ಶಾಂತಿ ಮತ್ತು ಸುವ್ಯವಸ್ಥೆ ಬಗ್ಗೆ ಸಿಎಂ ಮಹತ್ವದ ಸಭೆ; ಮುಖ್ಯಾಂಶಗಳು
ಬೆಂಗಳೂರು, ಫೆಬ್ರವರಿ 11; ಹಿಜಾಬ್/ ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿಗಳು ಉನ್ನತ ಮಟ್ಟದ ಸಭೆಯನ್ನು ನಡೆಸಿದರು.
ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು, ಎಸ್‌ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.
ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.

ಸೋಮವಾರದಿಂದ ಪ್ರೌಢಶಾಲೆ ಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಸಭೆಯ ಮುಖ್ಯಾಂಶಗಳು
* ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳಿಗೆ ಎಸ್‌ಪಿ ಹಾಗೂ ಡಿಸಿಗಳು ಭೇಟಿ ನೀಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ಆಗದಂತೆ ಎಚ್ಚರ ವಹಿಸಬೇಕು.
* ಶಾಲಾ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಹಾಗೂ ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರು ನಿರಂತರ ಸಂಪರ್ಕ ಹೊಂದಿರಬೇಕು.
* ಜಿಲ್ಲೆಯ ಹಿರಿಯರು, ಪ್ರಮುಖರು, ಜನಪ್ರತಿನಿಧಿಗಳೊಂದಿಗೂ ಸಹ ನಿರಂತರ ಸಂಪರ್ಕ ಹೊಂದುವುದು.
* ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಾಂತಿ ಸಭೆಯನ್ನು ನಡೆಸಿ ಉಚ್ಚ ನ್ಯಾಯಾಲಯದ ಆದೇಶವನ್ನು ಅಕ್ಷರಶಃ ಪಾಲಿಸಬೇಕು.
* ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು.
* ಯಾವುದೇ ಒತ್ತಡಕ್ಕೆ ಮಣಿಯಬಾರದು. ಸಣ್ಣ ಘಟನೆಯನ್ನೂ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದು.
* ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಭೆಗಳನ್ನು ನಡೆಸಬೇಕು. ಹೊರಗಿನ ಪ್ರಚೋದನಗೆ ಒಳಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರದೇಶಗಳನ್ನು ಹಂಚಿಕೆ ಮಾಡಿಕೊಂಡು ನಿಗಾ ವಹಿಸಬೇಕು.
* ಎಲ್ಲಾ ರಾಜಕೀಯ ಪಕ್ಷಗಳನ್ನು, ಧಾರ್ಮಿಕ ಮುಖಂಡರನ್ನು ಸ್ಥಳೀಯ ಅಧಿಕಾರಿಗಳು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿ ಹಾಗೂ ಪ್ರಚೋದನಕಾರಿ ಸಂದೇಶಗಳು ಹರಡದಂತೆ ನಿಗಾ ವಹಿಸಬೇಕು.
* ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪ್ರಾಂಶುಪಾಲರು ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಬೇಕು.
* ಪ್ರತಿಯೊಬ್ಬರೂ ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಒಂದು ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರ ವಹಿಸಬೇಕು. ಸಮಾಜಘಾತುಕ ಶಕ್ತಿಗಳನ್ನು ಗುರುತಿಸಿ ಅವರ ಮೇಲೆ ನಿಗಾ ವಹಿಸಲಾಗಿದೆ ಎಂಬ ಸಂದೇಶ ರವಾನಿಸಬೇಕು.
* ಮೇಲಿನಿಂದ ಯಾವುದೇ ಆದೇಶಗಳಿಗೆ ಕಾಯದೇ, ಸಂದರ್ಭಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಬೇಕು. ಮಾಧ್ಯಮಗಳಿಗೆ ಜಿಲ್ಲೆಗಳಲ್ಲಿನ ವಸ್ತುಸ್ಥಿತಿಯನ್ನು ಸರಿಯಾಗಿ ವಿವರಿಸಬೇಕು. ತಪ್ಪು ಮಾಹಿತಿ ಹೋಗದಂತೆ ಎಚ್ಚರ ವಹಿಸಬೇಕು.
ಫೆಬ್ರವರಿ 16ರ ತನಕ ರಜೆ; ಹಿಜಾಬ್ ವಿವಾದದ ಹಿನ್ನಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆಬ್ರವರಿ 16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಣೆ ಮಾಡಲಾಗಿದೆ.












Click it and Unblock the Notifications