ಜುಲೈ 2ರಿಂದ 5ರವರೆಗೆ ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ
ಬೆಂಗಳೂರು, ಜುಲೈ 02: ರಾಜ್ಯದ ಉತ್ತರ ಒಳನಾಡಿನಲ್ಲಿ ಜುಲೈ 2 ರಿಂದ 5ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Recommended Video
ಕಳೆದ ಒಂದು ವಾರದಿಂದಲೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ರಾಯಚೂರು ಭಾಗದಲ್ಲಿ ಭಾರೀ ಮಳೆಯಾಗಿತ್ತು. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಜುಲೈ 5ರವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ನಾಲ್ಕು ದಿನ ಮಳೆ
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು 4 ದಿನ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ಸಂಜೆಯ ಬಳಿಕ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.

ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ
ಇಂದು ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವಿಪರೀತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಬೈ, ಮೇಘಾಲಯದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಕೆರೆಗಳಂತಾಗಿವೆ. ಮೇಘಾಲಯದಲ್ಲಿ ಮಳೆಗೆ ಸೇತುವೆಗಳೇ ಕೊಚ್ಚಿಕೊಂಡು ಹೋಗಿವೆ. ದೆಹಲಿಯಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಬಿಸಿಲಿನಿಂದ ಕಾದ ನೆಲಕ್ಕೆ ತಂಪೆರೆದಿದೆ.

ಕರಾವಳಿ ಭಾಗದಲ್ಲಿ ಮಳೆ
ಪುದುಚೆರಿ, ಉತ್ತರ ಪ್ರದೇಶ, ಗೋವಾ, ಕರಾವಳಿ ಕರ್ನಾಟಕ ಅರುಣಾಚಲಪ್ರದೇಶ, ಮಿಜೋರಾಂ, ಪಶ್ಚಿಮ ಬಂಗಾಳ, ಕೇರಳ ಸಿಕ್ಕಿಂ, ಬಿಹಾರ, ಅಸ್ಸಾಂ, ಮೇಘಾಲಯ, ಉತ್ತರಾಖಂಡ, ನಾಗಾಲ್ಯಾಂಡ್, ತಮಿಳುನಾಡು, ತೆಲಂಗಾಣದಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ.

ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.










Click it and Unblock the Notifications