ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಅಂಗನವಾಡಿ ಶಾಲೆಗಳಿಗೆ ರಜೆ; ಕಾಲೇಜುಗಳ ಮುಖ್ಯಸ್ಥರಿಗೆ ಡಿಸಿ ಕೊಟ್ಟ ಸೂಚನೆ ಏನು?
ಬೆಂಗಳೂರು, ಅಕ್ಟೋಬರ್ 23: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು(ಅಕ್ಟೋಬರ್ 23) ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ರವರು ಆದೇಶಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

ಕಾಲೇಜುಗಳ ಮುಖ್ಯಸ್ಥರಿಗೆ ಡಿ ಸಿ ಕೊಟ್ಟ ಸೂಚನೆ ಏನು?
* ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
* ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
* ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
* ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು.
* ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
* ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಚೌಡೇಶ್ವರಿ ನಗರದಲ್ಲಿ 160 ಎಂ.ಎಂ ಮಳೆ
ನಗರದ ಯಲಹಂಕ, ಮಹದೇವಪುರ, ದಾಸರಹಳ್ಳಿ ವಲಯದಲ್ಲಿ ಕಳೆದ 72 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದ ಕೆರೆಗಳೆಲ್ಲಾ ತುಂಬಿ ಕೋಡಿಯಲ್ಲಿ ಹೆಚ್ಚು ನೀರು ಹರಿದು ರಾಜಕಾಲುವೆಗಳಿಗೆ ಬರುತ್ತಿರುವ ಕಾರಣ ವಿವಿಧ ಪ್ರದೇಶಗಳು ಜಲಾವೃತವಾಗಿರುತ್ತದೆ. ಚೌಡೇಶ್ವರಿ ನಗರದಲ್ಲಿ 160 ಎಂ.ಎಂ ಮಳೆಯಾಗಿದ್ದು, ಇದು ಇತಿಹಾಸದಲ್ಲಿಯೇ ಅತಿ ಹೆಚ್ಚು ಮಳೆಯಾಗಿರುತ್ತದೆ.
ಬೆಂಗಳೂರುಲ್ಲಿ ಅಕ್ಟೋಬರ್ ತಿಂಗಳಲ್ಲಿ 245 ಎಂಎಂ ಮಳೆ
ಬೆಂಗಳೂರುಲ್ಲಿ ಅಕ್ಟೋಬರ್ ತಿಂಗಳಲ್ಲಿ 245 ಎಂಎಂ ಮಳೆಯಾಗಿದ್ದು, ಇದು ಅತಿ ಹೆಚ್ಚು ಮಳೆಯಾಗಿರುವ ಪೈಕಿ ನಾಲ್ಕನೇ ಮಳೆಯಾಗಿದೆ. ನಗರದಲ್ಲಿ ಪ್ರಸ್ತುತ ಹವಾಮಾನ ಬದಲಾವಣೆಯಿಂದಾಗಿ ಮೂರು-ನಾಲ್ಕು ದಿನಗಳಿಂದ ಹಲವಾರು ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದೆ. ಪ್ರವಾಹ ಪೀಡಿತ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು, ನಿರ್ವಹಿಸಲು ಮತ್ತು ಯಾವುದೇ ತುರ್ತು ಪರಿಸ್ಥಿತಿಗಳಿಗೆ ತ್ವರಿತವಾಗಿ ಪ್ರತಿಕ್ರಿಯಿಸಲು ಪಾಲಿಕೆ, ಎನ್.ಡಿ.ಆರ್.ಎಫ್. ಎಸ್.ಡಿ.ಆರ್.ಎಫ್, ಅಗ್ನಿ ಶಾಮಕ ದಳದ ತಂಡಗಳು 24/7 ಕಾರ್ಯನಿರ್ವಹಿಸುತ್ತಿವೆ.












Click it and Unblock the Notifications