ರಾಜ್ಯದ 7 ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ಆಗಸ್ಟ್ 06: ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ , ಉಡುಪಿ, ಶಿವಮೊಗ್ಗ, ಚಿಕ್ಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಅರ್ಭಟ ಮುಂದುವರೆದಿದ್ದು, ಮಲೆನಾಡು, ಕರಾವಳಿ ಭಾಗದಲ್ಲಿ ಗುರುವಾರ ವ್ಯಾಪಕ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶುಕ್ರವಾರದಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ , ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾದರೆ, ರಾಜ್ಯದ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಇದರ ಜೊತೆಗೆ ಮಲೆನಾಡು ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ನಿರೀಕ್ಷೆಯಿರುವುದರಿಂದ ನಾಳೆ ಮತ್ತು ನಾಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ವರದಿ ಹೇಳಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಳೆದೊಂದು ದಿನದಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. ಇಂದು ಕೂಡಾ ಈ ಪ್ರದೇಶಗಳಲ್ಲಿ ಬೆಳಗ್ಗೆಯಿಂದಲೇ ದಟ್ಟ ಮೋಡ ಕವಿದ ವಾತಾವರಣವಿದ್ದು, ಮಳೆ ಆಗುತ್ತಿದೆ.
ಆಗಸ್ಟ್ 6 ರಿಂದ ಆಗಸ್ಟ್ 8ರ ವರೆಗೆ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯೂ ಮುನ್ನೆಚ್ಚರಿಕೆ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೊಷಿಸಲಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿನ್ನೆ ಪ್ರಕಟಿಸಿರುವ ಮಳೆ ಮುನ್ಸೂಚನೆ ಮಾಹಿತಿ ಪ್ರಕಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ ಆಗಲಿದೆ.
ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಕಳೆದ ತಿಂಗಳು ಸುಮಾರು 15 ದಿನಕ್ಕೂ ಹೆಚ್ಚು ಕಾಲ ಸುರಿದ ಭಾರೀ ಮಳೆಯಿಂದ ಅವಾಂತರವೇ ಸೃಷ್ಟಿಯಾಗಿತ್ತು. ನದಿಗಳು ಉಕ್ಕಿ ಹರಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು. ನೋಡನೋಡುತ್ತಿದ್ದಂತೆಯೇ ಮನೆ ಮಠ ಸಾಕು ಪ್ರಾಣಿಗಳು ಕೊಚ್ಚಿ ಹೋಗಿದ್ದವು.
ವರ್ಷಪೂರ್ತಿ ಬೆವರು ಸುರಿಸಿ ಬೆಳೆದಿದ್ದ ಬೆಳೆ ಪ್ರವಾಹಕ್ಕೆ ಕೊಚ್ಚಿ ಹೋಗಿ ಬದುಕು ದುಸ್ತರಗೊಂಡಿದೆ. ಇದೆಲ್ಲಾ ಆಗಿ ಅರ್ಧ ತಿಂಗಳು ಕಳೆಯುವ ಮೊದಲೇ ಮಳೆ ಮತ್ತೆ ತನ್ನ ರೌದ್ರಾವತಾರ ಪ್ರದರ್ಶಿಸಲಾರಂಭಿಸಿದ್ದು, ಜನರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ.

ಆಗಸ್ಟ್ 8ರವರೆಗೂ ಮಳೆ
ರಾಜ್ಯದ ಕರಾವಳಿ ಭಾಗದಲ್ಲಿ ಆ.8ರ ತನಕ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಯಾವ್ಯಾವ ಪ್ರದೇಶಗಳಲ್ಲಿ ಮಳೆಯಾಗಲಿದೆ?
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಆ.5 ಮತ್ತು ಆ.6ರಂದು ಯಲ್ಲೋ ಆಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಾದ ಧಾರವಾಡ, ಹಾವೇರಿ, ಗದಗ, ಬಿಜಾಪುರ, ಕಲಬುರಗಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಮಳೆ
ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬುಧವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನ ಕೆಲವು ಸ್ಥಳದಲ್ಲಿ ಮಳೆಯಾಗಿದೆ. ರಾಜ್ಯದಲ್ಲಿ ಕೆಲವೆಡೆ ಮಳೆ ಕೊರತೆ ಉಂಟಾಗಿದ್ದು, ಕೃಷಿ ಕಾರ್ಯಕ್ಕೂ ತೊಂದರೆಯಾಗಿದೆ.
Recommended Video

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications