Hijab Verdict; ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ ಅರ್ಜಿದಾರರು

ಬೆಂಗಳೂರು, ಮಾರ್ಚ್ 15: ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ. ಸರ್ಕಾರದ ವಸ್ತ್ರ ಸಂಹಿತೆ ಆದೇಶವನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಕೋರ್ಟ್ ಆದೇಶದಲ್ಲಿ ಹೇಳಿದೆ.

ಮಂಗಳವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ತ್ರಿ-ಸದಸ್ಯ ಪೀಠದ ತೀರ್ಪು ಪ್ರಕಟವಾಯಿತು.

Recommended Video

      ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ಮಹತ್ವದ ತೀರ್ಪು | Oneindia Kannada

      ಹಿಜಾಬ್ ನಿರ್ಬಂಧ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿತು.

      Hijab Verdict Students To Move Supreme Court

      ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ಜನವರಿ 31ರಂದು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್ ಫೆಬ್ರವರಿ 11ರಂದು ಮಧ್ಯಂತರ ಆದೇಶ ನೀಡಿತ್ತು. ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಅಂತಿಮ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಅಂತಿಮ ತೀರ್ಪು ಪ್ರಕಟವಾಗಿದೆ.

      ಹೈಕೋರ್ಟ್ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

      ಕರ್ನಾಟಕ ಹೈಕೋರ್ಟ್ ತೀರ್ಪಿನ ಬಳಿಕ ಮಾತನಾಡಿದ ಅರ್ಜಿದಾರರು ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

      ಅರ್ಜಿದಾರರ ಪರವಾಗಿ ಮಾತನಾಡಿದ ವಕೀಲ ಶತಭಿಷ ಶಿವಣ್ಣ, "ರಾಜ್ಯ ಸರ್ಕಾರದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ನ್ಯಾಯಾಲಯದ ತೀರ್ಪಿನ ಪ್ರತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ" ಎ ಎಂದರು.

      ಹಿಜಾಬ್ ವಿವಾದದ ತೀರ್ಪನ್ನು ಕರ್ನಾಟಕ ಹೈಕೋರ್ಟ್ 6 ನಿಮಿಷದ ಕಲಾಪದಲ್ಲಿ ಪ್ರಕಟಿಸಿತು. ಒಟ್ಟು 129 ಪುಟಗಳ ತೀರ್ಪು ನೀಡಲಾಗಿದೆ. ತೀರ್ಪಿನ ಪ್ರತಿಯನ್ನು ವಕೀಲರು ಅಧ್ಯಯನ ಮಾಡಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.

      ಹೈಕೋರ್ಟ್ ತೀರ್ಪಿನ ಬಳಿಕ ಮಾತನಾಡಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, "ಕರ್ನಾಟಕ ಹೈಕೋರ್ಟ್ ಹಿಜಾಬ್ ನಿಷೇಧ ಎತ್ತಿಹಿಡಿದಿದೆ. ವೈಯಕ್ತಿಕ ಆಯ್ಕೆಗಿಂತ ಸಂಸ್ಥೆಗಳ ಶಿಸ್ತು ಮುಖ್ಯ ಎಂದು ಹೇಳಿದೆ" ಎಂದರು.

      ತೀರ್ಪಿನ ಬಳಿಕ ಪ್ರತಿಕ್ರಿಯೆ ನೀಡಿರುವ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, "ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ಕರ್ನಾಟಕ ಹೈ ಕೋರ್ಟ್‌ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇನೆ. ಈ ನೆಲ, ನೆಲದ ಕಾನೂನು ಅಂತಿಮ" ಎಂದು ಹೇಳಿದರು.

      ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಮಾತನಾಡಿ, "ಕರ್ನಾಟಕ ಉಚ್ಚ ನ್ಯಾಯಲಯ ಹಿಜಾಬ್ ಕುರಿತು ನೀಡಿರುವ ತೀರ್ಪು ಸ್ವಾಗತಾರ್ಹ. ಹಿಜಾಬ್ ಸಮವಸ್ತ್ರದ ಭಾಗವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಈ ತೀರ್ಪು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು. ಹಿಜಾಬ್ ಧರಿಸಬೇಕು ಎಂದು ಶಾಲೆಯಿಂದ ದೂರವುಳಿದಿರುವ ವಿದ್ಯಾರ್ಥಿನಿಯರು ಕೂಡಲೇ ಶಾಲೆಗೆ ತೆರಳಬೇಕು ಎಂದು ಕೋರುತ್ತೇನೆ" ಎಂದರು.

      ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, "ಐತಿಹಾಸಿಕ ತೀರ್ಮಾನವನ್ನು ಹೈಕೋರ್ಟ್‌ ನೀಡಿದೆ. ಸರ್ಕಾರ ರೂಪಿಸಿರುವ ನಿಯಮದ ಪರವಾಗಿ ತೀರ್ಪು ಬಂದಿದೆ. ಹೆಣ್ಣುಮಕ್ಕಳು ಶಿಕ್ಷಣ ಪಡೆಯುವ ಹಕ್ಕನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ತೀರ್ಪನ್ನು ದೇಶ, ವಿದೇಶಗಳು ಗಮನಿಸುತ್ತಿದ್ದವು. ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು" ಎಂದು ಮನವಿ ಮಾಡಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+