ಆಸ್ತಿ ತೆರಿಗೆಯಿಂದ ವಿನಾಯಿತಿ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಆ. 19: ಕೊರೊನಾವೈರಸ್ ಸೋಂಕು ಭೀತಿಯಲ್ಲಿ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,ನಗರವಾಸಿಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡುವಂತೆ ಕೋರಿ ಹೈಕೋರ್ಟಿನಲ್ಲಿ ಪಿಐಎಲ್ ಹಾಕಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
Recommended Video
ಅರ್ಜಿದಾರರಾದ ವಕೀಲ ಕೆ ಗುರುದತ್ತ ಅವರು ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿ 2020-21ನೇ ಸಾಲಿನ ಆಸ್ತಿ ತೆರಿಗೆಯಿಂದ ವಿನಾಯಿತಿ ಕೋರಿದ್ದರು. ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್ ಕಿಣಗಿ ನೇತೃತ್ವದ ವಿಭಾಗೀಯ ಪೀಠವು ಈ ಪಿಐಎಲ್ ವಿಚಾರಣೆ ನಡೆಸಿ, ನೋಟಿಸ್ ಜಾರಿಗೊಳಿಸಿದೆ.
ಕೊವಿಡ್ 19 ಸಂಕಷ್ಟಕ್ಕೆ ಸಿಲುಕಿದವರಿಗೆ ಆರ್ಥಿಕ ಪುನಶ್ಚೇತನದ ಹೆಸರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ರೀತಿಯಲ್ಲಿ ಆರ್ಥಿಕ ನೆರವು ಒದಗಿಸಿವೆ ಆದರೆ, ವಸತಿ ಮತ್ತು ವಸತಿಯೇತರ ಕಟ್ಟಡಗಳ ಮಾಲೀಕರಿಗೆ ಈ ಸಂಕಷ್ಟದ ಸಂದರ್ಭದಲ್ಲಿ ಯಾವುದೇ ರೀತಿಯ ಸವಲತ್ತುಗಳ ಲಭ್ಯವಾಗಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಆಸ್ತಿ ಮಾಲೀಕರು ತಮ್ಮ ಬಾಡಿಗೆದಾರರನ್ನು ಬಾಡಿಗೆಗೆ ಒತ್ತಾಯಿಸುವುದಾಗಲಿ, ಕಟ್ಟಡದಿಂದ ತೆರವುಗೊಳಿಸುವುದಾಗಲಿ ಮಾಡುವಂತಿಲ್ಲ ಎಂದು ಕಂದಾಯ ಸಚಿವರು ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಒಂದು ವೇಳೆ ಇದನ್ನು ಉಲ್ಲಂಘಿಸಿದರೆ, ವಿಪತ್ತು ನಿರ್ವಹಣಾ ಕಾಯಿದೆಯಡಿ ಕ್ರಿಮಿನಲ್ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಆದರೆ ಇದು ಜಾರಿಯಾಗಿರುವ ಬಗ್ಗೆ ಖಾತ್ರಿಯಿಲ್ಲ. ಬಾ ಡಿಗೆದಾರರು ಬಾಡಿಗೆಯನ್ನು ನೀಡದೆ ಇರುವ ಪರಿಣಾಮ ಸಾಕಷ್ಟು ಸಂಖ್ಯೆಯಲ್ಲಿ ಆಸ್ತಿ ಮಾಲೀಕರು ಆಸ್ತಿ ತೆರಿಗೆಯನ್ನು ಪಾವತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಆಗಸ್ಟ್ 27ರಂದು ಮತ್ತೊಮ್ಮೆ ವಿಚಾರಣೆಗೆ ಬರಲಿದೆ.












Click it and Unblock the Notifications