Dam Water Level: ಭರ್ತಿಯಾಗುವ ಹಂತ ತಲುಪಿದ ಹೇಮಾವತಿ & ಹಾರಂಗಿ ಜಲಾಶಯಗಳು-ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ?
Dam Water Level: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟದಿಂದ ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಹಾಗೆಯೇ ಹಾಸನ ಜಿಲ್ಲೆಯಲ್ಲಿರುವ ಹೇಮಾವತಿ ಜಲಾಶಯ ಭರ್ತಿಯಾಗುವ ಹಂತವನ್ನು ತಲುಪಿದೆ. ಅಲ್ಲದೆ, ಇನ್ನೂ ಮಳೆರಾಯನ ಆರ್ಭಟ ಮುಂದುವರೆದ ಹಿನ್ನೆಲೆ ಈ ಭಾಗದ ನದಿ ತೀರದ ಜನರಿಗೆ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ.
ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು (ಜುಲೈ 18) 30,547 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದುಬರುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟವು 2,922.00 ಅಡಿಗಳಾಗಿದ್ದು, ಇನ್ನೂ 9.45 ಅಡಿಗಳಷ್ಟು ನೀರನ್ನು ಜಲಾಶಯದಲ್ಲಿ ಸಂಗ್ರಹಿಸಬದಾಗಿರುತ್ತದೆ.

ಆದರೆ, ಜಲಾನಯನ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜಲಾಶಯದಿಂದ ಯಾವುದೇ ಸಮಯದಲ್ಲಾದರೂ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬೊಡುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ.
ಈ ಹಿನ್ನೆಲೆ ಹೇಮಾವತಿ ನದಿ ಪಾತ್ರ, ನದಿ ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲಾ ಗ್ರಾಮಸ್ಥರು/ಸ್ಥಳೀಯ ವಾಸಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತಕ್ಷಣವೇ ತೆರಳುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ನದಿಪಾತ್ರದ ವಾಪ್ತಿಯಲ್ಲಿನ ಎಲ್ಲಾ ನೀರಾವರಿ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಕಂದಾಯ ಇಲಾಖೆಯ ಇತರೆ ಎಲ್ಲಾ ಅಧಿಕಾರಿಗಳು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕಿದೆ ಅಂತಲೂ ತಿಳಿಸಲಾಗಿದೆ.
ಹೇಮಾವತಿ ನದಿ ಪಾತ್ರ, ನದಿ ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲಾ ಗ್ರಾಮಸ್ಥರು/ಸ್ಥಳೀಯ ವಾಸಿಗಳಿಗೆ ಸೂಕ್ತ ತಿಳುವಳಿಕೆ ನೀಡಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೋರಲಾಗಿದೆ.
ಇನ್ನು ಹೇಮಾವತಿ ಜಲಾಶಯದ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 37.10 ಟಿಎಂಸಿ ಆಗಿದ್ದು, ಅಂದರೆ 2,922 ಅಡಿ ಆಗಿದ್ದು, ಈಗಾಗಲೇ 2914.65 ಅಡಿಗೆ ಬಂದು ತಲುಪಿದೆ. ಒಳಹರಿವು 41,000 ಕ್ಯೂಸೆಕ್ ಆಗಿದ್ದರೆ, ಹೊರಹರಿವು 2,000 ಕ್ಯೂಸೆಕ್ ಆಗಿದೆ. ಇನ್ನು ಜಲಾಶಯದ ಭರ್ತಿಯಾಗಲು ಕೆಲವೇ ಅಡಿಗಳಷ್ಟೇ ಬಾಕಿಯಿರುವ ಹಿನ್ನೆಲೆ ಹೇಮಾವತಿ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಪರಿಣಾನ ಇಲ್ಲಿನ ನದಿ ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಅಲ್ಲದೆ, 8.5 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಿಲ್ಲೆಯ ಹಾರಂಗಿ ಜಲಾಶಯದಲ್ಲಿ ಇದೀಗ ನೀರಿನ ಮಟ್ಟ 2,853.45 ಅಡಿ ಇದ್ದು, ಒಳಹರಿವು 16,180 ಕ್ಯೂಸೆಕ್, ಹೊರಹರಿವು 10,000 ಕ್ಯೂಸೆಕ್ ಇದೆ.












Click it and Unblock the Notifications