ಹಿಜಾಬ್ ತೀರ್ಪು; ನಿಷೇಧಾಜ್ಞೆ, ಶಾಲಾ-ಕಾಲೇಜಿಗೆ ರಜೆ ಘೋಷಣೆ
ಬೆಂಗಳೂರು, ಮಾರ್ಚ್ 15; ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಮಂಗಳವಾರ ಅಂತಿಮ ತೀರ್ಪು ಪ್ರಕಟಿಸಲಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರ ನೇತೃತ್ವದ ತ್ರಿ ಸದಸ್ಯ ಪೀಠ ಮಂಗಳವಾರ ಬೆಳಗ್ಗೆ 10.30ಕ್ಕೆ ತೀರ್ಪು ನೀಡಲಿದೆ.
ಹಿಜಾಬ್ ಅರ್ಜಿಗಳ ಕುರಿತ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಸುತ್ತಮುತ್ತ ಸೋಮವಾರ ರಾತ್ರಿಯಿಂದಲೇ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಕಲಬುರಗಿಯಲ್ಲಿ ಶಾಲಾ-ಕಾಲೇಜಿಗೆ ರಜೆ; ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮಂಗಳವಾರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಮಾರ್ಚ್ 14ರ ರಾತ್ರಿ 8 ರಿಂದ ಮಾರ್ಚ್ 19ರ ಬೆಳಗ್ಗೆ 6 ಗಂಟೆ ವರೆಗೆ ಸಿ. ಆರ್. ಪಿ. ಸಿ. ಕಾಯ್ದೆ-1973 ಕಲಂ 144ರನ್ವಯ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಂಗಳವಾರ ಶಾಲಾ-ಕಾಲೇಜುಗಳಲ್ಲಿ ಪರೀಕ್ಷೆ ನಿಗದಿಯಾಗಿದಲ್ಲಿ, ಅದಕ್ಕೆ ರಜೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನ್ಯಾಯಾಲಯದ ತೀರ್ಪನ್ನು ಎಲ್ಲರೂ ಗೌರವಿಸಬೇಕು. ತೀರ್ಪಿನ ಪರ-ವಿರೋಧ ಕುರಿತು ಯಾರು ಮೆರವಣಿಗೆ, ಪ್ರತಿಭಟನೆ, ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಧಾರವಾಡ; ಧಾರವಾಡ ಜಿಲ್ಲೆಯಾದ್ಯಂತ (ಗ್ರಾಮೀಣ) ಮತೀಯ ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮಾರ್ಚ್ 15ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 19ರ ಬೆಳಗ್ಗೆ 6 ಗಂಟೆಯವರೆಗೆ ಸಿ. ಆರ್. ಪಿ. ಸಿ 1973ರ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲಾ ಗ್ರಾಮೀಣ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಡೆಸುವುದು ನಿಷೇಧಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮಾರ್ಚ್ 21ರ ತನಕ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ನಗರದಲ್ಲಿ 10 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶಾಲಾ-ಕಾಲೇಜುಗಳ ಬಳಿ, ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನ ನಿಗಾವಹಿಸಿದ್ದಾರೆ.
ಮೈಸೂರಿನಲ್ಲಿ ಮಾರ್ಚ್ 20ರ ತನಕ, ದಾವಣಗೆರೆಯಲ್ಲಿ ಮಾರ್ಚ್ 19ರ ತನಕ, ಕೊಡಗಿನಲ್ಲಿ ಮಾರ್ಚ್ 18ರ ತನಕ, ಚಿತ್ರದುರ್ಗದಲ್ಲಿ ಮಾರ್ಚ್ 16ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಚಾಮರಾಜನಗರ, ಹಾಸನ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿಯೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿಯೂ ಶಾಲಾ-ಕಾಲೇಜುಗಳ ಬಳಿ ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ.
ಜಾಲತಾಣಗಳ ಮೇಲೆ ಕಣ್ಣು; ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟವಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಜನರ ಮೇಲೆ ಸಹ ಪೊಲೀಸರು ನಿಗಾ ವಹಿಸಿದ್ದಾರೆ. ಶಾಂತಿ ಕದಡುವಂತಹ ಪೋಸ್ಟ್ ಹಾಕಿದರೆ ಅಂತಹವರ ಮೇಲೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಮಂಗಳವಾರ ನಿಗದಿಯಾಗಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಉಪನ್ಯಾಸಕರ ನೇಮಕಕ್ಕೆ ನಡೆಯುತ್ತಿರುವ ಲಿಖಿತ ಪರೀಕ್ಷೆ ನಿಗದಿಯಂತೆ ಮಂಗಳವಾರ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ಹೇಳಿದ್ದಾರೆ.












Click it and Unblock the Notifications