ಆಗಸ್ಟ್ 11ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಆಗಸ್ಟ್ 07: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಪ್ರಭಾವದಿಂದಾಗಿ ಮುಂದಿನ 5 ದಿನಗಳವರೆಗೂ ಹಲವು ರಾಜ್ಯದಾದ್ಯಂತ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Recommended Video

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದ್ದಾರೆ. ಇದೇ ವೇಳೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವುದಾಗಿ ತಿಳಿಸಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರುವುದಾಗಿ ತಿಳಿಸಿದ್ದಾರೆ.
ಈ ನಡುವೆ ಗುರುವಾರ ಸಂಜೆ 5.30ರವರೆಗೆ ಬೆಂಗಳೂರಿನಲ್ಲಿ 4.6 ಎಂಎಂ ನಷ್ಟು ಮಳೆಯಾಗಿದ್ದು, ಹೆಚ್ಎಎಲ್ ನಲ್ಲಿ 0.9 ಎಂಎಂ ನಷ್ಟು ಮಳೆಯಾಗಿದೆ ಎಂದು ತಿಳಿದುಬಂದಿದೆ.
ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ಅಧಿಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಮಡಿಕೇರಿ, ಧರ್ಮಸ್ಥಳ, ತೀರ್ಥಹಳ್ಳಿ, ಆಗುಂಬೆ, ಭಾಗಮಂಡಲ, ತುಮ್ರಿ, ಬೆಳ್ತಂಗಡಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಬುಧವಾರ ಆಗುಂಬೆಯಲ್ಲಿ 11 ಸೆಂ.ಮೀ, ಸಂತನಹಳ್ಳಿಯಲ್ಲಿ 6 ಸೆಂ.ಮೀ ಮಳೆಯಾಗಿದೆ. ಕರಾವಳಿಯಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಈಗಾಗಲೇ ಹವಾಮಾನ ಇಲಾಖೆ ಈ ಪ್ರದೇಶದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರಿನ ಬೊಮ್ಮನಹಳ್ಳಿಯ ಸಿಂಗಸಂದ್ರದಲ್ಲಿ 13 ಮಿ.ಮೀ. ಮಳೆಯಾಗಿದೆ. ಅದೇ ರೀತಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳದಲ್ಲಿ 120 ಮಿ.ಮೀ. ಮಳೆಯಾಗಿದೆ. ನಿನ್ನೆ ರಾಜ್ಯದಲ್ಲಿ ಅತ್ಯಧಿಕ ಮಳೆಯಾಗಿರುವ ಪ್ರದೇಶ ಇದಾಗಿದೆ.

ಮಲೆನಾಡು ಭಾಗದಲ್ಲಿ ಚದುರಿದ ಮಳೆ
ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಜೋರು
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ರಾಮನಗರಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.ಇನ್ನು, ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಕೊಂಚ ಮಳೆಯಾಗಲಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು ಕರಾವಳಿಯಿಂದ ಕರ್ನಾಟಕ ಕರಾವಳಿವರೆಗೆ ಇಂದು ವ್ಯಾಪಕ ಮಳೆಯಾಗಲಿದೆ. ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಿಕ್ಕಮಗಳೂರಿನಲ್ಲೂ ಮಳೆ
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿವೆ. 342 ಟ್ರಾನ್ಸ್ಫಾರ್ಮರ್ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.
ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.

ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications