Cauvery Dispute: ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ? ಎಚ್‌ಡಿಕೆ ಪ್ರಶ್ನೆ
ಕನ್ನಡಿಗರಿಗೆ ಇಂದು ದೊಡ್ಡ ಆಘಾತ ಸಿಕ್ಕಿದ್ದು, ಈ ಬಾರಿ ಹನಿ ನೀರು ಇಲ್ಲದೆ ಕಾವೇರಿಯ ಕೊಳ್ಳ ಬತ್ತಿ ಹೋಗುವುದು ಗ್ಯಾರಂಟಿ ಆಗುತ್ತಿದೆ. ಈ ವಿಚಾರವಾಗಿ ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದ್ದು, ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಹಾಗಾದರೆ ಮಾಜಿ ಸಿಎಂ ಎಚ್‌ಡಿಕೆ ಹೇಳಿದ್ದೇನು?
ಅಷ್ಟಕ್ಕೂ ತಮಿಳುನಾಡಿಗೆ 5000 ಕ್ಯುಸೆಕ್ ನೀರು ಹರಿಸಲು ಕಾವೇರಿ ಪ್ರಾಧಿಕಾರ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ಕೋರಿ ಕರ್ನಾಟಕ ಅರ್ಜಿ ಸಲ್ಲಿಸಿತ್ತು. ಆದರೆ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಬೆನ್ನಲ್ಲೇ ಕಾವೇರಿ ಕಿಚ್ಚು ಜೋರಾಗಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಕೂಡ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ನೀರಾವರಿ ಬಗ್ಗೆ ಕನಿಷ್ಠ ಜ್ಞಾನ...
ಪ್ರಸ್ತುತ ಬೆಳವಣಿಗೆ ಬಗ್ಗೆ ವಿಸ್ತೃತವಾಗಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ. ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.
ರಾಜಕೀಯ ಹಿತವೇ ಮುಖ್ಯವಾಯ್ತಾ?
ಹೆಜ್ಜೆಹೆಜ್ಜೆಗೂ ತಪ್ಪು ಮಾಡಿದ್ದು @INCKarnataka ಸರಕಾರ. ಈ ಮಾತನ್ನು ನಾನು ಸರ್ವಪಕ್ಷ ಸಭೆಯಲ್ಲೇ ಒತ್ತಿ ಹೇಳಿದ್ದೆ. ಕಾವೇರಿ ಜಲ ನಿಯಂತ್ರಣ ಸಮಿತಿ & ಪ್ರಾಧಿಕಾರದ ನಿರ್ದೇಶನ ಬರುವುದಕ್ಕೂ ಮೊದಲೂ ಹೇಳಿದ್ದೆ. ಹೇಳಿದ ಮಾತನ್ನು ಕೇಳಿಸಿಕೊಳ್ಳುವ ಸೌಜನ್ಯ, ಜನಪರ ಕಾಳಜಿ ಸರಕಾರಕ್ಕೆ ಇರಲೇ ಇಲ್ಲ. ರಾಜ್ಯ ಸರಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯವಾಗಿದೆ. ತಮಿಳುನಾಡಿನ ಜತೆ ಆ ಪಕ್ಷದ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡ ಕಾರಣಕ್ಕೆ ಕಾವೇರಿ ಹಿತವನ್ನು ವ್ಯವಸ್ಥಿತವಾಗಿ ಬಲಿ ಕೊಡಲಾಗಿದೆ ಎಂದಿದ್ದಾರೆ ಎಚ್‌ಡಿಕೆ.
ಸರ್ಕಾರದ ನಡೆಗೆ ತೀವ್ರ ಆಕ್ರೋಶ
ಆ.10ರಂದು ಕಾವೇರಿ ಜಲ ನಿಯಂತ್ರಣ ಸಮಿತಿ ಸಭೆ ನಡೆಯಿತು. ಮರುದಿನ ಕಾವೇರಿ ಜಲನಿರ್ವಹಣಾ ಪ್ರಾಧಿಕಾರ ಸಭೆ ಆಯಿತು. ಮುಂದಿನ 15 ದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಿ ಎಂದು ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿತು. ತಕ್ಷಣವೇ ಸುಪ್ರೀಂಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಿ, ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು ಎಂದು ರಾಜ್ಯ ಸರ್ಕಾರದ ನಡೆಗೆ ಕುಮಾರಸ್ವಾಮಿ ಆಕ್ರೋಶವನ್ನೂ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್ ಕಡೆ ಮುಖ ಮಾಡದೆ I.N.D.I.A ಕೂಟಕ್ಕೆ ಶಕ್ತಿ ತುಂಬಲು ಪ್ರಾಧಿಕಾರದ ಆದೇಶ ನೆಪ ಮಾಡಿಕೊಂಡು ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿತು. ತನ್ನ ತಲೆ ಮೇಲೆ ತಾನೇ ಚಪ್ಪಡಿ ಎಳೆದುಕೊಂಡು, ಅದೇ ಚಪ್ಪಡಿಯನ್ನು ಕನ್ನಡಿಗರ ಮೇಲೂ ಎಳೆದುಬಿಟ್ಟಿತು ಎಂದಿರುವ ಎಚ್‌ಡಿಕೆ ಅವರು, ಸರಕಾರ ಎಸಗಿದ ತಪ್ಪು ಇಷ್ಟೇ ಅಲ್ಲ, ನಿಯಂತ್ರಣ ಸಮಿತಿ & ಪ್ರಾಧಿಕಾರದ ಸಭೆಗಳನ್ನು ಬಹಳ ಲಘುವಾಗಿ ಪರಿಗಣಿಸಿತು. ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ಕೊಟ್ಟ ಸಲಹೆಗಳನ್ನೂ ಗಾಳಿಗೆ ತೂರಿತು. ನಮ್ಮ ಸಲಹೆಗೆ ಕವಡೆಕಾಸಿನ ಕಿಮ್ಮತ್ತೂ ಕೊಡದೆ ಕನ್ನಡಿಗರ ಹಿತವನ್ನು ತನ್ನ ರಾಜಕೀಯ ಸ್ವಾರ್ಥಕ್ಕೆ ಬಲಿ ಮಾಡಿತು ಎಂದು ಆರೋಪಿಸಿದ್ದಾರೆ.
ದೇವೇಗೌಡರು ಹೋರಾಡಿದರೂ...
ಕಾವೇರಿ ವಿಷಯ ಕೋರ್ಟಿನಲ್ಲಿ ಬಗೆಹರಿಯಲ್ಲ ಎಂದು ನಾನು ಹೇಳಿದ್ದೆ. ಈಗ ತಮಿಳುನಾಡಿಗೆ ಅನುಕೂಲವಾಗಿದೆ. ನಮಗೆ ಅನ್ಯಾಯವಾಗಿದೆ. ಈ ತಿಕ್ಕಾಟ ಸಾಗುತ್ತಿರುವ ದಿಕ್ಕು ನೋಡಿದರೆ ಒಕ್ಕೂಟ ವ್ಯವಸ್ಥೆಗೆ ಗೌರವ ಸಿಗುವಂತಿಲ್ಲ. ಬಹಳ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ. ರಾಜ್ಯಸಭೆಯಲ್ಲಿ ಶ್ರೀ @H_D_Devegowda ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ಕಾವೇರಿ ಬಗ್ಗೆ ದನಿ ಎತ್ತಿದರು. ಮಾನ್ಯ ಸಭಾಪತಿಗಳು ಕುಳಿತೇ ಮಾತನಾಡಿ ಎಂದರೂ ಅವರು ಎದ್ದುನಿಂತು ರಾಜ್ಯದ ಪರ ಹಕ್ಕು ಮಂಡಿಸಿದರು. ಆದರೆ, ರಾಜ್ಯದ ಇತರೆ ಸದಸ್ಯರು, ಅದರಲ್ಲಿಯೂ ಶ್ರೀ @kharge ಅವರು ಮೌನವಾಗಿದ್ದರು! ಈ ಮೌನ ನನಗೆ ಅಚ್ಚರಿ ಉಂಟು ಮಾಡಿದೆ. ಅವರು @INCIndia ಅಧ್ಯಕ್ಷರು ಹೌದು. ಆದರೆ, ಕರ್ನಾಟಕದ ಹಿತದ ಬಗ್ಗೆ ಅವರ ನಿಲುವೇನು? ಎಂದು ಪ್ರಶ್ನಿಸಿದ್ದಾರೆ ಎಚ್‌ಡಿಕೆ
ಸೆ. 13ರಿಂದ ನಿತ್ಯ 5,000 ಕ್ಯೂಸೆಕ್ ನೀರು ಬಿಡಬೇಕು ಎಂದು ಪ್ರಾಧಿಕಾರ ಆದೇಶ ನೀಡಿದೆ. ಅದನ್ನೇ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಕೋರ್ಟ್ ಆದೇಶಕ್ಕೂ ಮೊದಲು ಪ್ರಾಧಿಕಾರ ಹೇಳಿತು ಎಂದು ವಿದ್ಯುತ್ ವೇಗದಲ್ಲಿ ನೀರು ಬಿಟ್ಟ ಸರ್ಕಾರ ಈಗ ಸುಪ್ರೀಂಕೋರ್ಟ್ ಹೇಳಿದೆ, ಇನ್ನೇನು ಮಾಡುವುದು ಎಂದು ಕೈ ಚೆಲ್ಲಿದೆ. ಮರು ಪರಿಶೀಲನಾ ಅರ್ಜಿಯನ್ನು ಕೋರ್ಟಿಗೆ ತುರ್ತಾಗಿ ಸಲ್ಲಿಸಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ನೀರು ಹರಿಸುವ ಅನಿವಾರ್ಯತೆ
ಪ್ರಾಧಿಕಾರ ಆದೇಶ ಕೊಟ್ಟಷ್ಟು ನೀರನ್ನು ಬಿಡುವಂತೆ ಕಾನೂನು ತಜ್ಞರು ಸಲಹೆ ಮಾಡಿದ್ದರು. ಅಲ್ಲಿಗೆ ಸುಪ್ರೀಂನಲ್ಲಿ ನ್ಯಾಯ ಸಿಗಲಾರದು ಎಂದು ಅವರು ಮೊದಲೇ ಕೈ ಚಲ್ಲಿದಂತೆ ಕಾಣುತ್ತದೆ. ಕೋರ್ಟ್ ಆದೇಶ ಬರುವ ತನಕ ನೀರು ಬಿಡಲು ಸಾಧ್ಯ ಇಲ್ಲ ಎಂದು ಸರಕಾರವು ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರಕ್ಕೆ ನೇರವಾಗಿ ಹೇಳಬೇಕಿತ್ತು. ಹಾಗೆ ಹೇಳಲಿಲ್ಲ. ಪರಿಣಾಮ; ಈವರೆಗೆ ನಾವು ಸಾಕಷ್ಟು ನೀರು ಹರಿಸಬೇಕಾಯಿತು. ಮುಂದೆಯೂ ಹರಿಸಬೇಕಾದ ಅನಿವಾರ್ಯತೆ ಸೃಷ್ಟಿ ಆಗಿದೆ ಎಂದಿದ್ದಾರೆ ಎಚ್‌ಡಿ ಕುಮಾರಸ್ವಾಮಿ.
ಸರಕಾರ ವಕೀಲರು ಹೇಳಿದರಂತೆ ಕೇಳಿ ಜನರ ಹಿತ ಕಡೆಗಣಿಸಿದೆ. ಯಾವ ಕಾರಣಕ್ಕೂ ನೀರು ಬಿಡಬಾರದಿತ್ತು. ಕೋರ್ಟ್ ಆದೇಶಕ್ಕೆ ಕಾದು ಕ್ರಮ ಜರುಗಿಸಬೇಕಿತ್ತು. ಊರು ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ವರ್ತಿಸಿದೆ ಸರಕಾರ.ವಕೀಲರ ಮಾತುಗಳನ್ನು ಕೇಳಿಕೊಂಡು ನೀರು ಬಿಡುತ್ತಾ ಹೋದರೆ ಅದಕ್ಕೆ ಕೊನೆ ಮೊದಲು ಇರುವುದಿಲ್ಲ. ಹಾಗಾದರೆ ಸರಕಾರ ಅನ್ನೊದು ಯಾಕೆ? ವಿಷಯ ಎಲ್ಲಿ ಶುರುವಾಯಿತೋ ಮತ್ತೆ ಅಲ್ಲಿಗೆ ಬಂದು ನಿಂತಿರುವುದಕ್ಕೆ ಯಾರು ಹೊಣೆ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ತಡ ಮಾಡಿದ್ದಕ್ಕೆ ತಕ್ಕ ಶಾಸ್ತಿ...
ಸರಕಾರ ಅನುಸರಿಸಿದ ವಿಳಂಬ ರಾಜಕಾರಣ ರಾಜ್ಯದ ಹಿತಕ್ಕೆ ಪೆಟ್ಟು ನೀಡಿದೆ. ತಮಿಳುನಾಡು ಸುಪ್ರೀಂ ಕೋರ್ಟ್ ಗೆ ಹೋದ ಕೂಡಲೇ ರಾಜ್ಯವೂ ಮೊರೆ ಹೋಗಬೇಕಿತ್ತು. ಮೀನಾಮೇಷ ಎಣಿಸುತ್ತಾ ತಡ ಮಾಡಿತು. ತಡ ಮಾಡಿದ್ದಕ್ಕೆ ತಕ್ಕ ಶಾಸ್ತಿ ಆಗಿದೆ. ವಿನಾಕಾರಣ ಕನ್ನಡಿಗರಿಗೆ ಶಿಕ್ಷೆ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 21, 2023
ಹೆಜ್ಜೆಹೆಜ್ಜೆಗೂ ತಪ್ಪು ಮಾಡಿದ್ದು @INCKarnataka ಸರಕಾರ. ಈ ಮಾತನ್ನು ನಾನು ಸರ್ವಪಕ್ಷ…
ಸಾಮಾನ್ಯ ಜ್ಞಾನವೂ ಇರಲಿಲ್ಲ
ಪ್ರಾಧಿಕಾರದ ಆದೇಶ ಬಂದೊಡನೆ ಮಧ್ಯರಾತ್ರಿಯೇ ಸುಪ್ರೀಂ ಕೋರ್ಟ್ ಗೆ ಹೋಗಿ, ನಮ್ಮ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ರಾತ್ರೋರಾತ್ರಿ ಪಿಟಿಷನ್ ಹಾಕಬೇಕಿತ್ತು. ಅದನ್ನು ಮಾಡದೇ ನೀರು ಬಿಡುತ್ತಾ ಕೂತಿತು ಸರಕಾರ. ನೀರು ಇಲ್ಲ ಎನ್ನುತ್ತಿದ್ದವರೂ ಈವರೆಗೆ ಹೇಗೆ ಬಿಟ್ಟಿರಿ ಎಂದು ಕೋರ್ಟ್ ಪ್ರಶ್ನೆ ಮಾಡುತ್ತದೆ ಎನ್ನುವ ಸಾಮಾನ್ಯ ಜ್ಞಾನವೂ ಸರಕಾರಕ್ಕೆ ಇರಲಿಲ್ಲ ಎಂದು ಆರೋಪಿಸಿದ್ದಾರೆ.

ಕೆಆರ್ ಎಸ್ ನಲ್ಲಿ ಈಗ ಇರುವುದೇ 20 ಟಿಎಂಸಿಗೂ ಕಡಿಮೆ ನೀರು. 3 ದಿನಕ್ಕೆ ಒಂದು ಟಿಎಂಸಿ ಹರಿದು ಹೋಗುತ್ತದೆ. ದಿನಕ್ಕೆ 5,000 ಕ್ಯೂಸೆಕ್ ಹರಿದರೆ 15 ದಿನಕ್ಕೆ 7 ಟಿಎಂಸಿ ಖಾಲಿ! ಆಗ ಉಳಿಯುವುದು 13 ಟಿಎಂಸಿ!! ಇದರಲ್ಲಿ ಡೆಡ್ ಸ್ಟೋರೇಜ್ 7 ಟಿಎಂಸಿ ಇರಬೇಕು. ಇನ್ನು ಉಳಿಯೋದು ಎಷ್ಟು? ಬೆಂಗಳೂರಿಗೆ ಇನ್ನೂ 9 ತಿಂಗಳಿಗೆ ಕುಡಿಯಲಿಕ್ಕೆ ಕನಿಷ್ಠ 13 ಟಿಎಂಸಿ ಬೇಕು. ಎಲ್ಲಿಂದ ಬರುತ್ತೆ ಆ ನೀರು? ಆದೇಶ ಪಾಲಿಸಲು ಕರ್ನಾಟಕ, ಅನುಭವಿಸಲು ತಮಿಳುನಾಡು ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆಲ್ಲ @INCKarnataka ಸರಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ ಮಾಜಿ ಸಿಎಂ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ.












Click it and Unblock the Notifications