ಹುಕ್ಕಾ ನಿಷೇಧ ಎತ್ತಿಹಿಡಿದ ಹೈಕೋರ್ಟ್; ಅರ್ಜಿಗಳು ವಜಾ
ಬೆಂಗಳೂರು, ಏಪ್ರಿಲ್ 23: ಹುಕ್ಕಾ ಸೇವನೆ, ಮಾರಾಟ ಮತ್ತು ಜಾಹೀರಾತು ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಆ ಮೂಲಕ ಕೋರ್ಟ್ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ಹುಕ್ಕಾ ಪಾರ್ಲರ್ ನಡೆಸುತ್ತಿದ್ದವರಿಗೆ ಕಾನೂನು ಹೋರಾಟದಲ್ಲಿ ತೀವ್ರ ಹಿನ್ನಡೆಯಾಗಿದೆ. ಅಲ್ಲದೆ, ಒಮ್ಮೆ ಹುಕ್ಕಾ ಸೇವನೆ 100 ಸಿಗರೇಟಿಗೆ ಸಮ ಎನ್ನುವ ಮಧ್ಯಂತರ ಅರ್ಜಿದಾರರ ವಾದವನ್ನು ನ್ಯಾಯಾಲಯ ಮಾನ್ಯ ಮಾಡಿದೆ.
ಬೆಂಗಳೂರಿನ ಆರ್. ಭರತ್ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ಪ್ರಕಟಿಸಿತು. "ಸಾರ್ವಜನಿಕ ಹಿತದೃಷ್ಟಿಯಿಂದ ಹುಕ್ಕಾ ನಿಷೇಧ ಸರಿ ಇದೆ. ಅಂತಹ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಇಷ್ಟು ದಿನ ಅವುಗಳ ನಿಯಂತ್ರಣ ಮಾಡಿರಲಿಲ್ಲ. ರಾಜ್ಯದಲ್ಲಿ ಸುಮಾರು 800 ಹುಕ್ಕಾ ಬಾರ್‌ಗಳಿದ್ದು ಅವುಗಳನ್ನು ನಿಯಂತ್ರಿಸುವುದು ಅಗತ್ಯ. ಆ ಕಾರಣಕ್ಕೆ ಸರ್ಕಾರದ ಆದೇಶ ಸರಿ ಇದೆ" ಎಂದು ಹೇಳಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರು, "ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ, ವಹಿವಾಟು, ಉತ್ಪಾದನೆ, ಪೂರೈಕೆ ಮತ್ತು ಹಂಚಿಕೆ ಕಾಯ್ದೆದೆ 2003 (ಸಿಒಟಿಪಿಎ) ಕೇಂದ್ರ ಸರ್ಕಾರದ ಕಾನೂನಾಗಿದ್ದು, ಇಲ್ಲಿ ಹುಕ್ಕಾ ನಿಷೇಧಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಆಹಾರ ಪೂರೈಸದ ನಿರ್ದಿಷ್ಟ ಸ್ಥಳಗಳಲ್ಲಿ ಹುಕ್ಕಾ ಸೇದಲು ಅವಕಾಶವಿದೆ" ಎಂದಿದ್ದರು.
ಸರ್ಕಾರದ ಸಮರ್ಥನೆ: ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, "ಸಿಒಟಿಪಿಎ ಸಿಗರೇಟುಗಳಿಗೆ ಸಂಬಂಧಿಸಿದ್ದು, ಹುಕ್ಕಾಗೂ ಇದಕ್ಕೂ ಸಂಬಂಧವಿಲ್ಲ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಹುಕ್ಕಾಗೆ ನಿಷೇಧ ವಿಧಿಸಲು ಸರ್ಕಾರಕ್ಕೆ ಅಧಿಕಾರವಿದೆ. ಸಂವಿಧಾನದ 47ನೇ ವಿಧಿಯ ಅನ್ವಯ ಸಾರ್ವಜನಿಕ ಆರೋಗ್ಯ ಸುಧಾರಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳುವ ಹೊಣೆಗಾರಿಕೆ ಹೊಂದಿದೆ" ಎಂದಿದ್ದರು.
ಇದಕ್ಕೆ ಅರ್ಜಿದಾರರ ಪರ ಮತ್ತೊಬ್ಬ ವಕೀಲರು, "ಹುಕ್ಕಾ ನಿಷೇಧವು ಸಂವಿಧಾನದ 14ನೇ ವಿಧಿಯಡಿ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಿದೆ. ಇದು ಸಿಗರೇಟು ಉತ್ಪಾದಕರ ಪರವಾಗಿದೆ. ಹುಕ್ಕಾ ಅಮಲು ಪಾನೀಯ ಅಥವಾ ಮಾದಕ ವಸ್ತುವಲ್ಲ. ಹುಕ್ಕಾ ನಿಷೇಧದಿಂದ ಸಂವಿಧಾನದ 14ನೇ ವಿಧಿ ಉಲ್ಲಂಘನೆಯಾಗಿದೆ. ಒಮ್ಮೆ ಗ್ರಾಹಕರ ಹುಕ್ಕಾ ನಿಷೇಧಿಸಿದರೆ ಅವರು ಸಿಗರೇಟು ಸೇದಲಿದ್ದಾರೆ. ಹುಕ್ಕಾದಲ್ಲಿ ಕನಿಷ್ಠ ಹರ್ಬಲ್ ಸಾರ ಸೇದುತ್ತಾರೆ. ಆದರೆ, ಯಾವುದೇ ತೆರನಾದ ಹರ್ಬಲ್ ಸಿಗರೇಟು ಇಲ್ಲ (ತಂಬಾಕನ್ನೇ ಸೇದಬೇಕು)" ಎಂದು ವಾದಿಸಿದ್ದರು.
ಇದಕ್ಕೆ ಧ್ವನಿಗೂಡಿಸಿದ ಹಿರಿಯ ವಕೀಲ ಕಿರಣ್ ಜವಳಿ ಅವರು, "ತಂಬಾಕು ಉತ್ಪನ್ನ ಬಳಸದ ಹರ್ಬಲ್ ಹುಕ್ಕಾ ಸೇದಲು ನಿಷೇಧ ಹೇರಬಾರದು" ಎಂದು ಹೇಳಿದ್ದರು.
ಈ ನಡುವೆ ರಾಜ್ಯ ಸರ್ಕಾರದ ನಿಷೇಧ ಆದೇಶ ಬೆಂಬಲಿಸಿದ್ದ ಇನ್ನೊಬ್ಬ ವಕೀಲರು, "ಹುಕ್ಕಾ ಸೇವೆಯು ಅಕ್ರಮ ವಹಿವಾಟು. ತಂಬಾಕು ಉತ್ಪಾದಕರು ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಾರೆ. ಆದರೆ, ಹುಕ್ಕಾ ವಹಿವಾಟು ನಡೆಸುವವರು ಯಾವುದೇ ತೆರಿಗೆ ಪಾವತಿಸುವುದಿಲ್ಲ. ಹತ್ತು ವರ್ಷಗಳಿಗೂ ಹೆಚ್ಚು ಕಾಲದಿಂದ ಹುಕ್ಕಾ ವಹಿವಾಟು ನಡೆಯುತ್ತಿದ್ದು, ಒಂದು ಹುಕ್ಕಾಗೆ ದಿನಕ್ಕೆ ರೂ. 250 ಆದರೆ, ದಿನಕ್ಕೆ 1000 ಕೋಟಿ ವ್ಯವಹಾರ ನಡೆಯಲಿದೆ. ವರ್ಷಕ್ಕೆ 36 ಲಕ್ಷ ಕೋಟಿ ವ್ಯವಹಾರ ನಡೆಯಲಿದೆ" ಎಂದಿದ್ದರು.
ಸರ್ಕಾರದ ಆದೇಶವೇನು?: ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ, ತಂಬಾಕು ರಹಿತ, ಸ್ವಾದಭರಿತ, ಸ್ವಾದರಹಿತ ಹುಕ್ಕಾ ಮೊಲಾಸಸ್ ಇದೇ ಮಾದರಿಯ ಇನ್ನಿತರ ಹೆಸರುಗಳಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ, ವ್ಯಾಪಾರವನ್ನು ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.
ಇದನ್ನು ಉಲ್ಲಂಘಿಸಿದವರ ವಿರುದ್ಧ ಸಿಒಟಿಪಿಎ, ಮಕ್ಕಳ ಆರೈಕೆ ಮತ್ತು ರಕ್ಷಣೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಗಳು, ಭಾರತೀಯ ದಂಡ ಸಂಹಿತೆ ಹಾಗೂ ಅಗ್ನಿ ನಿಯಂತ್ರಣ ಹಾಗೂ ಅಗ್ನಿ ಸುರಕ್ಷತೆ ಕಾಯಿದೆ ಪ್ರಕಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಫೆಬ್ರವರಿ 7ರಂದು ಅಧಿಸೂಚನೆ ಹೊರಡಿಸಿತ್ತು. ನಂತರ ಕಾಯಿದೆಯನ್ನು ರೂಪಿಸಿ ಜಾರಿಗೊಳಿಸಲಾಗಿದೆ.












Click it and Unblock the Notifications