Hemavathi Dam: ಮಳೆ ಆರ್ಭಟ; ಹೇಮಾವತಿ ಜಲಾಶಯದಿಂದ 45-50 ಸಾವಿರ ಕ್ಯೂಸೆಕ್ ನೀರು ನದಿಗೆ; ಪ್ರವಾಹದ ಮುನ್ನೆಚ್ಚರಿಕೆ
ಹಾಸನ, ಜುಲೈ 25: ಕರ್ನಾಟಕಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿಕೊಳ್ಳದಲ್ಲಿ ವ್ಯಾಪಕ ನೀರು ಹರಿಯುತ್ತಿದ್ದು ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಭರ್ತಿಯಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೊಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದ್ದು, ಪ್ರಸ್ತುತ ಜಲಾಶಯಕ್ಕೆ 23363 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 22532 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಅಂತೆಯೇ ಪ್ರಸ್ತುತ ಜಲಾಶಯದಲ್ಲಿನ ಇಂದಿನ ನೀರಿನ ಮಟ್ಟ 2921.02 ಅಡಿಗಳಿಗೆ ಏರಿಕೆಯಾಗಿದ್ದು, ಹೇಮಾವತಿ ಜಲಾಶಯದ ಗರಿಷ್ಟ ನೀರಿನ ಮಟ್ಟ 2922.00 ಅಡಿಗಳಷ್ಟಿದ್ದು, 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ.

ಹೇಮಾವತಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಗೊರೂರಿನ ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮದಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 45 ಸಾವಿರದಿಂದ 50 ಸಾವಿರ ಕ್ಯುಸೆಕ್ ನೀರನ್ನು ಹೇಮಾವತಿ ನದಿಗೆ ಬಿಡಲಾಗುತ್ತಿದೆ. ಅಲ್ಲದೇ ಈ ಪ್ರಮಾಣವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಮಾವತಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ. ಹೇಮಾವತಿ ನದಿ ತೀರದ ಹಾಗೂ ತಗ್ಗು ಪ್ರದೇಶಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಬೇಕು. ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ತಿಳಿಸಿದ್ದಾರೆ.












Click it and Unblock the Notifications