ಆಗಸ್ಟ್ 9 ರಿಂದ 13ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ
ಬೆಂಗಳೂರು, ಆಗಸ್ಟ್ 09: ರಾಜ್ಯದ 7 ಜಿಲ್ಲೆಗಳಲ್ಲಿ ಆಗಸ್ಟ್ 13ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಅತ್ಯಧಿಕ ಮಳೆ ಸುರಿಯಲಿದೆ ಎನ್ನಲಾಗಿದೆ.
Recommended Video
ಕಳೆದ ಎರಡು ದಿನಗಳಿಂದ ಕರಾವಳಿ ಭಾಗಗಳಲ್ಲಿ ಮಳೆ ಕೊಂಚ ಬಿಡುವು ನೀಡಿ ಅಲ್ಲಲ್ಲಿ ಇಡೀ ದಿನ ಬಿಸಿಲು ಬಂದಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿದ್ದಾರೆ.
ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ 9 ರಿಂದ 13 ರವರೆಗೆ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಉತ್ತರ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಿದೆ.
ಮುಂಗಾರು ಪ್ರಭಾವದಿಂದಾಗಿ ಮುಂದಿನ 5 ದಿನಗಳವರೆಗೂ ಹಲವು ರಾಜ್ಯದಾದ್ಯಂತ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ಅಧಿಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದ್ದಾರೆ.
ಇದೇ ವೇಳೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವುದಾಗಿ ತಿಳಿಸಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರುವುದಾಗಿ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಗಂಟೆಗೆ 50 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.3.6 ಮೀಟರ್ ಎತ್ತರದ ಅಲೆಗಳು ಏಳುವ ಸೂಚನೆ ಇದೆ. ಮೀನುಗಾರರು ಆ.13ರ ತನಕ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಮನೆಗಳಿಗೆ ಪೂರ್ಣ ಹಾನಿಯಾಗಿದೆ. 6 ಮನೆಗಳು ಭಾಗಶಃ ಜಖಂಗೊಂಡಿವೆ. 46 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಬೆಟ್ಟಗೆರೆಯಲ್ಲಿ ಬಸ್ ನಿಲ್ದಾಣ ಕುಸಿದು ಬಿದ್ದಿದೆ. ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಕಕ್ಕಬ್ಬೆ, ಬಕ್ಕ, ಭಾಗಮಂಡಲದಲ್ಲಿ ಶನಿವಾರ ಉತ್ತಮ ಮಳೆಯಾಗಿದೆ.
ಮುಕ್ಕೋಡ್ಲು-ಹೆಮ್ಮೆತ್ತಾಳು ಸಣ್ಣ ಸೇತುವೆಗೆ ಹಾನಿಯಾಗಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಳೆಯಾಗಿದೆ. ಅಂಕೋಲಾ, ಹೊನ್ನಾವರ, ಭಟ್ಕಳ, ಮುಂಡಗೋಡ, ಶಿರಸಿ ಭಾಗದಲ್ಲಿಯೂ ಶನಿವಾರ ಮಳೆ ಸುರಿದಿದೆ.
ಕೊಡಗು ಮಳೆ ವಿವರ ಕೊಡಗು ಜಿಲ್ಲೆಯಲ್ಲಿ ಸರಾಸರಿ 41.08 ಮಿಮೀ ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 1865.72 ಮಿಮೀ ಮಳೆ ಸುರಿದಿದೆ. ಮಡಿಕೇರಿ ತಾಲೂಕಿನಲ್ಲಿ 63.23 ಮಿಮೀ, ವಿರಾಜಪೇಟೆ ತಾಲೂಕಿನಲ್ಲಿ 18.70 ಮಿಮೀ ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 41.30 ಮಿಮೀ ಮಳೆಯಾಗಿದೆ.
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕಾವೇರಿ ನದಿಯ ನೀರಿನ ಮಟ್ಟವೂ ಹೆಚ್ಚಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‍ಎಸ್ ಜಲಾಶಯಕ್ಕೆ 21.454 ಕ್ಯುಸೆಕ್ ನೀರು ಹರಿದುಬರುತ್ತಿದೆ. ಜಲಾಶಯ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಇಂದಿನ ನೀರಿನ ಮಟ್ಟ 35.82 ಮೀಟರ್.

ಎಲ್ಲೆಲ್ಲಿ ಅತ್ಯಧಿಕ ಮಳೆಯಾಗಿದೆ?
ಗೋಕರ್ಣ, ಆಗುಂಬೆ, ಹುಂಚದಕಟ್ಟೆ, ಸುಬ್ರಹ್ಮಣ್ಯ, ಧರ್ಮಸ್ಥಳ, ವಿಟ್ಲ, ಭಾಗಮಂಡಲ, ಪುತ್ತೂರು, ಜಯಪುರ, ಶೃಂಗೇರಿ, ಹೊನ್ನಾವರ, ಮಂಗಳೂರು, ಆನವಟ್ಟಿ, ಸಿದ್ದಾಪುರ, ಕೊಲ್ಲೂರು, ಪಣಂಬೂರು, ಮುಲ್ಕಿ, ಕೊಟ್ಟಿಗೆಹಾರ, ಅಂಕೋಲಾ, ಕಾರವಾರ, ಹಳಿಯಾಳ, ಗದಗ, ಹಾವೇರಿ, ಹಿರೆಕೆರೂರು, ತ್ಯಾಗರ್ತಿ, ಭದ್ರಾವತಿ, ಚನ್ನಗಿರಿ, ದಾವಣಗೆರೆಯಲ್ಲಿ ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯಾಗಲಿದೆ?
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾವಾನ ಇಲಾಖೆ ಮುನ್ಸೂಚನೆ ನೀಡಿದೆ.ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ತಗ್ಗುಪ್ರದೇಶದಲ್ಲಿರುವ ಜನರ ಸ್ಥಳಾಂತರ
ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿವೆ. 342 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಆಗುಂಬೆ ಮತ್ತು ಕುಕ್ಕೆ ಸುಬ್ರಮಣ್ಯದಲ್ಲಿ ತಲಾ 10 ಸೆಂಮೀ ಮಳೆಯಾಗಿದೆ. ಮಡಿಕೇರಿಯಲ್ಲಿ 9, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 7 ಸೆಂಮೀ ಮಳೆ ಸುರಿದಿದೆ. ಕಾರ್ಕಳದಲ್ಲಿ 5, ಕುಂದಾಪುರ ಮತ್ತು ಕೊಪ್ಪದಲ್ಲಿ 4 ಸೆಂಮೀ ಮಳೆಯಾಗಿದೆ.
ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.












Click it and Unblock the Notifications