Year Ender 2024: 2024ರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾದ ನಾಯಕರುಗಳು ಇವರೇ
ಬೆಂಗಳೂರು,ಡಿಸೆಂಬರ್ 23: 2024ರಲ್ಲಿ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹಲವು ವಿವಾದಾತ್ಮಕ ಹೇಳಿಕೆಗಳು ಮತ್ತು ಘಟನೆಗಳು ನಡೆದಿದ್ದು, ವಾದ ಪ್ರತಿವಾದಕ್ಕೆ ಸಾಕ್ಷಿಯಾಗಿದೆ. ರಾಜ್ಯದ ರಾಜಕೀಯ ನಾಯಕರು ಸೇರಿದಂತೆ ಸ್ವಾಮೀಜಿಗಳು ಕೂಡ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದರು. ಅಲ್ಲದೇ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ರಾಷ್ಟ್ರ ಮಟ್ಟದಲ್ಲೂ ಸದ್ದು ಮಾಡಿದೆ. ರಾಜ್ಯ ರಾಜಕೀಯದಲ್ಲಿ ವಿವಾದಾತ್ಮಕ ಹೇಳಿಕೆಯನ್ನ ನೀಡಿರುವ ನಾಯಕರು ಯಾರ್ಯಾರು ಎಂಬ ಕುರಿತು ಒಂದು ವರದಿ ಇಲ್ಲಿದೆ ನೋಡಿ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ
ರಾಜ್ಯ ಸಭೆ ಚುನಾವಣೆಯಲ್ಲಿ ಗೆದ್ದ ಖುಷಿಯ ನಡುವೆ ಕಾಂಗ್ರೆಸ್ನ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರು ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಈ ಸುದ್ದಿ ಕುರಿತು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿಯನ್ನ ನಡೆಸಿದ್ದು, ಕಾಂಗ್ರೆಸ್ ನಾಯಕರು ಇದ್ದನ್ನ ಸಮರ್ಥನೆ ಮಾಡಿಕೊಂಡಿದ್ದರು.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ಮಾಧ್ಯಮ ಗ್ರೂಪ್ನಲ್ಲಿ ಸಮಜಾಯಿಷಿ ನೀಡಿದ್ದರು. ಪಾಕಿಸ್ತಾನ ಪರ ಘೋಷಣೆ ಅಲ್ಲ', 'ಅದು ನಾಸಿರ್ ಸಾಬ್ ಜಿಂದಾಬಾದ್ ಎಂದು ಘೋಷಣೆ' ಎಂದು ಹೇಳಿದ್ದರು. ಬಳಿಕ FSL ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ದೃಢವಾಗಿತ್ತು. ಆರು ದಿನದ ಬಳಿಕ ಪೊಲೀಸರು ಮೂವರನ್ನ ಅರೆಸ್ಟ್ ಮಾಡಿದ್ದರು.
ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು
ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಒಕ್ಕಲಿಗ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಅಲ್ಲದೇ ಸ್ವಾಮೀಜಿಗಳ ಈ ಹೇಳಿಕೆ ರಾಜಕೀಯ ಸಮರಕ್ಕೆ ಕಾರಣವಾಗಿತ್ತು. ಸೈಯದ್ ಅಬ್ಬಾಸ್ ಎಂಬುವವರು ನೀಡಿದ ದೂರಿನ ಮೇರೆಗೆ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಕೂಡ ಜಾರಿ ಮಾಡಿದ್ದರು. ಆದರೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಉಪ್ಪಾರಪೇಟೆ ಪೊಲೀಸ್ ಉಪ ನಿರೀಕ್ಷಕರಿಗೆ ಪತ್ರ ಬರೆದಿದ್ದರು.
ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದ ಹೈಕೋರ್ಟ್ ನ್ಯಾಯಾಧೀಶ
ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಲ್ಲಿ ಇದೆಯಾ ಎಂಬ ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರಿಂಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ವಿಚಾರ ಕೂಡ ಸಾಕಷ್ಟು ವಿವಾದನ್ನುಂಟು ಮಾಡಿತ್ತು. ಹೈಕೋರ್ಟ್ ನ್ಯಾಯಾಧೀಶ ವಿ ಶ್ರೀಶಾನಂದ ಅವರು ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದರು.ಇದು ಸೋಶಿಯಲ್ ಮಿಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಬಳಿಕ ಸುಪ್ರಿಂಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ನ್ಯಾಯಾಧೀಶ ವಿ ಶ್ರೀಶಾನಂದ ಅವರಿಗೆ ಸರಿಯಾಗಿದೆ ತರಾಟೆ ತೆಗೆದುಕೊಂಡಿತ್ತು. ಬಳಿಕ ಅವರು ಕ್ಷಮೆಯಾಚಿಸಿದ್ದರು.
ಹೆಚ್ಡಿ ಕುಮಾರಸ್ವಾಮಿಗೆ ಕರಿಯ
ರಾಜ್ಯದಲ್ಲಿ ಮೂರು ಉಪಚುನಾವಣೆಯ ಸಂದರ್ಭದಲ್ಲಿ ಚನ್ನಪಟ್ಟಣ ಉಪಚುನಾವಣೆ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಯನ್ನು ಕರಿಯ ಎಂದು ಕರೆಯುವ ಮೂಲಕ ವಿವಾದವನ್ನು ಮೈಮೇಲೆ ಎದುಕೊಂಡಿದ್ದರು. ಚನ್ನಪಟ್ಟಣದಲ್ಲಿ ಯೋಗೇಶ್ವರ್ ಹೊಗಳುವ ಭರದಲ್ಲಿ ಕುಮಾರಸ್ವಾಮಿ ವಿರುದ್ಧ ಕಾಲಿಯಾ ಎಂದು ವಿವಾದಾತ್ಮಕ ಪದ ಬಳಸಿದ್ದರು.
ಸಚಿವ ಜಮೀರ್ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.ಈ ವೇಳೆ ಒಕ್ಕಲಿಗರ ಸಂಘ ಹೆಚ್ಡಿ ಕುಮಾರಸ್ವಾಮಿಗೆ ಬೆನ್ನಿಗೆ ನಿಂತಿತ್ತು. ಜಮೀರ್ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯನ್ನ ನಡೆಸಿದ್ರು. ಮತ್ತೊಂದೆಡೆ ಜಮೀರ್ ಹೇಳಿಕೆಯನ್ನು ಕಾಂಗ್ರೆಸ್ ಸರ್ಮಥಿಸಿಕೊಂಡಿತ್ತು. ಕೊನೆಗೆ ಸಚಿವ ಜಮೀರ್ ಅವರು ಕ್ಷಮೆ ಕೂಡ ಯಾಚಿಸಿದ್ದರು.
ಬಸವಣ್ಣನವರ ಬಗ್ಗೆ ಯತ್ನಾಳ್ ವಿವಾದಾತ್ಮಕ ಹೇಳಿಕೆ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸದಾ ಒಂದಿಲ್ಲೊಂದು ಕಾಂಟ್ರವರ್ಸಿಗಳನ್ನ ಮೈಮೇಲೆ ಎಳೆದುಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ವಿಶ್ವಜ್ಯೋತಿ ಬಸವಣ್ಣ ಅವರ ನಿಗೂಢ ಸಾವಿನ ಕುರಿತು ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣವಾಗಿದ್ದರು. ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ವಕ್ಫ್ ವಿರುದ್ಧ ಹೋರಾಟದ ವೇಳೆ ಮಾತನಾಡಿದ್ದ ಅವರು, ಬಸವಣ್ಣನವರ ಹಾಗೆ ನದಿಗೆ ಹಾರಿ ಸಾಯಬೇಕಾಗುತ್ತದೆ ಎಂದು ಹೇಳಿದ್ದರು.
ಸಚಿವೆ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ
ಇತ್ತೀಚೆಗಷ್ಟೇ ಬೆಳಗಾವಿ ಅಧಿವೇಧನದ ವೇಳೆ ವವಿಧಾನಪರಿಷತ್‌ನಲ್ಲಿ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಬಿಜೆಪಿ ನಾಯಕ ಸಿಟಿ ರವಿ, ಅಶ್ಲೀಲ ಪದ ಬಳಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ನಿಂದಿಸಿದ್ದಾರೆ ಅನ್ನೋ ಆರೋಪ ಕೇಳಿಬಂತು. ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡ್ತಿದ್ದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರೊಚ್ಚಿಗೆದ್ದಿದ್ದಾರೆ. ಸಿಟಿ ರವಿ 10 ಬಾರಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಅಂತಾ ಹೇಳಿದ್ದಾರೆ. ಇದೇ ವಿಚಾರವಾಗಿ ಸಿ ಪಿ ರವಿ ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಈ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು ನೀಡಿದ್ದಾರೆ.












Click it and Unblock the Notifications