ಸೆಪ್ಟೆಂಬರ್ 19ರವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು, ಸೆಪ್ಟೆಂಬರ್ 16: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇನ್ನಷ್ಟು ದಿನ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಸೆಪ್ಟೆಂಬರ್ 16ರಿಂದ ಮುಂದಿನ ನಾಲ್ಕು ದಿನಗಳ ಕಾಲ, ಅಂದರೆ ಸೆಪ್ಟೆಂಬರ್ 19ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿರುವುದಾಗಿ ತಿಳಿದುಬಂದಿದೆ. ಮುಂಜಾಗ್ರತೆಯಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಯಾದಗಿರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲೂ ಮಳೆ ಮುಂದುವರೆಯುವುದಾಗಿ ತಿಳಿದುಬಂದಿದೆ.

ಸೆಪ್ಟೆಂಬರ್ 19ರವರೆಗೂ ಮಳೆ
ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 19ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.ಈ ನಡುವೆ ಚಿಕ್ಕಮಗಳೂರು, ಮಡಿಕೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದೆ.

ಉತ್ತರ ಕರ್ನಾಟಕದಲ್ಲೂ ಮಳೆ ಮುಂದುವರಿಕೆ
ಉತ್ತರ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೀದರ್ ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಲಿದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇದೆ.

ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಾದ ಮಳೆ
ಕಲಬುರಗಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಕಲಬುರಗಿಯ ಸೇಡಂ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಗಿಣಾ ನದಿ ಉಕ್ಕಿ ಹರಿದು, ಮಳಖೇಡ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಹೀಗಾಗಿ ಕಲಬುರಗಿಗೆ ಸಂಪರ್ಕ ಕಡಿತಗೊಂಡಿದೆ. ಕಲಬುರಗಿಯ ಕಮಲಾಪುರದಲ್ಲಿಯೂ ಅತಿಹೆಚ್ಚು ಮಳೆಯಾಗಿದೆ.

ಬಳ್ಳಾರಿ, ಬೀದರ್ ನಲ್ಲಿ ಮುಂದುವರೆದ ಮಳೆ
ಬಳ್ಳಾರಿ ಹಾಗೂ ಬೀದರ್ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ನಿಲ್ಲುವಂತೆ ಕಾಣುತ್ತಿಲ್ಲ. ಬೀದರ್ ನಲ್ಲಿ ಮಳೆಯಿಂದಾಗಿ ಜಮೀನುಗಳು ಜಲಾವೃತವಾಗಿದ್ದು, ಬೆಳೆಹಾನಿ ಸಂಭವಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಸಂಡೂರು, ಹೊಸಪೇಟೆ ಹಾಗೂ ಕೂಡ್ಲಿಗಿ ತಾಲೂಕುಗಳಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಸಂಡೂರು ತಾಲೂಕಿನಲ್ಲಿ ಮಳೆಯಿಂದಾಗಿ ಅದಿರು ಸಾಗಣೆ ಮಾಡುವ ಲಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.












Click it and Unblock the Notifications