ಹಿಜಾಬ್ ಧಾರಣೆ ನಿರ್ಬಂಧ: ಹೈಕೋರ್ಟ್ ವಿಚಾರಣೆ ಮೇಲೆ ಎಲ್ಲರ ಕಣ್ಣು
ಬೆಂಗಳೂರು, ಫೆಬ್ರವರಿ 07: ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಆರಂಭವಾದ ಹಿಜಾಬ್ ಧಾರಣೆ ರಾಜ್ಯವ್ಯಾಪ್ತಿ ಹಬ್ಬುತ್ತಿರುವುದರ ಜೊತೆಗೆ ವಿವಾದ ದಿನದಿಂದ ದಿನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಈಗಾಗಲೇ ಸಲ್ಲಿಕೆಯಾಗಿರುವ ಎರಡು ಅರ್ಜಿಗಳ ಜೊತೆಗೆ ಇದೀಗ ಕುಂದಾಪುರ ತಾಲೂಕಿನ ಭಂಡಾರ್ಕರ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತೃತೀಯ ಬಿಬಿಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಸುಹಾ ಮೌಲಾನಾ ಹಾಗೂ ಪ್ರಥಮ ಬಿಬಿಎ ವಿದ್ಯಾರ್ಥಿನಿ ಐಶಾ ಅಲೀಫಾ ಕೌಸರ್ ತಮ್ಮ ತಾಯಂದಿರ ಮೂಲಕ ಅರ್ಜಿ ಸಲ್ಲಿಸಿದ್ದು, ಅದು ಇನ್ನೂ ವಿಚಾರಣೆಗೆ ಬರಬೇಕಿದೆ.

ನಾಳೆ(ಫೆ.8) ವಿಚಾರಣೆ: ಹಿಜಾಬ್ ವಿವಾದ ಸಂಬಂಧ ಈಗಾಗಲೇ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠದ ಮುಂದೆ ನಾಳೆ (ಮಂಗಳವಾರ) ವಿಚಾರಣೆಗೆ ಬರಲಿವೆ.
ಕಳೆದ ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಅಡ್ವೊಕೇಟ್ ಜನರಲ್ ವಾದ ಮಂಡಿಸಲಿದ್ದಾರೆ ಎಂದು ಸರ್ಕಾರಿ ವಕೀಲರು ಸಮಯ ಕೇಳಿದ್ದರಿಂದ ನ್ಯಾಯಾಲಯ ಪ್ರತಿವಾದಿಗಳಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿಪಡಿಸಿತ್ತು.
ಹೊಸದಾಗಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ವಿದ್ಯಾರ್ಥಿನಿಯರು, ಫೆ.3ರಂದು ಏಕಾಏಕಿ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಹಿಬಾಜ್ ಧರಿಸಿ ಕಾಲೇಜಿಗೆ ಪ್ರವೇಶಿಸಬಾರದು ಎಂದು ಹೇಳಿದ್ದಾರೆ. ಮತ್ತು ಈ ಸಂಬಂಧ ಸರಕಾರದ ಆದೇಶವಿದೆ ಎಂದು ಕಾಲೇಜಿಗೆ ಪ್ರವೇಶ ನಿರ್ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸ್ಥಳೀಯ ಶಾಸಕ ಶ್ರೀನಿವಾಸ ಶೆಟ್ಟಿ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಂಶುಪಾಲರು ಹೇಳಿದ್ದಾರೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ ಅಥವಾ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯಿದೆಯಡಿ ಕಾಲೇಜಿನ ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ಸಂಬಂಧ ಯಾವುದೇ ನಿಯಮ ಮಾಡಿಲ್ಲ. ಆದರೂ ತರಗತಿಗಳಿಗೆ ನಿರ್ಬಂಧಿಸಿರುವುದು ಅರ್ಜಿದಾರರ ಶಿಕ್ಷಣದ ಹಕ್ಕು ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಹಿಜಾಬ್ ಧರಿಸಲು ಯಾವುದೇ ನಿರ್ಬಂಧ ವಿಧಿಸದಂತೆ ಭಂಡಾರ್ಕರ್ ಕಾಲೇಜು ಪ್ರಾಂಶುಪಾಲರಿಗೆ ನಿರ್ದೇಶಿಸಲು ಮಂಗಳೂರು ವಿವಿ ರಿಜಿಸ್ಟ್ರಾರ್‌ಗೆ ಆದೇಶಿಸಬೇಕು ಎಂದು ಕೋರಿದ್ದಾರೆ.
ಬಲವಂತವಾಗಿ ತರಗತಿಯಿಂದ ದೂರ ಉಳಿಯುವಂತೆ ಮಾಡಿರುವ ದಿನಗಳಿಗೆ ಅಥವಾ ಅರ್ಜಿ ವಿಲೇವಾರಿಯಾಗುವವರೆಗೆ ಹಾಜರಾತಿ ನೀಡಲು ಕಾಲೇಜು ಆಡಳಿತ ಮಂಡಳಿಗೆ ನಿರ್ದೇಶಿಸುವಂತೆ ವಿವಿ ರಿಜಿಸ್ಟ್ರಾರ್‌ಗೆ ಆದೇಶಿಸಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.












Click it and Unblock the Notifications