ಮುಂಗಾರು ಮಳೆ ಅಬ್ಬರ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ
ಬೆಂಗಳೂರು, ಜುಲೈ 6: ಎರಡು ಮೂರು ದಿನಗಳಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಒಂದನೇ ತರಗತಿಯ ಬಾಲಕಿ ಕೊಚ್ಚಿ ಹೋದ ಬೆನ್ನಲ್ಲೇ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಯ 6 ತಾಲೂಕುಗಳಲ್ಲಿ ನಾಲ್ಕು ದಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಎನ್. ಆರ್. ಪುರ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಬುಧವಾರದಿಂದ ಜುಲೈ 9ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಈ ಅವಧಿ ಪಠ್ಯಗಳನ್ನು ಮುಂದಿನ ಸಾರ್ವಜನಿಕ ರಜೆಗಳ ಸಂದರ್ಭದಲ್ಲಿ ಸರಿದೂಗಿಸಿಕೊಳ್ಳುವುಕ್ಕೆ ಸೂಚಿಸಲಾಗಿದೆ.
ಮಂಗಳೂರಿನಲ್ಲಿ ಮೂರು ದಿನಗಳಿಂದಲೂ ಮಳೆ ಸುರಿಯುತ್ತಿರುವುದರಿಂದ ಮಂಗಳವಾರ ರಜೆ ನೀಡಲಾಗಿತ್ತು. ಇದೀಗ ಬುಧವಾರವೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
2018ರಲ್ಲಿ ಮಳೆಯಿಂದ ಭಾರೀ ಅನಾಹುತಕ್ಕೀಡಾಗಿದ್ದ ಕೊಡುಗು ಜಿಲ್ಲೆಯಲ್ಲಿ ವಾರದಿಂದಲೂ ಮಳೆ, ಭೂಕುಸಿತ ಸಂಭಿಸುತ್ತಿದೆ. ಕೆಲವು ರಸ್ತೆಗಳು ತುಂಬಿ ಹರಿಯುತ್ತಿರುವುದರಿಂದ ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ್ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲೂ ವರುಣನ ಆರ್ಭಟ ಹೆಚ್ಚಾಗಿದ್ದು, ಮಲೆನಾಡು ಭಾಗದ ತೀರ್ಥಹಳ್ಳಿ , ಸಾಗರ ಹಾಗೂ ಹೊಸನಗರ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಕೆಲವು ಕಡೆ ಹೆದ್ದಾರಿಗಳಲ್ಲಿ ಗುಡ್ಡಗಳು ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರವೂ ಕೂಡ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.












Click it and Unblock the Notifications