Breaking; ಕಾಲೇಜುಗಳಿಗೆ ನೀಡಿರುವ ರಜೆ ಫೆ.16ರ ತನಕ ವಿಸ್ತರಣೆ
ಬೆಂಗಳೂರು, ಫೆಬ್ರವರಿ 11; ಹಿಜಾಬ್/ ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಸೋಮವಾರದಿಂದ ಹೈಸ್ಕೂಲ್‌ಗಳು ಆರಂಭವಾಗಲಿವೆ. ಆದರೆ ಕಾಲೇಜುಗಳಿಗೆ ನೀಡಿದ ರಜೆಯನ್ನು ಫೆಬ್ರವರಿ 14ರ ತನಕ ವಿಸ್ತರಣೆ ಮಾಡಲಾಗಿದೆ.
ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು, ಎಸ್‌ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಹಿಂಸಾಚಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳಿಗೆ ಅನ್ವಯವಾಗುವಂತೆ ನೀಡಿರುವ ರಜೆಯನ್ನು ಫೆ.16 ವರೆಗೆ ಮುಂದುವರೆಸಲಾಗಿದೆ.
— Dr. Ashwathnarayan C. N. (@drashwathcn) February 11, 2022
ಕಾನೂನು ಸುವ್ಯವಸ್ಥೆ ಕಾಪಾಡಬೇಕಾಗಿ ಕೋರಿಕೆ. ಮಾಹಿತಿಗಾಗಿ: pic.twitter.com/sa2a5jKxM4
ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಟ್ವೀಟ್ ಮಾಡಿದ್ದು, ರಜೆ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ. "ರಾಜ್ಯದಲ್ಲಿ ಹಿಂಸಾಚಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳಿಗೆ ಅನ್ವಯವಾಗುವಂತೆ ನೀಡಿರುವ ರಜೆಯನ್ನು ಫೆ.16 ವರೆಗೆ ಮುಂದುವರೆಸಲಾಗಿದೆ" ಎಂದು ತಿಳಿಸಿದ್ದಾರೆ.
ಸರ್ಕಾರದ ಆದೇಶ; ಶುಕ್ರವಾರ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ. ಹಿರೇಮಠ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಇದೇ ಸಮ ಸಂಖ್ಯೆಯ ದಿನಾಂಕ 8/2/2022ರ ಸುತ್ತೋಲೆಯನ್ನು ಮುಂದುವರೆಸುತ್ತಾ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ಫೆಬ್ರವರಿ 2022ರ ದಿನಾಂಕ 12, 13ರ ಭಾನುವಾರ ರಜಾ ದಿನ ಸಹಿತವಾಗಿ 14, 15 ಮತ್ತು 16ರ ವರೆಗೆ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಣೆ ಮಾಡಲಾಗಿದೆ.
ಮುಂದುವರೆದು ಸದರಿ ದಿನಾಂಕಗಳಂದು ಪರೀಕ್ಷೆಗಳು ನಡೆಯುತ್ತಿದ್ದಲ್ಲಿ ಯಥಾವತ್ತಾಗಿ ನಡೆಯಲಿವೆ ಹಾಗೂ ಆನ್‌ಲೈನ್ ತರಗತಿಗಳ ಮೂಲಕ ವ್ಯಾಸಂಗ ಕ್ರಮವನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.












Click it and Unblock the Notifications