ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಗುಳೆ ಹೊರಟ ಬಿಜೆಪಿ-ಜೆಡಿಎಸ್ ನಾಯಕರು: ಇವರೇ ನೋಡಿ ಜಂಪಿಂಗ್ ಸ್ಟಾರ್ಸ್
ಬೆಂಗಳೂರು, ಆಗಸ್ಟ್ 22: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯ ಅಖಾಡ ಈಗಾಗಲೇ ಕಾವೇರುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಗಳಿಸಿರುವ ಕಾಂಗ್ರೆಸ್ ತೀವ್ರ ಉತ್ಸಾಹದಲ್ಲಿದೆ. ಹೀನಾಯವಾಗಿ ಸೋಲು ಅನುಭವಿಸಿರುವ ಬಿಜೆಪಿ ವಿಚಲಿತವಾದಂತೆ ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತಕ್ಕೆ ಕೈಹಾಕಿದೆ.
ಆಪರೇಷನ್ ಹಸ್ತದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಹಲವು ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಪ್ರಮುಖವಾಗಿ 2019 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದ ನಾಯಕರು ಮತ್ತೆ ಕೈಹಿಡಿಯಲು ಮುಂದಾಗಿದ್ದಾರೆ ಎಂಬ ವದಂತಿಗಳು ದಟ್ಟವಾಗಿದೆ. ಕೆಲ ನಾಯಕರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸೇರಲು ಹೊರಟ ಬಿಜೆಪಿ-ಜೆಡಿಎಸ್ ಶಾಸಕರ ಹೆಸರು ತಿಳಿಯಿರಿ

ಎಸ್‌ಟಿ ಸೋಮಶೇಖರ್
ಯಶವಂತಪುರ ಶಾಸಕರಾಗಿರುವ ಎಸ್‌ಟಿ ಸೋಮಶೇಖರ್ 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದರು. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಬಿಎಸ್‌ವೈ ಹಾಗೂ ಬೊಮ್ಮಾಯಿ ಸರ್ಕಾರದಲ್ಲಿ ಸಹಕಾರ ಸಚಿವರಾಗಿ ಕೆಲಸ ಮಾಡಿದರು. ಈಗ ಮತ್ತೆ ಕಾಂಗ್ರೆಸ್‌ಗೆ ಮರಳಲು ಸಿದ್ದತೆ ನಡೆಸಿದ್ದಾರೆ. ಕಳೆದ ವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಹಾಡಿ ಹೊಗಳಿದ್ದರು. ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸೋಮಶೇಖರ್ ಹಿಂಬಾಲಕರು ಸೋಮವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ಬೈರತಿ ಬಸವರಾಜ
ಕೆಆರ್ ಪುರಂ ಶಾಸಕರಾಗಿರುವ ಬೈರತಿ ಬಸವರಾಜ ಅವರು 2019ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. ಬೊಮ್ಮಾಯಿ ಹಾಗೂ ಬಿಎಸ್‌ವೈ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದರು. ಇವರು ಸಿದ್ದರಾಮಯ್ಯ ಆಪ್ತರಲ್ಲಿ ಒಬ್ಬರು. ಈಗ ಮತ್ತೆ ಕಾಂಗ್ರೆಸ್‌ಗೆ ಮರಳಲು ಅಣಿಯಾಗಿದ್ದಾರೆ. ಕಳೆದ ವಾರ ನಡೆದ ಬಿಎಸ್ ಯಡಿಯೂರಪ್ಪ ಸಭೆಗೆ ಗೈರಾಗಿದ್ದರು. ಇವರ ಹಿಂಬಾಲಕರು ಸಹ ಸೋಮವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಶಿವರಾಮ ಹೆಬ್ಬಾರ್
ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್‌ಗೆ ಮರಳುವುದು ಬಹುತೇಕ ಖಚಿತವಾಗಿದೆ. 2019ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಇವರು ಬೊಮ್ಮಾಯಿ ಹಾಗೂ ಬಿಎಸ್‌ವೈ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ನಾಯಕರು ತಮ್ಮ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಹೆಬ್ಬಾರ್ ಆರೋಪಿಸಿದ್ದಾರೆ. ಕಾಂಗ್ರೆಸ್ ಸೇರುವ ಬಗ್ಗೆ ತಮ್ಮ ಬೆಂಬಲಿಗರ ಜೊತೆಗೆ ಈಗಾಗಲೇ ಮಾತುಕತೆ ನಡೆಸಿ ಅಭಿಪ್ರಾಯಗಳನ್ನು ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಡಾ. ಕೆ ಸುಧಾಕರ್
ಚಿಕ್ಕಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕರಾಗಿರುವ ಡಾ ಕೆ ಸುಧಾಕರ್ ಅವರು 2019 ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡರು. ಅವರು ಕಳೆದ ಸರ್ಕಾರದ ಅವಧಿಯಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಈಗ ಮತ್ತೆ ಕಾಂಗ್ರೆಸ್‌ಗೆ ಮರಳುವ ಬಗ್ಗೆ ವದಂತಿಗಳು ಹರಡಿಕೊಂಡಿವೆ. ಆದರೆ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕಾಂಗ್ರೆಸ್ ನಾಯಕರು ಸುಧಾಕರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ಮುಂದಿನ ನಿರ್ಧಾರಗಳು ಏನಾಗಲಿವೆ ಎಂದು ಕಾದು ನೋಡಬೇಕಿದೆ.

ನೆಹರು ಓಲೇಕಾರ
ಹಾವೇರಿ ಕ್ಷೇತ್ರದ ಮಾಜಿ ಶಾಸಕ ನೆಹರು ಓಲೇಕಾರ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳು ಹರಡಿಕೊಂಡಿವೆ. ನೆಹರು ಓಲೇಕಾರ ಅವರು ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನಿರಾಕರಿಸಲಾಯಿತು. ಈ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಿಂತು ಸೋತರು. ಈಗ ಕಾಂಗ್ರೆಸ್‌ನಿಂದ ಆಹ್ವಾನ ಬಂದಿದೆ ಎಂದು ಹೇಳಿಕೊಂಡಿದ್ದಾರೆ. ಅವರು ಕಾಂಗ್ರೆಸ್ ಸೇರಲಿರುವುದು ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ದಾಸರಹಳ್ಳಿ ಮಂಜುನಾಥ್
ದಾಸರಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಸೋಲು ಅನುಭವಿಸಿರುವ ಮಂಜುನಾಥ್ ಅವರಿಗೆ ಕಾಂಗ್ರೆಸ್ ಬಲೆ ಬೀಸಿದೆ. ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದರೂ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ಇದನ್ನು ಬಳಸಿಕೊಳ್ಳಲು ಕಾಂಗ್ರೆಸ್ ಯೋಜನೆ ರೂಪಿಸಿದೆ ಎಂಬ ಮಾತುಗಳು ಕೇಳಿಬಂದಿವೆ. ಮಂಜುನಾಥ್ ಕಾಂಗ್ರೆಸ್ ಸೇರಲಿದ್ದಾರೆಯೇ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದುನೋಡಬೇಕಿದೆ.

ಸಿಎಸ್ ಪುಟ್ಟರಾಜು
ಮೇಲುಕೋಟೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿರುವ ಸಿಎಸ್ ಪುಟ್ಟರಾಜು ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿರುವ ಪುಟ್ಟಣ್ಣಯ್ಯ ಒಕ್ಕಲಿಗರ ಪ್ರಭಾವಿ ನಾಯಕರೂ ಹೌದು. ಅವರು ಈ ಹಿಂದೆ ಮಂಡ್ಯ ಕ್ಷೇತ್ರದ ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಇದಲ್ಲದೇ, ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಮುನಿಸಿಕೊಂಡಿದ್ದ ನಾಯಕರಿಗೂ ಕಾಂಗ್ರೆಸ್ ಗಾಳ ಹಾಕಿದೆ. ಬಿಜೆಪಿ ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಎಂಪಿ ಕುಮಾರಸ್ವಾಮಿ, ಮಾಜಿ ಸಚಿವ ಶಂಕರ ಪಾಟೀಲ ಮನೇನಕೊಪ್ಪ, ಆಯನೂರು ಮಂಜುನಾಥ, ಕಟ್ಟಾ ಸುಬ್ರಮಣ್ಯ ನಾಯ್ಡು ಸೇರಿದಂತೆ ಹಲವರಿಗೆ ಕಾಂಗ್ರೆಸ್ ಬಲೆ ಬೀಸಿದೆ ಎಂದು ತಿಳಿದುಬಂದಿದೆ.












Click it and Unblock the Notifications