ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ, ಉಳಿದ ಜಿಲ್ಲೆಗಳಲ್ಲಿ ಸಾಧಾರಣ
ಬೆಂಗಳೂರು, ಜುಲೈ 2: ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಬೆಳಗಾವಿ, ಬೀದರ್, ಧಾರವಾಡ ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ , ತುಮಕೂರು ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ,ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಏಳುತ್ತಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕುಂದಾಪುರ, ಶಿರಾಲಿ, ಕೊಲ್ಲೂರು, ಕಾರವಾರ, ಕೋಟಾ, ಮೂಡಬಿದಿರೆ, ಸಿದ್ದಾಪುರ, ಹೊಸನಗರ, ಬ್ರಹ್ಮಾವರ, ಕಾರ್ಕಳ, ಮಂಚಿಕೆರೆ, ಯಲ್ಲಾಪುರ, ಬೆಳಗಾವಿ, ಭಾಗಮಂಡಲ, ಕೊಟ್ಟಿಗೆಹಾರ, ಮೊಳಕಾಲ್ಮೂರು, ಗೌರಿ ಬಿದನೂರಿನಲ್ಲಿ ಮಳೆಯಾಗಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಜುಲೈ 2 ಹಾಗೂ 3 ರಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರೆಯಲಿದೆ, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications