Heavy Rain Alert: ಇನ್ನೈದು ದಿನ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರು
ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ಕೂಡ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಧಾರವಾಡ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.
ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಮುಂದಿನ ಐದು ದಿನಗಳು ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗೆ ಹೊಂದಿಕೊಂಡಂತಿರುವ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು, ಮಿಂಚು ಮತ್ತು ಜೋರಾದ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಇನ್ನೂ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಅಬ್ಬರಿಸಿದ್ದರಿಂದ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇದೀಗ ಹಿಂಗಾರು ಕೂಡ ಚುರುಕುಗೊಂಡಿದ್ದು, ರೈತರಲ್ಲಿ ಸಂತಸ ತಂದಿದೆ.
ಈ ಜಿಲ್ಲೆಗಳಲ್ಲಿ ಉತ್ತಮ ಮಳೆ
ಭಾನುವಾರ ಉಡುಪಿ ಜಿಲ್ಲೆಯ ಹಿರ್ಗಾಣದಲ್ಲಿ 125.5 ಮಿ.ಮೀ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಲ್ಮಡ್ಕದಲ್ಲಿ 68.5 ಮಿ.ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಾರ್ಸಿಕಟ್ಟದಲ್ಲಿ 58 ಮಿ.ಮೀ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ 30.5 ಮಿ.ಮೀ ಮಳೆಯಾಗಿದೆ. ಧಾರವಾಡ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು ಮೈಸೂರು, ಹಾವೇರಿ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಿದೆ.
ಬೆಳಗಾವಿ, ಬೆಂಗಳೂರು ನಗರ, ರಾಮನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಗದಗ, ಬಳ್ಳಾರಿ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಿದೆ. ಯಾದಗಿರಿ, ಬಾಗಲಕೋಟೆ, ಬೀದರ್, ವಿಜಯಮಗರ, ಚಿಕ್ಕಬಳ್ಳಾಪುರ, ಕೋಲಾರ, ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆ ಸುರಿದಿದೆ. ಭಾನುವಾರ ಬೆಂಗಳೂರಿನ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಸೋಮವಾರ ಕೂಡ ನಗರದಲ್ಲಿ ಸಂಜೆ ವೇಳೆಗೆ ಮಳೆ ಆರಂಭವಾಗುವ ಸಾಧ್ಯತೆ ಇದೆ.












Click it and Unblock the Notifications