KSPCB; ಅಧ್ಯಕ್ಷ ಶಾಂತ್ ಎ. ತಿಮ್ಮಯ್ಯಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಕೋರ್ಟ್
ಬೆಂಗಳೂರು, ಸೆಪ್ಟೆಂಬರ್ 08; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಶಾಂತ್ ಎ. ತಿಮ್ಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರನ್ನು ಬದಲಿಸುವ ಕುರಿತಂತೆ ಸರ್ಕಾರ ಹೊರಡಿಸಿದ್ದ ತಿದ್ದುಪಡಿ ಆದೇಶಕ್ಕೆ ಮುಂದಿನ ವಿಚಾರಣೆ ತನಕ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನದಿಂದ ತಮ್ಮ ಅಧಿಕಾರವಧಿಯನ್ನು ಮೊಟಕುಗೊಳಿಸಿದ್ದ ಕ್ರಮವನ್ನು ಪ್ರಶ್ನಿಸಿ ಹಾಲಿ ಅಧ್ಯಕ್ಷ ಶಾಂತ್ ಎ. ತಿಮ್ಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಅಧ್ಯಕ್ಷರನ್ನು ಬದಲಿಸುವ ಕುರಿತಂತೆ ಸರ್ಕಾರ ಹೊರಡಿಸಿದ್ದ ತಿದ್ದುಪಡಿ ಆದೇಶಕ್ಕೆ ಮುಂದಿನ ವಿಚಾರಣೆ ತನಕ ಮಧ್ಯಂತರ ತಡೆ ನೀಡಲಾಗಿದೆ. ಜತೆಗೆ ಅವರಿಗೆ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಿದೆ, ಆದರೆ ಯಾವುದೇ ನಿರ್ಧಾರವನ್ನು ಕೈಗೊಳ್ಳುವಂತಿಲ್ಲ.
ಆದರೆ, ಮಧ್ಯಂತರ ತಡೆ ನೀಡಿದೆ ಎಂದ ಮಾತ್ರಕ್ಕೆ ಅರ್ಜಿದಾರರನ್ನು ಕೆಎಸ್‌ಪಿಸಿಬಿ ಅಧ್ಯಕ್ಷರನ್ನು ಅದೇ ಸ್ಥಾನದಲ್ಲಿ ಮುಂದುವರೆಸಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟ ಪಡಿಸಿದೆ. ಜತೆಗೆ, ಅರ್ಜಿದಾರರು ಸೂಕ್ತ ಆಯ್ಕೆ ಎಂಬುದರ ಕುರಿತು ಮತ್ತಷ್ಟು ವಿಚಾರಣೆ ನಡೆಸಬೇಕಾಗಿದೆ ಎಂದು ತಿಳಿಸಿದೆ.
ಅಲ್ಲದೆ, ಮುಂದಿನ ವಿಚಾರಣೆವರೆಗೂ ಕೆಎಸ್‌ಬಿಸಿಬಿ ಅಧ್ಯಕ್ಷರ ಹುದ್ದೆಯಲ್ಲಿ ಅವರು ಮುಂದಯವರೆಯಬಹುದಾಗಿದೆ. ಆದರೆ, ಯಾವುದೇ ರೀತಿಯ ನೀತಿ ನಿರೂಪಗಳ ಕುರಿತು ಕ್ರಮಕ್ಕೆ ಮುಂದಾಗುವಂತಿಲ್ಲ ಎಂದು ತಿಳಿಸಿದೆ. ಮುಂದಿನ ವಿಚಾರಣೆ ವೇಳೆಗೆ ಅರ್ಜಿದಾರರು ಮತ್ತು ಸರ್ಕಾರ ತಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಎರಡು ವಾರಗಳ ಕಾಲ ಕೋರ್ಟ್ ಮುಂದೂಡಿದೆ.
ಪ್ರಕರಣದ ಹಿನ್ನೆಲೆ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ಎ. ತಿಮ್ಮಯ್ಯ ಅವರ ಅವಧಿ ಮುಗಿದಿದೆ. ಹಾಗಾಗಿ, ಅವರ ಸ್ಥಾನಕ್ಕೆ ಹೊಸದಾಗಿ ನೇಮಕಾತಿ ನಡೆಸಬೇಕಿದೆ. ನೇಮಕಾತಿ ನಡೆಯುವರೆಗೂ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿಯನ್ನು ಕೆಎಸ್‌ಪಿಸಿಬಿ ಅಧ್ಯಕ್ಷರಾಗಿ ಹೆಚ್ಚುವರಿ ಜವಾಬ್ದಾರಿ ಹೊರಿಸಲಾಗಿದೆ ಎಂದು ತಿಳಿಸಿ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿತ್ತು.
ಈ ಹಿಂದೆ ಅಧ್ಯಕ್ಷರಾಗಿದ್ದ ಜಯರಾಂ ಅವರು ರಾಜೀನಾಮೆ ನೀಡಿದ್ದರು. ಅವರ ಸ್ಥಾನ ಮುಂದುವರೆದು ಶಾಂತ್ ಎ. ತಿಮ್ಮಯ್ಯ ನೇಮಕ ಮಾಡಲಾಗಿತ್ತು ಎಂದು ಸರ್ಕಾರ ತಿಳಿಸಿತ್ತು. ಅದನ್ನು ಪ್ರಶ್ನಿಸಿ ಶಾಂತ್ ಎ. ತಿಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಲ್ಲದೆ, ನ್ಯಾಯಾಲಯ ಚಿಕ್ಕಳ್ಳಾಪುರದ ಮಾಜಿ ಶಾಸಕ ಡಾ. ಸುಧಾಕರ್ ಅವರನ್ನು ಕೆಎಸ್‌ಪಿಸಿಬಿ ಅಧ್ಯಕ್ಷರ ಸ್ಥಾನಕ್ಕೆ ನೇಮಕ ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಅರ್ಜಿ ಮಾನ್ಯತೆ ಕಳೆದುಕೊಂಡ ಹಿನ್ನೆಲೆಯಲ್ಲಿ ಇತ್ಯರ್ಥ ಪಡಿಸಿದೆ.












Click it and Unblock the Notifications