸ ಮೂಡಿಸಿದೆ. ಈ ಬಾರಿ ತಮಿಳುನಾಡಿನ ಜೊತೆ ನೀರಿಗಾಗಿ ಖ್ಯಾತೆ ಇರುವುದಿಲ್ಲ ಎನ್ನುವ ವಿಶ್ವಾಸವಿದೆ. ಉಳಿದಂತೆ ಬಹುತೇಕ ಜಲಾಶಯಗಳು ಕೂಡ ಭರ್ತಿಯಾಗಿದ್ದು ರಾಜ್ಯದಲ್ಲಿ ಈ ಭಾರಿ ನೀರಿನ ಅಭಾವ ಇರುವುದಿಲ್ಲ ಎನ್ನುವ ವಿಶ್ವಾಸವಿದೆ.
ಭಾನುವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಮಲೆನಾಡು ಭಾಗದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಅಕಾಲಿಕ ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ಬೆಳೆಗಳಿಗೆ ಕೂಡ ಹಾನಿಯಾಗಿದ್ದು ರೈತರಿಗೆ ಸಮಸ್ಯೆಯಾಗಿದೆ.












Click it and Unblock the Notifications